ವಿದ್ಯುತ್ ಪ್ರಸರಣ ಕಚೇರಿಗೆ ಮುತ್ತಿಗೆ

7
ಗ್ರಾಮೀಣ ಭಾಗಕ್ಕೆ ವಿದ್ಯುತ್‌ ಪೂರೈಕೆಯಲ್ಲಿ ತಾರತಮ್ಯ: ಗ್ರಾಮಸ್ಥರ ಆರೋಪ

ವಿದ್ಯುತ್ ಪ್ರಸರಣ ಕಚೇರಿಗೆ ಮುತ್ತಿಗೆ

Published:
Updated:
Prajavani

ಕೋಲಾರ: ವಿದ್ಯುತ್ ಪೂರೈಕೆಯಲ್ಲಿ ಬೆಸ್ಕಾಂ ಸಿಬ್ಬಂದಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ವಿವಿಧ ಗ್ರಾಮಗಳ ಗ್ರಾಮಸ್ಥರು ಇಲ್ಲಿನ ಟಮಕ ವಿದ್ಯುತ್ ಪ್ರಸರಣ ವಿಭಾಗದ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಧರಣಿ ನಡೆಸಿದರು.

‘ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ವಿದ್ಯುತ್‌ ಕಡಿತಗೊಳಿಸುತ್ತಿಲ್ಲ. ಆದರೆ, ಗ್ರಾಮೀಣ ಭಾಗಕ್ಕೆ ಅನಿಯಮಿತವಾಗಿ ವಿದ್ಯುತ್‌ ಕಡಿತಗೊಳಿಸಲಾಗುತ್ತಿದೆ. ಇದರಿಂದ ಕೃಷಿ ನಿರ್ವಹಣೆಗೆ ಹಾಗೂ ದೈನಂದಿನ ಕಾರ್ಯ ಚಟುವಟಿಕೆಗಳಿಗೆ ಸಮಸ್ಯೆಯಾಗಿದೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಅಧಿಕಾರಿಗಳು ಗ್ರಾಮೀಣ ಭಾಗದಲ್ಲಿ ಲೋಡ್‌ ಶೆಡ್ಡಿಂಗ್‌ ನೆಪದಲ್ಲಿ ವಿದ್ಯುತ್‌ ಸಮಸ್ಯೆ ಸೃಷ್ಟಿಸಿದ್ದಾರೆ. ತಾಲ್ಲೂಕಿನ ಅಲ್ಲಿಕುಂಟೆ, ಪಟ್ನ, ಗಂಗಾಪುರ, ಕೋಟಿಗಾನಹಳ್ಳಿ ಸುತ್ತಮುತ್ತಲ ಗ್ರಾಮಗಳಲ್ಲಿ ನಾಲ್ಕೈದು ದಿನಗಳಿಂದ ವಿದ್ಯುತ್‌ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳ ಓದಿಗೆ ತೊಂದರೆಯಾಗಿದೆ’ ಎಂದು ಕೋಟಿಗಾನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ವೈ.ಗಣೇಶ್‌ಗೌಡ ಹೇಳಿದರು.

‘ತಾಲ್ಲೂಕಿನಲ್ಲಿ ತೀವ್ರ ಬರಗಾಲವಿದ್ದು, ಬೇಸಿಗೆಗೂ ಮುನ್ನವೇ ಎಲ್ಲೆಡೆ ನೀರಿನ ಸಮಸ್ಯೆ ಎದುರಾಗಿದೆ. ವಿದ್ಯುತ್‌ ಸಮಸ್ಯೆಯಿಂದ ಜಮೀನುಗಳಲ್ಲಿ ಪಂಪ್‌ಸೆಟ್‌ಗಳು ಸ್ಥಗಿತಗೊಂಡಿದ್ದು, ಬೆಳೆಗಳು ಒಣಗುತ್ತಿವೆ. ಮತ್ತೊಂದೆಡೆ ಜನ, ಜಾನುವಾರುಗಳಿಗೆ ಕುಡಿಯುವ ನೀರು ಇಲ್ಲವಾಗಿದೆ’ ಎಂದು ತಿಳಿಸಿದರು.

ಸಮಸ್ಯೆಯ ಅರಿವಿಲ್ಲ: ‘ಸದ್ಯದಲ್ಲೇ ಪರೀಕ್ಷೆಗಳು ಆರಂಭವಾಗಲಿದ್ದು, ವಿದ್ಯುತ್‌ ಸಮಸ್ಯೆ ಕಾರಣಕ್ಕೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ವಿದ್ಯಾರ್ಥಿಗಳು ಮೇಣದ ಬತ್ತಿ, ಬುಡ್ಡಿ ದೀಪದ ಬೆಳಕಿನಲ್ಲಿ ಓದುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಸ್ಕಾಂ ಅಧಿಕಾರಿಗಳಿಗೆ ವಿದ್ಯಾರ್ಥಿಗಳ ಸಮಸ್ಯೆಯ ಅರಿವಿಲ್ಲ’ ಎಂದು ಧರಣಿನಿರತರು ದೂರಿದರು.

‘ರೈತರು ವಿದ್ಯುತ್‌ ಸಮಸ್ಯೆಯಿಂದ ಕಂಗಾಲಾಗಿದ್ದಾರೆ. ಗ್ರಾಮಗಳಲ್ಲಿ ಜನರಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ವಿದ್ಯುತ್‌ ಸಮಸ್ಯೆ ಬಗ್ಗೆ ವಿಚಾರಿಸಲು ಬೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿದರೆ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡುವಂತೆ ಹೇಳಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಾರೆ. ಹಿರಿಯ ಅಧಿಕಾರಿಗಳು ಕರೆ ಸ್ವೀಕರಿಸುವುದಿಲ್ಲ’ ಎಂದು ಆರೋಪಿಸಿದರು.

ಬೀಗ ಜಡಿಯುತ್ತೇವೆ: ‘ವಿದ್ಯುತ್ ಸಮಸ್ಯೆಯಿಂದ ರೈತರ ಬೆಳೆ ನಷ್ಟವಾದರೆ ಇಲಾಖೆಯಿಂದ ನಷ್ಟ ಪರಿಹಾರ ಕಲ್ಪಿಸಬೇಕು. ವಿದ್ಯುತ್‌ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಗಮನಹರಿಸಿ ಶೀಘ್ರವೇ ಸಮಸ್ಯೆ ಪರಿಹರಿಸಬೇಕು. ಇಲ್ಲದಿದ್ದರೆ ಬೆಸ್ಕಾಂ ಕಚೇರಿಗೆ ಬೀಗ ಜಡಿದು ಹೋರಾಟ ನಡೆಸುತ್ತೇವೆ’ ಎಂದು ಖಡಕ್‌ ಎಚ್ಚರಿಕೆ ನೀಡಿದರು.

ವಿವಿಧ ಗ್ರಾಮಗಳ ಗ್ರಾಮಸ್ಥರಾದ ರಘುಪತಿ, ವೆಂಕಟಪತಿ, ನಾರಾಯಣಸ್ವಾಮಿ, ಕೃಷ್ಣಪ್ಪ, ಪಾಪಣ್ಣ, ಮುನಿಯಪ್ಪ, ರವಿ, ಚಂದ್ರಪ್ಪ, ನಾಗರಾಜ್, ಮಂಜುನಾಥ್ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !