ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆ ನಿರ್ಣಾಯಕ

Last Updated 7 ಮಾರ್ಚ್ 2020, 15:22 IST
ಅಕ್ಷರ ಗಾತ್ರ

ಕೋಲಾರ: ‘ಪುರುಷ ಪ್ರಧಾನ ದೇಶದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ಕಲ್ಪಿಸಲಾಗಿದ್ದು, ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ನಿರ್ಣಾಯಕ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಬಾಬು ಅಭಿಪ್ರಾಯಪಟ್ಟರು.

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಮುದುವತ್ತಿ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ನಡೆದ ಮಹಿಳಾ ಗ್ರಾಮ ಸಭೆಯಲ್ಲಿ ಮಾತನಾಡಿ, ’ಅನೇಕ ಮಹನೀಯರ ಪರಿಶ್ರಮದ ಫಲವಾಗಿ 1975ರಲ್ಲಿ ವಿಶ್ವ ಮಹಿಳಾ ದಿನಾಚರಣೆ ಜಾರಿಗೆ ಬಂದಿತು. ಮಹಿಳೆಯರು ಕೇವಲ ನಾಲ್ಕು ಗೋಡೆಗಳ ಮಧ್ಯದ ಮನೆಗೆ ಸೀಮಿತವಾಗಬಾದೆಂಬ ಉದ್ದೇಶದಿಂದ ಮಹಿಳಾ ದಿನ ಆಚರಿಸಲಾಗುತ್ತಿದೆ’ ಎಂದು ಹೇಳಿದರು.

‘ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ಮಹಿಳೆಯರು ಸಮಾಜದಲ್ಲಿ ಪುರುಷರಿಗೆ ಸಮನಾಗಿ ಸೌಕರ್ಯ ಪಡೆಯಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ’ ಎಂದು ಕಿವಿಮಾತು ಹೇಳಿದರು.

‘ಸ್ತ್ರೀ ಪುರುಷರೆಂಬ ಮನೋಭಾವ ತೊಡೆದು ಹಾಕಬೇಕು. ಆಗ ಮಾತ್ರ ಮಹಿಳೆಯರು ಸಮಾಜದಲ್ಲಿ ಪುರುಷರಿಗೆ ಸರಿ ಸಮನಾಗಿ ಬೆಳೆಯಲು ಸಹಕಾರಿಯಾಗುತ್ತದೆ. ಮಹಿಳೆಯರಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆ ಪ್ರದರ್ಶಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನು ಮಾದರಿಯಾಗಿಸಿಕೊಂಡು ಜೀವನದಲ್ಲಿ ಸಾಧನೆಗೆ ಮುಂದಾಗಬೇಕು’ ಎಂದು ಸಲಹೆ ನೀಡಿದರು.

ಸ್ವಾವಲಂಬಿಗಳಾಗಿ: ‘ಸರ್ಕಾರಗಳು ಮಹಿಳಾ ಸಬಲೀಕರಣಕ್ಕಾಗಿ ಅನೇಕ ಯೋಜನೆ ಜಾರಿಗೊಳಿಸಿವೆ. ಮಹಿಳೆಯರು ಈ ಯೋಜನೆಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಬೇಕು. ಸುಶಿಕ್ಷಿತರಾಗಿ ಉತ್ತಮ ಸಮಾಜ ನಿರ್ಮಾಣ ಮಾಡಬೇಕು’ ಎಂದು ಮಹಿಳಾ ಒಕ್ಕೂಟಗಳ ಸಂಯೋಜಕ ಸುಂದ್ರೇಶ್‌ ಹೇಳಿದರು.

‘ಮಹಿಳೆಯರ ಸಹಕಾರವಿಲ್ಲದೆ ಸಮಾಜದ ಅಭಿವೃದ್ಧಿ ಸಾಧ್ಯವಿಲ್ಲ. ಸಮ ಸಮಾಜ ನಿರ್ಮಾಣದ ಪರಿಕಲ್ಪನೆಯ ಮೇರೆಗೆ ಸರ್ಕಾರ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದ್ದು, ಮಹಿಳೆಯರು ಇದರ ಪ್ರಯೋಜನ ಪಡೆಯಬೇಕು’ ಎಂದು ಮುದುವತ್ತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್‌ಕುಮಾರ್ ತಿಳಿಸಿದರು.

‘ಜನಪ್ರತಿನಿಧಿಗಳಾಗಿ ಆಯ್ಕೆಯಾಗಿರುವ ಮಹಿಳೆಯರು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಸಮಸ್ಯೆಗಳಿದ್ದರೆ ಸಭೆಗಳಲ್ಲಿ ಧ್ವನಿ ಎತ್ತುವ ಮೂಲಕ ಪರಿಹಾರ ಕಂಡುಕೊಳ್ಳುತ್ತಿದ್ದಾರೆ. ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಶೋಷಣೆ ನಡೆದಾಗ ದೂರು ನೀಡಿದರೆ ಪಂಚಾಯಿತಿಯಿಂದ ಪರಿಹಾರ ಕಲ್ಪಿಸುತ್ತೇವೆ’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT