ಗುರುವಾರ , ಜೂಲೈ 9, 2020
23 °C
ಸಭೆಯಲ್ಲಿ ಅಧಿಕಾರಿಗಳಿಗೆ ಸಂಸದ ಮುನಿಸ್ವಾಮಿ ಎಚ್ಚರಿಕೆ

ಶಿಷ್ಟಾಚಾರ ಉಲ್ಲಂಘನೆ ಸಹಿಸಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಅಧಿಕಾರಿಗಳು ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ. ರಾಜಕೀಯಕ್ಕೆ ನಾವಿದ್ದೇವೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯ’ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.

ಇಲ್ಲಿ ಶುಕ್ರವಾರ ನಡೆದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ‘ಅಧಿಕಾರಿಗಳು ಸರ್ಕಾರಿ ಕಾರ್ಯಕ್ರಮಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸದೆ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ. ಇದು ಇಂದಿಗೆ ಕೊನೆಯಾಗಬೇಕು. ಜನಪ್ರತಿನಿಧಿಗಳನ್ನು ವಿಭಜಿಸುವ ಪ್ರಯತ್ನ ಮಾಡಬೇಡಿ’ ಎಂದು ತಾಕೀತು ಮಾಡಿದರು.

‘ಸರ್ಕಾರಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಸದಸ್ಯರಿಂದ ಹಿಡಿದು ಎಲ್ಲಾ ಜನಪ್ರತಿನಿಧಿಗಳನ್ನು ಶಿಷ್ಟಾಚಾರದ ಪ್ರಕಾರ ಆಹ್ವಾನಿಸಬೇಕು. ಶಿಷ್ಟಾಚಾರ ಉಲ್ಲಂಘಿಸಿದರೆ ಸಹಿಸುವುದಿಲ್ಲ. ನಿಮ್ಮ ಜತೆ ಜಗಳವಾಡುವುದು ನಮ್ಮ ಕೆಲಸವಲ್ಲ. ಅಭಿವೃದ್ಧಿ ವಿಷಯದಲ್ಲಿ ಎಲ್ಲಾ ಜನಪ್ರತಿನಿಧಿಗಳು ಒಂದೇ’ ಎಂದರು.

‘ನರಸಾಪುರ ಜಿ.ಪಂ ಕ್ಷೇತ್ರದ ವಾಪ್ತಿಯಲ್ಲಿ ನಡೆದ ಅಂಗನವಾಡಿ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ. ಈ ಸಂಗತಿಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಜರುಗಿಸಿಲ್ಲ’ ಎಂದು ಜಿ.ಪಂ ಸದಸ್ಯೆ ರೂಪಶ್ರೀ ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ ಸಿಇಒ ಎಚ್.ವಿ.ದರ್ಶನ್, ‘ಶಿಷ್ಟಾಚಾರ ಉಲ್ಲಂಘನೆ ಸಂಬಂಧ ಪಿಡಿಒ ಅವರಿಂದ ಮಾಹಿತಿ ಪಡೆದಿದ್ದು, ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ. ಜನಪ್ರತಿನಿಧಿಗಳನ್ನು ಆಹ್ವಾನಿಸದೆ ಕಾರ್ಯಕ್ರಮ ನಡೆಸಿದರೆ ಪಿಡಿಒಗಳಿಗೂ ಪಾಲ್ಗೊಳ್ಳದಂತೆ ತಿಳಿಸಲಾಗಿದೆ. ಯಾರಾದರೂ ಬೆದರಿಸಿ ಕಾರ್ಯಕ್ರಮ ಮಾಡಿದರೆ ಪೊಲೀಸ್ ಭದ್ರತೆಯಲ್ಲಿ ಫಲಕ ತೆರವುಗೊಳಿಸಲು ತಾ.ಪಂ ಇಒಗಳಿಗೆ ಉಸ್ತುವಾರಿ ವಹಿಸಲಾಗಿದೆ’ ಎಂದರು.

ಟ್ಯಾಂಕ್‌ ತೆರವುಗೊಳಿಸಿಲ್ಲ: ‘ಮರಗಲ್‌ನಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ಕುಸಿದು ಒಬ್ಬರು ಮೃತಪಟ್ಟಿದ್ದಾರೆ. ನಲ್ಲೂರು ಗ್ರಾಮದಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ಶಿಥಿಲಗೊಂಡಿದ್ದು, ಅದನ್ನು ತೆರವುಗೊಳಿಸುವಂತೆ ತಿಳಿಸಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ’ ಎಂದು ಜಿ.ಪಂ ಸದಸ್ಯ ಅಶ್ವಿನಿ ದೂರಿದರು.

ಇದಕ್ಕೆ ಧ್ವನಿಗೂಡಿಸಿದ ಜಿ.ಪಂ ಅಧ್ಯಕ್ಷ ಸಿ.ಎಸ್‌.ವೆಂಕಟೇಶ್, ‘ಜಿಲ್ಲೆಯಲ್ಲಿ ಸುಮಾರು 60 ಓವರ್‌ ಹೆಡ್‌ ಟ್ಯಾಂಕ್‌ಗಳು ಶಿಥಿಲಗೊಂಡಿದ್ದು, ಈ ಬಗ್ಗೆ ಪಿಡಿಒಗಳಿಗೆ ಮಾಹಿತಿಯಿದೆ. ಅವರಿಗೆ ಟ್ಯಾಂಕ್‌ ತೆರವುಗೊಳಿಸಲು ಏನು ಸಮಸ್ಯೆ?’ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಿಇಒ, ‘ಮೇ 30ರೊಳಗೆ ಶಿಥಿಲ ಟ್ಯಾಂಕ್‌ಗಳ ಪಟ್ಟಿ ಸಿದ್ಧಪಡಿಸಿ ಕೊಡುವಂತೆ ತಾ.ಪಂ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ವಿವರಿಸಿದರು.

ನಿಯೋಗ ಹೋಗೋಣ: ‘ಹಲವು ಕಾರಣಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅನುದಾನ ಸರ್ಕಾರಕ್ಕೆ ವಾಪಸ್‌ ಹೋಗಿದೆ. ಮೊದಲ ಹಂತದಲ್ಲಿ ಶೇ 50ರಷ್ಟು ಅನುದಾನ ಬಿಡುಗಡೆ ಮಾಡುವುದು ಹಾಗೂ 2ನೇ ಹಂತದಲ್ಲಿ ಯಾರು ಕೆಲಸ ಬೇಗ ಮುಗಿಸುತ್ತಾರೋ ಅವರಿಗೆ ಹಣ ನೀಡುವ ಬಗ್ಗೆ ರಾಜ್ಯ ಮಟ್ಟದಲ್ಲಿ ಚರ್ಚೆಯಾಗಿದೆ’ ಎಂದು ಸಿಇಒ ದರ್ಶನ್‌ ಸಭೆಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು, ‘ಸರ್ಕಾರಕ್ಕೆ ವಾಪಸ್‌ ಹೋಗಿರುವ ಅನುದಾನ ಪಡೆಯುವ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವರ ಬಳಿ ನಿಯೋಗ ಹೋಗೋಣ. ಮೂರ್ನಾಲ್ಕು ದಿನದಲ್ಲಿ ಸಮಯ ನಿಗದಿಪಡಿಸಿ ಸಚಿವರನ್ನು ಭೇಟಿಯಾಗೋಣ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌, ಶಾಸಕರಾದ ಕೆ.ಶ್ರೀನಿವಾಸಗೌಡ, ಎಸ್‌.ಎನ್‌.ನಾರಾಯಣಸ್ವಾಮಿ, ವಿಧಾನ ಪರಿಷತ್‌ ಸದಸ್ಯ ಆರ್‌.ಚೌಡರೆಡ್ಡಿ, ಜಿ.ಪಂ ಉಪಾಧ್ಯಕ್ಷೆ ಯಶೋದಾ ಪಾಲ್ಗೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು