ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನೌಕರರ ಮುಷ್ಕರಕ್ಕೆ ವರ್ತೂರು ಬೆಂಬಲ

Last Updated 16 ಏಪ್ರಿಲ್ 2021, 15:18 IST
ಅಕ್ಷರ ಗಾತ್ರ

ಕೋಲಾರ: ಆರನೇ ವೇತನ ಆಯೋಗದ ಶಿಫಾರಸ್ಸು ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ಧರಣಿ ನಡೆಸುತ್ತಿರುವ ಸಾರಿಗೆ ನೌಕರರ ಮುಷ್ಕರಕ್ಕೆ ಮಾಜಿ ಸಚಿವ ವರ್ತೂರು ಪ್ರಕಾಶ್‌ ಬೆಂಬಲ ಸೂಚಿಸಿದರು.

ಜಿಲ್ಲಾ ಕೇಂದ್ರದಲ್ಲಿನ ಸಾರಿಗೆ ನೌಕರರ ಮನೆಗಳಿಗೆ ಭೇಟಿ ನೀಡಿದ ವರ್ತೂರು ಪ್ರಕಾಶ್‌ ನೌಕರರ ಸಮಸ್ಯೆ ಆಲಿಸಿದರು. ನೌಕರರು ತಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ವರ್ತೂರು ಪ್ರಕಾಶ್, ‘ಸಾರಿಗೆ ನೌಕರರು ಸುಮಾರು 10 ದಿನದಿಂದ ನಿರಂತರ ಹೋರಾಟ ನಡೆಸುತ್ತಿದ್ದೀರಿ. ನಿಮ್ಮ ಬೇಡಿಕೆಗಳು ನ್ಯಾಯಯುತವಾಗಿವೆ. ಆದರೆ, ರಾಜ್ಯ ಸರ್ಕಾರ ಬೇಡಿಕೆ ಈಡೇರಿಕೆಗೆ ಆಸಕ್ತಿ ತೋರದಿರುವುದು ಖಂಡನೀಯ. ಸರ್ಕಾರ ಮುಷ್ಕರನಿರತ ನೌಕರರ ಜತೆ ಸೌಜನ್ಯಕ್ಕೂ ಮಾತುಕತೆ ನಡೆಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಾರಿಗೆ ನೌಕರರು 2020ರ ಡಿಸೆಂಬರ್‌ನಲ್ಲಿ ಮುಷ್ಕರ ನಡೆಸಿದಾಗ ಸರ್ಕಾರ ಅವರ ಎಲ್ಲಾ 9 ಬೇಡಿಕೆಗಳನ್ನು ಮೂರು ತಿಂಗಳೊಳಗೆ ಈಡೇರಿಸುವುದಾಗಿ ಭರವಸೆ ನೀಡಿತ್ತು. ಆದರೆ, ಆ ಭರವಸೆ ಹುಸಿಯಾಗಿದೆ. ಸರ್ಕಾರಕ್ಕೆ ಸಾರಿಗೆ ನೌಕರರ ಬಗ್ಗೆ ಕಾಳಜಿಯಿಲ್ಲ. ಸರ್ಕಾರ ನೌಕರರ ಜತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ನೌಕರರ ವೇತನ ಹೆಚ್ಚಳ ಮಾಡಬೇಕು’ ಎಂದು ಒತ್ತಾಯಿಸಿದರು.

‘ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ, ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಸಮಸ್ಯೆಯಾಗುತ್ತಿದೆ. ಸರ್ಕಾರಕ್ಕೆ ಇದರ ಅರಿವಿಲ್ಲ. ಹಟಕ್ಕೆ ಬಿದ್ದಿರುವ ಸರ್ಕಾರ ಜನ ಹಿತ ಮರೆತಿದೆ. ಮುಷ್ಕರದಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಪರಿಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ದೂರಿದರು.

ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅರುಣ್‌ಪ್ರಸಾದ್‌, ವರ್ತೂರು ಪ್ರಕಾಶ್‌ ಬೆಂಬಲಿಗರಾದ ಬೆಗ್ಲಿ ಪ್ರಕಾಶ್, ಮಂಜುನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT