ಭಾನುವಾರ, ಸೆಪ್ಟೆಂಬರ್ 26, 2021
21 °C

ಕೋಲಾರ: ನಾಳೆ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ದೇಶದ ಹುತಾತ್ಮ ಯೋಧರು ಹಾಗೂ ದಿವಂಗತ ಐಎಎಸ್‌ ಅಧಿಕಾರಿ ಡಿ.ಕೆ.ರವಿ ಅವರ ಸ್ಮರಣಾರ್ಥ ಪಕ್ಷದ ಯುವ ಮೋರ್ಚಾ ವತಿಯಿಂದ ಜುಲೈ 15ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಪಿಂಚಣಿ ಅದಾಲತ್ ಏರ್ಪಡಿಸಲಾಗಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವೇಣುಗೋಪಾಲ್‌ರೆಡ್ಡಿ ತಿಳಿಸಿದರು.

ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಪ್ರತಿ ವರ್ಷ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ ನಡೆಸುತ್ತೇವೆ. ಅದೇ ರೀತಿ ಈ ಬಾರಿ ನಗರದ ಕೆಇಬಿ ಸಮುದಾಯ ಭವನದಲ್ಲಿ ಜುಲೈ 15ರಂದು ಬೆಳಿಗ್ಗೆ 9ಕ್ಕೆ ಶಿಬಿರ ಹಮ್ಮಿಕೊಂಡಿದ್ದೇವೆ’ ಎಂದು ಹೇಳಿದರು.

‘ಸಂಸದ ಎಸ್.ಮುನಿಸ್ವಾಮಿ ಅವರು ಶಿಬಿರ ಉದ್ಘಾಟಿಸುತ್ತಾರೆ. ಅದೇ ದಿನ ಶ್ರೀನಿವಾಸಪುರದ ವಾಸವಿ ಕಲ್ಯಾಣ ಮಂಟಪದಲ್ಲೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸಾರ್ವಜನಿಕರು ಸ್ವಪ್ರೇರಣೆಯಿಂದ ರಕ್ತದಾನ ಮಾಡಬೇಕು. ರಕ್ತಕ್ಕೆ ಪರ್ಯಾಯ ವಸ್ತು ಮತ್ತೊಂದಿಲ್ಲ. ರಕ್ತ ನೀಡಿ ಬೇರೆಯವರ ಪ್ರಾಣ ಉಳಿಸಲು ಶಿಬಿರಗಳು ಸಹಕಾರಿಯಾಗಿವೆ’ ಎಂದರು.

‘ದಕ್ಷ ಅಧಿಕಾರಿ ಡಿ.ಕೆ.ರವಿ ಅವರ 5ನೇ ಪುಣ್ಯಸ್ಮರಣೆ ಪ್ರಯುಕ್ತ ಪಿಂಚಣಿ ಅದಾಲತ್ ನಡೆಸುತ್ತಿದ್ದೇವೆ. ಜನಸಾಮಾನ್ಯರು ಅದಾಲತ್‌ನ ಸದುಪಯೋಗ ಪಡೆಯಬೇಕು. ಈಗಾಗಲೇ ಮುಳಬಾಗಿಲು ಹಾಗೂ ಮಾಲೂರು ತಾಲ್ಲೂಕಿನಲ್ಲಿ ರಕ್ತದಾನ ಶಿಬಿರ ನಡೆಸಿ 200ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹಿಸಲಾಗಿದೆ. ಜುಲೈ 19ರಂದು ಕೆಜಿಎಫ್‌ನಲ್ಲಿ ಶಿಬಿರ ನಡೆಸುತ್ತೇವೆ’ ಎಂದು ವಿವರಿಸಿದರು.

ಖಂಡಿಸುತ್ತೇವೆ: ‘ತಹಶೀಲ್ದಾರ್ ಚಂದ್ರಮೌಳೇಶ್ವರ ಕೊಲೆ ಸಂಬಂಧ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ ಅವರು ಬಿಜೆಪಿಯು ಕೊಲೆಗಡುಕರ ಪಕ್ಷವೆಂದು ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇವೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರು ಈ ರೀತಿ ಮಾತನಾಡುವುದು ಶೋಭೆಯಲ್ಲ. ತನಿಖೆ ಪೂರ್ಣಗೊಂಡ ನಂತರ ಪ್ರಕರಣದ ಸತ್ಯಾಸತ್ಯತೆ ಗೊತ್ತಾಗುತ್ತದೆ. ಶಾಸಕರು ತಮ್ಮ ಹೇಳಿಕೆ ಹಿಂಪಡಿಯದಿದ್ದರೆ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಡಿ.ರಾಮಚಂದ್ರೇಗೌಡ, ನಗರ ಘಟಕದ ಅಧ್ಯಕ್ಷ ಎಚ್.ಎಂ.ತಿಮ್ಮರಾಯಪ್ಪ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಆರ್.ಬಾಲಾಜಿ, ನಗರ ಯುವ ಮೋರ್ಚಾ ಅಧ್ಯಕ್ಷ ಭರತ್‌ಕುಮಾರ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು