ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

250 ಆರೋಗ್ಯ ಕೇಂದ್ರ ಮೇಲ್ದರ್ಜೆಗೆ

ಎಲ್ಲ ದಿನಗಳಲ್ಲೂ ಹಗಲು ರಾತ್ರಿ ವೈದ್ಯಕೀಯ ಸೇವೆ: ಸಚಿವರ ಭರವಸೆ
Last Updated 2 ಸೆಪ್ಟೆಂಬರ್ 2021, 3:56 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ರಾಜ್ಯದಲ್ಲಿ 250ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಆ ಕೇಂದ್ರಗಳಲ್ಲಿ ವಾರದ ಎಲ್ಲ ದಿನಗಳಲ್ಲೂ ಹಗಲು ರಾತ್ರಿ ವೈದ್ಯಕೀಯ ಸೇವೆ ಒದಗಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ತಾಲ್ಲೂಕಿನ ಬೈರಗಾನಪಲ್ಲಿ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಮೇಲ್ದರ್ಜೆಗೆ ಏರಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮ ಚಿಕಿತ್ಸೆ ಮಾತ್ರವಲ್ಲದೆ, ಅಗತ್ಯ ಬಿದ್ದಾಗ ಶಸ್ತ್ರ ಚಿಕಿತ್ಸೆ ನಡೆಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.

ಕೋವಿಡ್ ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು. ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದ ಸೇವೆ ಪಡೆದುಕೊಳ್ಳಬೇಕು
ಎಂದು ಹೇಳಿದರು.

ಈ ಸಂದರ್ಭದಲ್ಲಿ, ಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಹಾಗೂ ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಅವರನ್ನು ಗೆಲ್ಲಿಸಿ ಎಂದು ಕ್ಷೇತ್ರದ ಮತದಾರರಿಗೆ ಕರೆ ಕೊಡುವುದರ ಮೂಲಕ ಬಿಜೆಪಿ ಮುಖಂಡರು ಹುಬ್ಬೇರಿಸುವಂತೆ ಮಾಡಿದರು.

‘ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರು ತಾಲ್ಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಮೂಲಕ ಜನರ ಮನಸ್ಸಿನಲ್ಲಿ ಉಳಿದಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದನ್ನು ಈಗ ಹೇಳಲಾಗದು. ಆದರೆ ಅವರು ಶಾಸಕರಾಗಿ ಆರಿಸಿಬರುತ್ತಾರೆ’ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಮಾತನಾಡಿ, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಗುವುದು. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಕೃಷಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು. ಅಭಿವೃದ್ಧಿಗೆ ಎಲ್ಲರು ಸಹಕರಿಸಬೇಕು ಎಂದು ಹೇಳಿದರು.

ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಜಗದೀಶ್, ತಾಲ್ಲೂಕು ವೈದ್ಯಾಧಿಕಾರಿ ಡಾ. ಎಂ.ಸಿ.ವಿಜಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ರಾಜ್ಯ ಜನತಾದಳದ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾರೆಡ್ಡಿ, ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್, ಮುಖಂಡರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಜಿ.ಕೆ.ನಾಗರಾಜ್, ಕುಂದಿಟಿವಾರಿಪಲ್ಲಿ ಶಿವಾರೆಡ್ಡಿ, ಎಂ.ಮಾರುತಿರೆಡ್ಡಿ, ಆನಂದ್, ಮನು, ಬಕ್ಷಿಸಾಬ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT