ಗುರುವಾರ , ಮೇ 19, 2022
21 °C
ರೈತರ ಹೋರಾಟ ಬೆಂಬಲಿಸಿ ರೈಲು ರೋಕೋ ಚಳವಳಿ

‌ಪೊರಕೆ ಹಿಡಿದು ಪ್ರತಿಭಟನೆ; ರೈತರ ಹೋರಾಟ ಬೆಂಬಲಿಸಿ ರೈಲು ರೋಕೋ ಚಳವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಂಗಾರಪೇಟೆ: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ಕರೆ ನೀಡಿದ್ದ ರೈಲು ರೋಕೋ ಪ್ರಯುಕ್ತ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ವಿವಿಧ ಸಂಘಟನೆಗಳಿಂದ ಗುರುವಾರ ಪ್ರತಿಭಟನೆ ನಡೆಯಿತು.

ರೈತ ಮುಖಂಡರು ಹಾಗೂ ಸಿಐಟಿಯು ಸಂಘಟನೆಯ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಬ್ಯಾರಿಕೇಡ್‌ಗಳನ್ನು ತಳ್ಳಿ ನಿಲ್ದಾಣದೊಳಕ್ಕೆ ನುಗ್ಗಲು ಯತ್ನಿಸಿದರು. ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಪೊಲೀಸರು 30ಕ್ಕೂ ಹೆಚ್ಚಿನ ಮುಖಂಡರನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

ಇದಕ್ಕೂ ಮುನ್ನ ರೈತ ಸಂಘದ ರಾಜ್ಯ ಉಪಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತ ಮುಖಂಡರು, ಪ್ರಧಾನಿ ಮೋದಿ ಭಾವಚಿತ್ರಕ್ಕೆ ಪೊರಕೆಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಬಿಜೆಪಿ ಸರ್ಕಾರ ಜನವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಿದೆ. ಇದರಿಂದ ರೈತರು, ಜನರು, ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಕೂಡಲೇ ವಿವಾದಾತ್ಮಕ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು.

ರೈತ ಹೋರಾಟದಲ್ಲಿ 200ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಆದರೂ, ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆದಿಲ್ಲ. ಇನ್ನಾದರು ರೈತರೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.

ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ಅಗತ್ಯವಸ್ತುಗಳ ತಿದ್ದುಪಡಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. 

ನರೇಂದ್ರ ಮೋದಿ ಅವರು ಪ್ರತಿಭಟನೆ ಮಾಡುತ್ತಿರುವ ರೈತರ ಬಳಿ ತೆರಳಿ ಅವರ ಕಷ್ಟಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಬದಲಿಗೆ ಅಂಬಾನಿ ಮಗಳಿಗೆ ಜನಿಸಿದ ಮಗು ನೋಡಲು ತೆರಳುವುದು ಸೂಕ್ತವೇ? ಎಂದು ರೈತ ಮುಖಂಡ ರಾಮೇಗೌಡ ಪ್ರಶ್ನಿಸಿದರು.

ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಮಾಡುತ್ತಿದ್ದು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್‌, ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದೆ. ಮಧ್ಯಮ ವರ್ಗದ ಜನರು ಬದುಕು ದುಸ್ತರವಾಗಿದೆ. ಮುಂದಿನ ಚುನಾವಣೆಯಲ್ಲಿ ಜನರು ತಕ್ಕಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು. 

ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಜನಾಧಿಕಾರ ಸಂಘಟನೆ ಮತ್ತು ದಲಿತ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು.

ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ, ರೈತ ಮುಖಂಡ ಪಿ. ಶ್ರೀನಿವಾಸ್, ಸೂರಿನಾರಾಯಣ, ಶ್ರೀರಾಮ್, ಸಿ.ಆರ್. ಮೂರ್ತಿ, ಜನಾಧಿಕಾರ ಸಂಘಟನೆಯ ರಾಜಪ್ಪ, ಕಾರ್ಮಿಕ ಮುಖಂಡರಾದ ತಂಗರಾಜ್, ಅಲೀಕ್, ಹನುಮಂತರಾಯ, ವಿಜಿಕುಮಾರ್, ನಾರಾಯಣಗೌಡ ನೇತೃತ್ವದಲ್ಲಿ ಜಿಲ್ಲಾ ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ತಾಲ್ಲೂಕು ಅಧ್ಯಕ್ಷ ಐತಂಡಹಳ್ಳಿ ಮುನ್ನ, ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಕಿರಣ್, ತಾಲ್ಲೂಕು ಅಧ್ಯಕ್ಷ ಚಲಪತಿ, ಜಿಲ್ಲಾ ಸಂಚಾಲಕ ಕೆ. ಶ್ರೀನಿವಾಸಗೌಡ, ಜಿಲ್ಲಾ ಉಪಾಧ್ಯಕ್ಷ ಚಾಂದ್ ಬಾಷಾ, ಈಕಂಬಳ್ಳಿ ಮಂಜುನಾಥ, ಜಮೀರ್‌ ಪಾಷಾ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಎ. ನಳಿನಿಗೌಡ, ವಿ. ನಳಿನಿ, ಭಾಗ್ಯಾ, ಚೌಡಮ್ಮ, ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು