ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ಕಳಪೆ: ಟೆಂಡರ್‌ ರದ್ದುಪಡಿಸಲು ರೈತ ಸಂಘ ಸದಸ್ಯರ ಮನವಿ

Last Updated 13 ಸೆಪ್ಟೆಂಬರ್ 2021, 15:33 IST
ಅಕ್ಷರ ಗಾತ್ರ

ಕೋಲಾರ: ಅಮೃತ್‌ಸಿಟಿ ಹಾಗೂ ನಗರೋತ್ಥಾನ ಯೋಜನೆ ಕಾಮಗಾರಿಗಳ ಗುಣಮಟ್ಟ ಕಳಪೆಯಾಗಿದ್ದು, ಗುತ್ತಿಗೆದಾರರ ಟೆಂಡರ್‌ ರದ್ದುಪಡಿಸುವಂತೆ ಒತ್ತಾಯಿಸಿ ರೈತ ಸಂಘದ ಸದಸ್ಯರು ಇಲ್ಲಿ ಸೋಮವಾರ ನಗರಸಭೆ ಕಂದಾಯ ಅಧಿಕಾರಿ ಚಂದ್ರು ಅವರಿಗೆ ಮನವಿ ಸಲ್ಲಿಸಿದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಜಿಲ್ಲಾ ಕೇಂದ್ರದ ರಸ್ತೆ ಮತ್ತು ಚರಂಡಿಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಆದರೆ, ಗುತ್ತಿಗೆದಾರರು ಈ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಲ್ಲ’ ಎಂದು ಸಂಘಟನೆ ಸದಸ್ಯರು ಆರೋಪಿಸಿದರು.

‘ಸ್ಥಳೀಯ ಗುತ್ತಿಗೆದಾರರಿಗೆ ಕಾಮಗಾರಿಗಳ ಟೆಂಡರ್‌ ನೀಡದೆ ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹೊರ ರಾಜ್ಯದವರಿಗೆ ಟೆಂಡರ್‌ ನೀಡಲಾಗಿದೆ. ಆ ಗುತ್ತಿಗೆದಾರರು ತುಂಡು ಗುತ್ತಿಗೆ ಮೂಲಕ ಕಾಮಗಾರಿಗಳನ್ನು ನಡೆಸುತ್ತಿದ್ದಾರೆ. ತುಂಡು ಗುತ್ತಿಗೆ ಪಡೆದಿರುವ ಸ್ಥಳೀಯರು ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡಿಲ್ಲ’ ಎಂದು ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

‘ನೂತನವಾಗಿ ನಿರ್ಮಿಸಿರುವ ರಸ್ತೆಗಳು ಹಾಗೂ ಚರಂಡಿಗಳು ವರ್ಷ ಕಳೆಯುವಷ್ಟರಲ್ಲಿ ಹಾಳಾಗಿವೆ. ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಗಳ ಡಾಂಬರು ಕಿತ್ತು ಹೋಗಿದ್ದು, ದೊಡ್ಡ ಗುಂಡಿಗಳಾಗಿವೆ. ಗುಂಡಿಮಯ ರಸ್ತೆಗಳಲ್ಲಿ ವಾಹನ ಸಂಚಾರ ದುಸ್ತರವಾಗಿದೆ. ಯುಜಿಡಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಮ್ಯಾನ್‌ಹೋಲ್‌ಗಳು ಮಲಮೂತ್ರದಿಂದ ಭರ್ತಿಯಾಗಿ ಕೊಳಚೆ ನೀರು ರಸ್ತೆಗೆ ಹರಿಯುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಸಕರ ಅಸಮಾಧಾನ: ‘ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗದೆ ಮನೆಗಳಿಗೆ ನುಗ್ಗುತ್ತಿದೆ. ಅಲ್ಲದೇ, ರಸ್ತೆಗಳ ಮೇಲೆ ಹರಿದು ಅವಾಂತರ ಸೃಷ್ಟಿಸುತ್ತಿದೆ. ಶಾಸಕ ಕೆ.ಶ್ರೀನಿವಾಸಗೌಡರು ಹಾಗೂ ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಅವರು ಕಾಮಗಾರಿಗಳ ಗುಣಮಟ್ಟ ಕಳಪೆಯಾಗಿದೆ ಎಂದು ಸಾರ್ವಜನಿಕವಾಗಿ ಸಭೆಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್‌ ಹೇಳಿದರು.

‘ಜವಾಬ್ದಾರಿಯುತ ಸ್ಥಾನದಲ್ಲಿರುವ ಜನಪ್ರನಿಧಿಗಳು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಆರೋಪ ಮಾಡಿದ್ದರೂ ಅಧಿಕಾರಿಗಳು ತನಿಖೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಅಧಿಕಾರಿಗಳು ಲಂಚದಾಸೆಗೆ ಗುತ್ತಿಗೆದಾರರ ಜತೆ ಶಾಮೀಲಾಗಿ ಅಕ್ರಮ ಮರೆಮಾಚಲು ಯತ್ನಿಸುತ್ತಿದ್ದಾರೆ. ಎಂಜಿನಿಯರ್‌ಗಳು ನಿಯಮದ ಪ್ರಕಾರ ಕಾಮಗಾರಿ ಸ್ಥಳದಲ್ಲಿದ್ದು, ಗುಣಮಟ್ಟ ಪರಿಶೀಲಿಸುತ್ತಿಲ್ಲ’ ಎಂದು ಗುಡುಗಿದರು.

ಕಪ್ಪುಪಟ್ಟಿಗೆ ಸೇರಿಸಿ: ‘ಕಾಮಗಾರಿ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಟೆಂಡರ್‌ದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಮುಂದೆ ಅವರಿಗೆ ಯಾವುದೇ ಕಾಮಗಾರಿಯ ಗುತ್ತಿಗೆ ನೀಡಬಾರದು. ಅಕ್ರಮಕ್ಕೆ ಕೈಜೋಡಿಸಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕು’ ಎಂದು ಸಂಘಟನೆ ಸದಸ್ಯರು ಒತ್ತಾಯಿಸಿದರು.

ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್‌, ಸದಸ್ಯರಾದ ನಾಗರಾಜಗೌಡ, ಕಿಶೋರ್, ವೆಂಕಟೇಗೌಡ, ನಾಗೇಶ್, ತಿಮ್ಮಣ್ಣ, ಚಂದ್ರಪ್ಪ, ಹನುಮಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT