ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರಕಾರಿ ಸಾಗಾಟಕ್ಕೆ ಅಡೆತಡೆ ಬೇಡ

ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್ ಸೂಚನೆ
Last Updated 5 ಏಪ್ರಿಲ್ 2020, 14:43 IST
ಅಕ್ಷರ ಗಾತ್ರ

ಕೋಲಾರ: ‘ರೈತರು ಬೆಳೆದ ತರಕಾರಿ ಹಾಗೂ ಕೃಷಿ ಉತ್ಪನ್ನಗಳನ್ನು ಸಾಗಾಟಕ್ಕೆ ಯಾವುದೇ ಅಡೆತಡೆ ಉಂಟಾಗಬಾರದು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್‌-19 ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಇಲ್ಲಿ ಭಾನುವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ದಿಗ್ಬಂಧನ ಜಾರಿಯಾಗಿರುವುದರಿಂದ ಸರಕು ಸಾಗಣೆ ವಾಹನಗಳ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ರೈತರಿಗೆ ಸಮಸ್ಯೆಯಾಗಿದೆ’ ಎಂದರು.

‘ಮಾರುಕಟ್ಟೆಗಳಲ್ಲಿ ತರಕಾರಿ ಹಾಗೂ ಕೃಷಿ ಉತ್ಪನ್ನಗಳ ಬೆಲೆ ಗಣನೀಯವಾಗಿ ಕುಸಿದಿದೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ಜಿಲ್ಲೆಯ ರೈತರು ಜಮೀನಿನಲ್ಲೇ ಬೆಳೆಗಳನ್ನು ನಾಶಪಡಿಸುತ್ತಿದ್ದಾರೆ. ಇದೇ ಸ್ಥಿತಿ ಮುಂದುವರಿದರೆ ಮಾರುಕಟ್ಟೆಯಲ್ಲಿ ತರಕಾರಿಗಳ ಲಭ್ಯತೆ ಕಡಿಮೆಯಾಗಿ ಜನರಿಗೆ ಸಮಸ್ಯೆಯಾಗುತ್ತದೆ. ಇದಕ್ಕೆ ಅವಕಾಶ ಕೊಡಬಾರದು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿರುವ ಆಹಾರ ಉತ್ಪಾದನ ಘಟಕಗಳು ಸೋಮವಾರದಿಂದ (ಏ.6) ಕಾರ್ಯಾರಂಭ ಮಾಡಬೇಕು. ಜ್ಯೂಸ್ ಕಂಪನಿಗಳು ಉತ್ಪಾದನೆ ಪ್ರಾರಂಭಿಸಬೇಕು. ಇದರಿಂದ ಜಿಲ್ಲೆಯ ರೈತರು ಬೆಳೆದ ಹಣ್ಣುಗಳಿಗೆ ಮಾರುಕಟ್ಟೆ ಸಿಗುತ್ತದೆ. ಹಣ್ಣುಗಳ ಉತ್ಪಾದನೆ ವಿಲೇವಾರಿಗೆ ಅನುಕೂಲವಾಗಿ ರೈತರು ಸಂಕಷ್ಟದಿಂದ ಪಾರಾಗುತ್ತಾರೆ’ ಎಂದು ಸಲಹೆ ನೀಡಿದರು.

‘ಜಿಲ್ಲೆಯಲ್ಲಿ ಹೆಚ್ಚಾಗಿ ಟೊಮೆಟೊ ಮತ್ತು ದಪ್ಪ ಮೆಣಸಿನಕಾಯಿ (ಕ್ಯಾಪ್ಸಿಕಂ) ಬೆಳೆಯಲಾಗಿದ್ದು, ಇವುಗಳನ್ನು ಹೊರ ಜಿಲ್ಲೆ ಹಾಗೂ ರಾಜ್ಯಗಳಿಗೆ ಮಾರಾಟ ಮಾಡಲು ಕ್ರಮ ಕೈಗೊಳ್ಳಬೇಕು. ಬೆಲೆ ಕುಸಿತದ ಕಾರಣಕ್ಕೆ ಬೆಳೆ ನಾಶಪಡಿಸದಂತೆ ರೈತರಿಗೆ ಅರಿವು ಮೂಡಿಸಬೇಕು. ತರಕಾರಿ ಮತ್ತು ಕೃಷಿ ಉತ್ಪನ್ನಗಳಿಗೆ ಸ್ಥಳೀಯವಾಗಿ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗುವಂತೆ ಕ್ರಮ ಕೈಗೊಳ್ಳಿ’ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.

ಸೋಂಕು ಪತ್ತೆಯಾಗಿಲ್ಲ

‘ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿಲ್ಲ. ಮುಂದಿನ ದಿನಗಳಲ್ಲಿ ಸೋಂಕು ಪತ್ತೆಯಾದರೆ ಚಿಕಿತ್ಸೆ ನೀಡಲು ಸಕಲ ಸಿದ್ಧತೆ ಮಾಡಿಕೊಳ್ಳಿ. ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ ವೆಂಟಿಲೇಟರ್‌ ಸೌಲಭ್ಯ ಸಿದ್ಧಪಡಿಸಿಕೊಳ್ಳಿ’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು.

‘ಸಾರ್ವಜನಿಕರು ಬಳಸಿರುವ ಮುಖಗವಸುಗಳನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಬಳಕೆಯಾದ ಮುಖಗವಸುಗಳಿಂದಲೂ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಮುಖಗವಸು ಹಾಗೂ ಸ್ಯಾನಿಟೈಸರ್‌ ಲಭ್ಯವಿರಬೇಕು. ಅಂಗಡಿ ಹಾಗೂ ಮಾರುಕಟ್ಟೆಯಲ್ಲಿ ಜನರು ಸಾಮಾಜಿಕ ಅಂತರ ಪಾಲನೆ ಮಾಡುವ ಬಗ್ಗೆ ನಿರಂತರ ಕಣ್ಗಾವಲು ಇಡಿ’ ಎಂದು ತಿಳಿಸಿದರು.

ಫೀವರ್ ಕ್ಲಿನಿಕ್

ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಜನರ ಆರೋಗ್ಯ ತಪಾಸಣೆಗಾಗಿ ಜಿಲ್ಲೆಯಲ್ಲಿ 17 ಫೀವರ್ ಕ್ಲಿನಿಕ್ ತೆರೆಯಲಾಗಿದೆ. ಜಿಲ್ಲೆಯ ಎಲ್ಲಾ ಖಾಸಗಿ ಕ್ಲಿನಿಕ್ ಹಾಗೂ ಆಸ್ಪತ್ರೆಗಳು ಕಾರ್ಯ ನಿರ್ವಹಿಸಬೇಕೆಂದು ಆದೇಶಿಸಿದ್ದೇವೆ. ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಿದ್ದೇವೆ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ.ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್‌ರೆಡ್ಡಿ, ಮಹಮ್ಮದ್‌ ಸುಜಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಸ್ವಾಮಿ, ಉಪ ವಿಭಾಗಾಧಿಕಾರಿ ಸೋಮಶೇಖರ್, ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ.ಎಂ.ಚಾರಿಣಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT