ಬುಧವಾರ, ಮಾರ್ಚ್ 3, 2021
30 °C
ಡಿಸಿಎಫ್‌ ಕಚೇರಿ ಎದುರು ರೈತ ಸಂಘ ಸದಸ್ಯರ ಧರಣಿ

ಕಾಡು ಪ್ರಾಣಿ ಹಾವಳಿ: ಪರಿಹಾರಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆ ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಮಂಗಳವಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಕೋಲಾರ–ಬಂಗಾರಪೇಟೆ ರಸ್ತೆ ತಡೆ ಮಾಡಿದ ಧರಣಿನಿರತರು, ‘ಜಿಲ್ಲೆಯ ಗಡಿ ಭಾಗದ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಹೆಚ್ಚಿದೆ. ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಅರಣ್ಯ ಪ್ರದೇಶದಿಂದ ಬರುವ ಆನೆಗಳ ಹಿಂಡು ಜಿಲ್ಲೆಯ ಗಡಿ ಗ್ರಾಮದ ಕೃಷಿ ಜಮೀನುಗಳಲ್ಲಿ ಬೆಳೆ ನಾಶಪಡಿಸುತ್ತಿದೆ. ಅರಣ್ಯ ಇಲಾಖೆಯು ಕಾಡಾನೆ ಹಾವಳಿ ತಡೆಗೆ ಕ್ರಮ ಕೈಗೊಂಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಜಿಲ್ಲೆಯ ರೈತರು ಬರ ಪರಿಸ್ಥಿತಿ ನಡುವೆಯೂ ಬಡ್ಡಿ ಸಾಲ ಮಾಡಿ ಬೆಳೆ ಬೆಳೆಯುತ್ತಿದ್ದಾರೆ. ಕಾಡು ಪ್ರಾಣಿಗಳ ಹಾವಳಿಯಿಂದ ರೈತರು ಬೆಳೆ ರಕ್ಷಿಸಿಕೊಳ್ಳಲು ಹರಸಾಹಸ ಪಡುವಂತಾಗಿದೆ. ಪ್ರತಿ ವರ್ಷ ಕಾಡಾನೆ ಹಾವಳಿ ಸಾಮಾನ್ಯವಾಗಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

‘ರೈತರು ವರ್ಷವಿಡೀ ಕಷ್ಟಪಟ್ಟು ಬೆಳೆದ ಬೆಳೆದ ಕಾಡು ಪ್ರಾಣಿಗಳ ಹಾವಳಿಯಿಂದ ಅಂತಿಮ ಕ್ಷಣದಲ್ಲಿ ನಾಶವಾಗುತ್ತಿದೆ. ರೈತರು ಬೆಳೆಗೆ ಮಾಡಿದ ಸಾಲ ತೀರಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟದ ಸಂದರ್ಭದಲ್ಲಿ ಮಾತ್ರ ನೆಪಕ್ಕೆ ರೈತರ ಜಮೀನಿಗೆ ಬರುವ ಅಧಿಕಾರಿಗಳು ಪರಿಹಾರ ಕೊಡಲು ಮೀನಮೇಷ ಎಣಿಸುತ್ತಾರೆ’ ಎಂದು ಕಿಡಿಕಾರಿದರು.

ಸಚಿವರು ನಾಪತ್ತೆ: ‘ಕಾಡು ಪ್ರಾಣಿಗಳ ಹಾವಳಿಯಿಂದ ಭಯಭೀತರಾಗಿರುವ ರೈತರು ಕೃಷಿಯಿಂದ ವಿಮುಕ್ತರಾಗುತ್ತಿದ್ದಾರೆ. ಕಾಡಾನೆಗಳ ದಾಳಿಯಿಂದ ರೈತರು ಮೃತಪಟ್ಟಾಗ ಜಿಲ್ಲೆಗೆ ಭೇಟಿ ಕೊಟ್ಟು ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರವಾಗಿ ಆನೆ ಕಾರಿಡಾರ್ ಯೋಜನೆ ಜಾರಿಗೊಳಿಸಲು ಅನುದಾನ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದ ಅರಣ್ಯ ಸಚಿವ ಆನಂದ್‌ಸಿಂಗ್‌ ನಾಪತ್ತೆಯಾಗಿದ್ದಾರೆ’ ಎಂದು ಧರಣಿನಿರತರು ಆರೋಪಿಸಿದರು.

‘ಕಾಡುಗಳಲ್ಲಿ ಪ್ರಾಣಿಗಳಿಗೆ ಬೇಕಾದ ಹಣ್ಣಿನ ಮರಗಳನ್ನು ಬೆಳೆಸಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕಾಡು ಪ್ರಾಣಿಗಳ ಉಪಟಳ ತಡೆಗೆ ಶಾಶ್ವತ ಪರಿಹಾರ ರೂಪಿಸಬೇಕು. ಕಾಡಾನೆ ದಾಳಿಯಲ್ಲಿ ಮೃತಪಟ್ಟಿರುವ ರೈತರ ಕುಟುಂಬಕ್ಕೆ ₹ 50 ಲಕ್ಷ ಹಾಗೂ ಬೆಳೆ ನಷ್ಟಕ್ಕೆ ₹ 25 ಲಕ್ಷ ಪರಿಹಾರ ನೀಡಬೇಕು. ಆನೆ ಕಾರಿಡಾರ್‌ ಯೋಜನೆ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

ಸಂಘಟನೆಯ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಅನಿಲ್, ರಾಜ್ಯ ವಿಭಾಗೀಯ ಉಪಾಧ್ಯಕ್ಷ ಕೇಶವ, ಸಂಚಾಲಕ ಸುಪ್ರೀಂಚಲ, ಜಿಲ್ಲಾ ಘಟಕದ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ, ಸದಸ್ಯರಾರ ಪವಿತ್ರಾ, ತಿಮ್ಮಣ್ಣ, ನವೀನ್, ವೇಣು, ಕಿರಣ್, ನಾಗರಾಜ ಪಾಲ್ಗೊಂಡರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು