ಸೋಮವಾರ, ಜನವರಿ 24, 2022
23 °C
ಕರಾಳ ಕೃಷಿ ಕಾಯ್ದೆ ರದ್ದು ಘೋಷಣೆ: ಕಾನೂನು ಪ್ರಕ್ರಿಯೆ ಪೂರ್ಣಗೊಳಿಲು ಆಗ್ರಹ

ಕೋಲಾರ: ರೈತರ ಹೋರಾಟಕ್ಕೆ ವರ್ಷ, ಹೆದ್ದಾರಿ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ 3 ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಆರಂಭಿಸಿದ ಹೋರಾಟ ಒಂದು ವರ್ಷ ಪೂರೈಸಿದ ನೆನಪಿಗಾಗಿ ರೈತಪರ ಸಂಘಟನೆಗಳ ಸದಸ್ಯರು ಜಿಲ್ಲೆಯ ವಿವಿಧೆಡೆ ಶುಕ್ರವಾರ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ವಡಗೂರು ಗೇಟ್‌ನಲ್ಲಿ ಎತ್ತಿನ ಬಂಡಿಗಳು, ನೇಗಿಲುಗಳು, ಕೋಳಿಗಳು ಹಾಗೂ ಬೆಳೆಗಳ ಸಮೇತ ಹೆದ್ದಾರಿ ಬಂದ್‌ ಮಾಡಿದ ಸಾಮೂಹಿಕ ನಾಯಕತ್ವದ ರೈತ ಸಂಘ ಸದಸ್ಯರು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಂಡವಾಳಶಾಹಿಗಳ ಪರವಾದ ನೀತಿ ಅನುಸರಿಸುತ್ತಿವೆ. ಬಂಡವಾಳಶಾಹಿಗಳು, ಕಾರ್ಪೊರೇಟ್‌ ಕಂಪನಿಗಳು ಹಾಗೂ ಹಣವಂತ ರಾಜಕಾರಣಿಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರಗಳು ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿವೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಕಿಡಿಕಾರಿದರು.

‘ಆಳುವ ಸರ್ಕಾರಗಳ ಕೃಷಿ ವಿರೋಧಿ ನಡೆಯಿಂದ ರೈತ ಕುಲ ತಬ್ಬಲಿಯಾಗುವ ದುಸ್ಥಿತಿ ಬಂದಿದೆ. ಸರ್ಕಾರಗಳು ಕೃಷಿ ಕ್ಷೇತ್ರ ನಾಶ ಮಾಡಿ ಆಹಾರ ಭದ್ರತೆಗಾಗಿ ಹೊರ ದೇಶಗಳತ್ತ ಕೈಚಾಚುವ ಪರಿಸ್ಥಿತಿ ಸೃಷ್ಟಿಸುತ್ತಿವೆ. ರೈತರ ಬೇಡಿಕೆಗಳಿಗೆ ಸ್ಪಂದಿಸುವುದನ್ನು ಬಿಟ್ಟು ರೈತರನ್ನು ಶೋಷಿಸುತ್ತಿವೆ. ರೈತ ವಿರೋಧಿ ಕಾಯ್ದೆಗಳನ್ನು ಮಂಡಿಸಿ ತುಘಲಕ್‌ ದರ್ಬಾರ್‌ ನಡೆಸುತ್ತಿವೆ’ ಎಂದು ಗುಡುಗಿದರು.

‘ಸರ್ಕಾರಗಳು ರೈತರನ್ನು ಬೀದಿಗೆ ತಳ್ಳಿ ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಹಿತ ಕಾಯಲು ಹೊರಟಿವೆ. ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಕೈಗೊಂಬೆಯಾಗಿರುವ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ಸಣ್ಣ ಭೂ ಹಿಡುವಳಿದಾರರು ಭೂಮಿ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಲಜ್ಜೆಗೆಟ್ಟ ಸರ್ಕಾರಗಳಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯಿಲ್ಲ’ ಎಂದರು.

ರೈತರ ಹಿತ ಕಾಯಬೇಕು: ಜಿಲ್ಲೆಯ ಗಡಿ ಭಾಗದ ರಾಮಸಂದ್ರ ಗೇಟ್‌ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪ್ರೊ.ನಂಜುಂಡಸ್ವಾಮಿ ಬಣ) ಸದಸ್ಯರು, ‘ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುತ್ತೇವೆ ಎಂದು ಹೇಳಿರುವ ಪ್ರಧಾನಿ ಮೋದಿಯವರ ಕ್ರಮವನ್ನು ಸ್ವಾಗತಿಸುತ್ತೇವೆ. ಆದರೆ, ಭವಿಷ್ಯದಲ್ಲಿ ರೈತರ ಹಿತ ಕಾಯುವ ಯೋಜನೆಗಳನ್ನು ರೂಪಿಸಬೇಕು’ ಎಂದು ಆಗ್ರಹಿಸಿದರು.

‘ತೈಲೋತ್ಪನ್ನ ಹಾಗೂ ಕೃಷಿ ಸಲಕರಣೆಗಳ ಬೆಲೆ ಗಗನಕ್ಕೇರಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರವು ಬ್ರಿಟೀಷರಿಗಿಂತಲೂ ಕಡೆಯಾದ ಅಪಾಯಕಾರಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಕೇಂದ್ರವು 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿರುವುದು ಕಾರ್ಪೋರೇಟ್ ವಿರೋಧಿ ರೈತ ಚಳವಳಿಗೆ ಸಿಕ್ಕಿದ ಜಯ’ ಎಂದು ಸಂಘಟನೆಯ ರಾಜ್ಯ ಯುವ ಘಟಕ ಅಧ್ಯಕ್ಷ ರಾಮುಶಿವಣ್ಣ ಅಭಿಪ್ರಾಯಪಟ್ಟರು.

‘ಕರಾಳ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಘೋಷಣೆ ಸಂಬಂಧ ಸಂಸತ್ ಅಧಿವೇಶನದಲ್ಲಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿ ಮಾಡಬೇಕು. ದೆಹಲಿ ಹೋರಾಟದಲ್ಲಿ ಹುತಾತ್ಮರಾದ ರೈತರ ಕುಟುಂಬಗಳಿಗೆ ತಲಾ ₹ 50 ಲಕ್ಷ ಪರಿಹಾರ ಕೊಡಬೇಕು ಮತ್ತು ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸ ಕೊಡಬೇಕು. ರೈತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಬೇಕು. ರಾಜ್ಯ ಸರ್ಕಾರ ರೂಪಿಸಿದ ಭೂಸ್ವಾಧೀನ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ಹಿಂಪಡೆಯಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು