ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ಮಾಹಿತಿ ಅಳವಡಿಕೆ: ವಾರದ ಗಡುವು

ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅಸಮಾಧಾನ
Last Updated 7 ಆಗಸ್ಟ್ 2019, 14:37 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯಲ್ಲಿ ಭೌತಿಕವಾಗಿ ಕಾಮಗಾರಿ ಪೂರ್ಣಗೊಂಡಿದ್ದರೂ ಅದರ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಿಲ್ಲ. ಇದರಿಂದ ಗುತ್ತಿಗೆದಾರರಿಗೆ ಠೇವಣಿ ಹಣ ನೀಡದೆ ಆರ್ಥಿಕ ಪ್ರಗತಿಗೆ ಹಿನ್ನಡೆಯಾಗಿದೆ’ ಎಂದು ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅಸಮಾಧಾನ ವ್ಯಕ್ತಪಡಿಸಿದರು.

ಅಭಿವೃದ್ಧಿ ಕಾಮಗಾರಿಗಳ ಕುರಿತ ಇಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ,‘ಕಾಮಗಾರಿ ಪೂರ್ಣಗೊಂಡಿರುವ ವಿವರವನ್ನು ಒಂದು ವಾರದೊಳಗೆ ತಂತ್ರಾಂಶದಲ್ಲಿ ಅಳವಡಿಸಬೇಕು. ಜತೆಗೆ ಆ ಕಾಮಗಾರಿಗಳ ಗುತ್ತಿಗೆದಾರರಿಗೆ ಠೇವಣಿ ಹಣ ಹಿಂದಿರುಗಿಸಬೇಕು’ ಎಂದು ಸೂಚಿಸಿದರು.

‘ಕಾಮಗಾರಿಗಳು ಪೂರ್ಣಗೊಂಡ ತಕ್ಷಣ ಆ ಬಗ್ಗೆ ವರದಿ ನೀಡಬೇಕು. ಇಲ್ಲದಿದ್ದರೆ ಶೇ 30ರಷ್ಟು ಠೇವಣಿ ಹಣ ಹಾಗೆಯೇ ಉಳಿಯುತ್ತದೆ. ಈ ರೀತಿ ಗುತ್ತಿಗೆದಾರರ ಠೇವಣಿ ಹಣ ಉಳಿಸಿಕೊಂಡರೆ ಆರ್ಥಿಕ ಪ್ರಗತಿಗೆ ಅಡ್ಡಿಯಾಗುತ್ತದೆ’ ಎಂದು ಹೇಳಿದರು.

‘ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ತಲಾ ₹ 50 ಲಕ್ಷ ಅನುದಾನದಂತೆ ಒಟ್ಟರೆ ಜಿಲ್ಲೆಗೆ ₹ 4.50 ಕೋಟಿ ನೀಡಲಾಗಿದೆ. ಶಾಸಕರಿಂದ ಉಳಿದ ಕಾಮಗಾರಿಗಳಿಗೆ ಪತ್ರ ಪಡೆದು ತಕ್ಷಣವೇ ಆಡಳಿತಾತ್ಮಕ ಅನುಮೋದನೆ ನೀಡಿ ಕೆಲಸ ಆರಂಭಿಸಬೇಕು. ಒಂದು ತಿಂಗಳೊಳಗೆ ಕಾರ್ಯಾದೇಶ ನೀಡಿ ಕಾಮಗಾರಿ ಪೂರ್ಣಗೊಳಿಸಿ’ ಎಂದು ಆದೇಶಿಸಿದರು.

ಮಣ್ಣು ಕೇಂದ್ರ ಸ್ಥಾಪಿಸಿ: ‘ಕಾಮಗಾರಿ ಆರಂಭಕ್ಕೆ ಮಣ್ಣನ್ನು ಪರೀಕ್ಷೆಗಾಗಿ ಎಂಜಿನಿಯರಿಂಗ್ ಕಾಲೇಜಿಗೆ ಕಳುಹಿಸುವುದರಿಂದ ಕೆಲಸ ವಿಳಂಬವಾಗುತ್ತಿದೆ. ಇದರ ಬದಲು ₹ 1.25 ಲಕ್ಷ ವೆಚ್ಚದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಕಚೇರಿಯಲ್ಲಿ ಮಣ್ಣು ಪರೀಕ್ಷೆ ಕೇಂದ್ರ ಸ್ಥಾಪಿಸಿ’ ಎಂದು ಎಂಜಿನಿಯರ್‌ಗಳಿಗೆ ಸಲಹೆ ನೀಡಿದರು.

‘ಬಯಲುಸೀಮೆ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀರು ಸಂರಕ್ಷಣಾ ಕಾಮಗಾರಿಗಳು, ಚೆಕ್‌ಡ್ಯಾಂ ನಿರ್ಮಾಣ, ಅಂತರ್ಜಲ ಅಭಿವೃದ್ಧಿ ಕಾಮಗಾರಿಗಳು, ಶಾಲೆ, ಅಂಗನವಾಡಿ ಹಾಗೂ ಆಸ್ಪತ್ರೆ ಕಟ್ಟಡ ಕಾಮಗಾರಿ ಆರಂಭಿಸಿ’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಜೆ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಿ.ಜಗದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪುಷ್ಪಲತಾ, ಉಪ ವಿಭಾಗಾಧಿಕಾರಿ ಸೋಮಶೇಖರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT