ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಸಮಸ್ಯೆ: ಹಣದ ಕೊರತೆಯಿಲ್ಲ

Last Updated 14 ಆಗಸ್ಟ್ 2019, 14:45 IST
ಅಕ್ಷರ ಗಾತ್ರ

ಕೋಲಾರ: ‘ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹಣದ ಕೊರತೆಯಿಲ್ಲ. ಆದರೆ, ಕೊಳವೆ ಬಾವಿ ಕೊರೆಸಿದರೂ ನೀರು ಸಿಗದ ಕಾರಣ ಸಂಕಷ್ಟ ಎದುರಾಗಿದೆ. ಸಮಸ್ಯೆ ಪರಿಹಾರಕ್ಕೆ ಪರ್ಯಾಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ತಿಳಿಸಿದರು.

ತಾಲ್ಲೂಕಿನ ಅಮ್ಮನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರೇನಹಳ್ಳಿ ಗ್ರಾಮದಲ್ಲಿ ಬುಧವಾರ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿ, ‘ಜಿಲ್ಲೆಯು ಸತತ ಬರದಿಂದ ತತ್ತರಿಸಿದೆ. ಅಂತರ್ಜಲ ಪಾತಾಳಕ್ಕೆ ತಲುಪಿದೆ. ಜಿಲ್ಲೆಗೆ ಕೆ.ಸಿ ವ್ಯಾಲಿ ನೀರು ಬರುತ್ತಿರುವುದರಿಂದ ಭವಿಷ್ಯದಲ್ಲಿ ಅಂತರ್ಜಲ ವೃದ್ಧಿಯಾಗಲಿದೆ’ ಎಂದು ಅಭಿಪ್ರಾಯಪಟ್ಟರು.

‘ಕೊಳವೆ ಬಾವಿಗಳ ನೀರಿನಲ್ಲಿ ವಿಷಕಾರಿ ಫ್ಲೋರೈಡ್‌ ಹೆಚ್ಚಿನ ಪ್ರಮಾಣದಲ್ಲಿದೆ. ಇಂತಹ ನೀರಿನ ಸೇವನೆಯಿಂದ ದಂತ ಕ್ಷಯ, ಮೂಳೆ ಸಂಬಂಧಿ ಸಮಸ್ಯೆ ಬರುತ್ತಿದೆ. ಆದ ಕಾರಣ ಜನ ಶುದ್ಧ ಕುಡಿಯುವ ನೀರು ಬಳಸಬೇಕು. ಶುದ್ಧ ಕುಡಿಯುವ ನೀರಿನ ಘಟಕದ ಬಳಿ ಸ್ವಚ್ಛತೆ ಕಾಪಾಡಿ’ ಎಂದು ಕಿವಿಮಾತು ಹೇಳಿದರು.

‘ತಾಲ್ಲೂಕಿನಲ್ಲಿ ಒಂದೆರಡು ದಿನದಲ್ಲಿ ಮಳೆ ಆಗಬಹುದು. ಉತ್ತಮ ಮಳೆ ನಿರೀಕ್ಷೆಯಿದೆ. ಉತ್ತರ ಕರ್ನಾಟಕ ಭಾಗದ ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ಜಿಲ್ಲೆಯ ಜನ ಮಳೆಯಿಲ್ಲದೆ ಕಷ್ಟ ಅನುಭವಿಸುವಂತಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪ ಸೇರಿದಂತೆ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಯಿದ್ದರೂ ನನ್ನ ಗಮನಕ್ಕೆ ತನ್ನಿ. ಸಮಸ್ಯೆ ಪರಿಹಾರಕ್ಕೆ ಖಂಡಿತ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಉಷಾ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಸೋಮಣ್ಣ, ಕೆ.ವಿ.ದಯಾನಂದ್, ಗ್ರಾ.ಪಂ ಅಧ್ಯಕ್ಷೆ ನಾಗರತ್ನಮ್ಮ, ಉಪಾಧ್ಯಕ್ಷ ಪಾಪಣ್ಣ, ಸದಸ್ಯರಾದ ವೀರಪ್ಪರೆಡ್ಡಿ, ಮುನಿರಾಜು, ನಾರಾಯಣಸ್ವಾಮಿ, ಪಿಡಿಒ ರವೀಂದ್ರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT