ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬನ್ನಿ

Last Updated 9 ಮಾರ್ಚ್ 2021, 17:28 IST
ಅಕ್ಷರ ಗಾತ್ರ

ಕೋಲಾರ: ಮಹಿಳೆ ಹಾಗೂ ಮಕ್ಕಳ ರಕ್ಷಣೆಗೆ ಸಾಕಷ್ಟು ಕಾನೂನುಗಳಿವೆ. ಆದರೆ, ಅವು ಸಮರ್ಪಕವಾಗಿ ಜಾರಿಯಾಗದ ಕಾರಣ ಮಹಿಳೆಯರು ಮತ್ತು ಮಕ್ಕಳು ತೊಂದರೆ ಅನುಭವಿಸುವಂತಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಚೌಡೇಶ್ವರಿ ಕಳವಳ ವ್ಯಕ್ತಪಡಿಸಿದರು.

ರತ್ನಮಾಲಾ ಮಹಿಳಾ ಮಂಡಳಿಯು ಇಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿ, ‘ಸಮಾಜದಲ್ಲಿ ಸೂಕ್ಷ್ಮ ಜೀವಿಗಳಂತಿರುವ ಮಹಿಳೆಯರು ಹಾಗೂ ಮಕ್ಕಳಿಗೆ ಸಂವಿಧಾನವು ಸಮಾನತೆಯ ಹಕ್ಕು ಕಲ್ಪಿಸಿದೆ. ಆದರೂ ಮಹಿಳೆಯರು ಅವಕಾಶದಿಂದ ವಂಚಿತರಾಗಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಸಮಾಜ ಬೆಳೆದಂತೆ ಮಹಿಳೆಯರ ಮೇಲಿನ ದೌರ್ಜನ್ಯ, ಶೋಷಣೆ ಕಡಿಮೆಯಾಗಬೇಕು. ಆದರೆ, ಮಹಿಳೆಯರ ಮೇಲೆ ದಬ್ಬಾಳಿಕೆ ಹೆಚ್ಚುತ್ತಿದೆ. ಪುರುಷರ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಮಹಿಳೆಯರ ಮೇಲಿನ ಶೋಷಣೆ ತಡೆಗಟ್ಟಬೇಕು. ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗದೆ ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ಕಿವಿಮಾತು ಹೇಳಿದರು.

‘ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆ ಮತ್ತು ಪುರುಷ ಎಂಬ ಅಸಮಾನತೆ ಹೋಗಲಾಡಿಸಲು ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕು. ಮಹಿಳೆಯರು ಸಮಾಜದಲ್ಲಿ ಗೌರವ ಪಡೆದು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಪ್ರಗತಿ ಹೊಂದುವ ನಿಟ್ಟಿನಲ್ಲಿ ಸಾಧನೆ ತೋರಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪಾಲಿ ಆಶಿಸಿದರು.

‘ಜಗತ್ತಿನ ಜನಸಂಖ್ಯೆಯಲ್ಲಿ ಅರ್ಧದಷ್ಟು ಮಹಿಳೆಯರಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವ ಮಹಿಳೆಯರು ಯಾವುದೇ ಫಲಾಪೇಕ್ಷೆ ನಿರೀಕ್ಷಿಸುತ್ತಿಲ್ಲ. ವಿವಿಧ ಕ್ಷೇತ್ರಗಳಲ್ಲಿನ ಸಾಧಕಿಯರು ಮಹಿಳಾ ಸಮುದಾಯಕ್ಕೆ ಮಾದರಿಯಾಗಬೇಕು’ ಎಂದು ಸಲಹೆ ನೀಡಿದರು.

ಇತಿಹಾಸ ಸೃಷ್ಟಿ: ಮಹಿಳೆಯರು ಶತಮಾನಗಳಿಂದ ಇತಿಹಾಸ ಸೃಷ್ಟಿಸಿದ್ದಾರೆ. ಹೆಣ್ಣೆಂಬ ಕೀಳರಿಮೆ ಬಿಟ್ಟು ಎಲ್ಲಾ ಕ್ಷೇತ್ರಗಳಲ್ಲೂ ಶ್ರಮ ವಹಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ’ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ ಅಭಿಪ್ರಾಯಪಟ್ಟರು.

‘ಸಮಾಜದಲ್ಲಿ ವರದಕ್ಷಿಣೆ ಪಿಡುಗು ನಿರ್ಮೂಲನೆಯಾದರೆ ಮಹಿಳೆಯರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ಬಾಲ್ಯವಿವಾಹ ತಡೆಗೆ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದು ನಗರಸಭೆ ಸದಸ್ಯ ಎಸ್.ಆರ್‌.ಮುರಳಿಗೌಡ ಮನವಿ ಮಾಡಿದರು.

ರತ್ನಮಾಲಾ ಮಹಿಳಾ ಮಂಡಳಿ ಅಧ್ಯಕ್ಷೆ ರತ್ನಮಲಾ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಮಲಾ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT