ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೈಕ್ಷಣಿಕ ಪ್ರಗತಿಗೆ ಉದಯ್‌ಕುಮಾರ್‌ ಶ್ರಮ

ರಾಜ್ಯ ತಿಗಳ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ್ ಮೆಚ್ಚುಗೆ
Last Updated 24 ಸೆಪ್ಟೆಂಬರ್ 2020, 15:43 IST
ಅಕ್ಷರ ಗಾತ್ರ

ಕೋಲಾರ: ‘ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾಗಿರುವ ಉದಯ್‌ಕುಮಾರ್‌ ಅವರು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ’ ಎಂದು ರಾಜ್ಯ ತಿಗಳ (ವಹ್ನಿಕುಲ ಕ್ಷತ್ರಿಯ) ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ್ ಅಭಿಪ್ರಾಯಪಟ್ಟರು.

ರಾಜ್ಯ ತಿಗಳ (ವಹ್ನಿಕುಲ ಕ್ಷತ್ರಿಯ) ಸಂಘವು ಇಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಉದಯ್‌ಕುಮಾರ್ ಅವರನ್ನು ಅಭಿನಂದಿಸಿ ಮಾತನಾಡಿ, ‘ಈ ಹಿಂದೆ ಬೆಂಗಳೂರು ವಿ.ವಿಗೆ ಬೆಂಗಳೂರು ನಗರ ಮತ್ತು ಗ್ರಾಮೀಣ ಜಿಲ್ಲೆಯವರನ್ನು ಸಿಂಡಿಕೇಟ್ ಸದಸ್ಯರಾಗಿ ಆಯ್ಕೆ ಮಾಡಲಾಗುತ್ತಿತ್ತು. ಸರ್ಕಾರ ಇದೀಗ ಉದಯ್‌ಕುಮಾರ್‌ ಅವರನ್ನು ಆಯ್ಕೆ ಮಾಡುವ ಮೂಲಕ ಜಿಲ್ಲೆಗೂ ಅವಕಾಶ ಕಲ್ಪಿಸಿದೆ’ ಎಂದರು.

‘ರಾಜಕಾರಣದಿಂದ ದೂರವಿರುವ ಉದಯ್‌ಕುಮಾರ್ ಅವರು ಶಿಕ್ಷಣ ಸೇವೆ ಮೂಲಕ ಗುರುತಿಸಿಕೊಂಡಿದ್ದಾರೆ. ಗ್ರಾಮೀಣ ಪ್ರದೇಶದ ಉದಯ್‌ಕುಮಾರ್‌ ಅವರು ಶಿಕ್ಷಣ ಸಂಸ್ಥೆ ಆರಂಭಿಸಿ ಸಾವಿರಾರು ಮಂದಿಗೆ ಶಿಕ್ಷಣ ನೀಡುವ ಮೂಲಕ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಜಿಲ್ಲೆಯ ಗಡಿ ಭಾಗದ ಮಾಸ್ತಿ ಗ್ರಾಮದ ಸಮೀಪದ ಹಳ್ಳಿಯಲ್ಲಿ ಹುಟ್ಟಿ ಶಿಕ್ಷಣ ಪಡೆದು ಹಲವು ಕಾಲೇಜುಗಳಲ್ಲಿ ಉಪನ್ಯಾಸಕನಾಗಿ ಸೇವೆ ಸಲ್ಲಿಸಿದೆ. ನಂತರ 2008ರಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ ಸಹ್ಯಾದ್ರಿ ಕಾಲೇಜು ಆರಂಭಿಸಿ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದೇನೆ. ಕಾಲೇಜಿನಲ್ಲಿ 1,800 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ’ ಎಂದು ಉದಯ್‌ಕುಮಾರ್‌ ಹೇಳಿದರು.

ಬದುಕು ರೂಪಿಸಿ: ‘ಪೋಷಕರು ತಮ್ಮ ಮಕ್ಕಳಿಗೆ ಆಸ್ತಿ ಸಂಪಾದಿಸಿಡುವ ಬದಲು ಮಕ್ಕಳನ್ನೇ ಆಸ್ತಿಯಾಗಿ ಮಾಡಬೇಕು. ಮಕ್ಕಳನ್ನು ಶಿಕ್ಷಣ ಕೊಡಿಸಿ ಸುಶಿಕ್ಷಿತರಾಗಿ ಮಾಡಿ ಅವರ ಬದುಕು ರೂಪಿಸಬೇಕು. ಶಿಕ್ಷಣ ಪಡೆದು ಸಮಾಜಕ್ಕೆ ಕೈಲಾದ ಸಹಾಯ ಮಾಡಬೇಕು’ ಎಂದು ಕೋರಿದರು.

‘ತಿಗಳ ಸಮುದಾಯದವರು ಎಲ್ಲಾ ರಂಗಗಳಲ್ಲೂ ಹಿಂದುಳಿದಿದ್ದಾರೆ. ಸಮುದಾಯದ ಬಡ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಸರ್ಕಾರ ನನಗೆ ಸಿಂಡಿಕೇಟ್ ಸದಸ್ಯನಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಿದೆ. ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ’ ಎಂದು ಭರವಸೆ ನೀಡಿದರು.

ರಾಜ್ಯ ತಿಗಳ (ವಹ್ನಿಕುಲ ಕ್ಷತ್ರಿಯ) ಸಂಘದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಎಂ.ವಿ.ನಾರಾಯಣಸ್ವಾಮಿ, ಉಪಾಧ್ಯಕ್ಷ ನಾರಾಯಣಸ್ವಾಮಿ, ಕಾರ್ಯಾಧ್ಯಕ್ಷ ಜಿ.ವಿ.ಕುಮಾರ್, ಖಜಾಂಚಿ ಡಿ.ಎನ್.ಗೋಪಾಲ್, ಕಾರ್ಯದರ್ಶಿ ರಘು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT