ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ, ರಾಜಕೀಯ ಪರಿವರ್ತನೆಗೆ ಕಾರ್ಯಕ್ರಮ: ರಾಯರಡ್ಡಿ ಹೇಳಿಕೆ

ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ
Last Updated 25 ಜುಲೈ 2022, 11:16 IST
ಅಕ್ಷರ ಗಾತ್ರ

ಕೊಪ್ಪಳ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಂಗವಾಗಿ ಅವರ ಸ್ನೇಹಿತರು ಸೇರಿ ದಾವಣಗೆರೆಯಲ್ಲಿ ಅ.3ರಂದು ಆಯೋಜಿಸಿರುವ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಾಮಾಜಿಕ ಮತ್ತು ರಾಜಕೀಯ ಪರಿವರ್ತನೆಗಳ ಬಗ್ಗೆ ಚರ್ಚೆ ನಡೆಯಲಿದೆ’ ಎಂದು ಕಾರ್ಯಕ್ರಮ ಸಮಿತಿ ಮಹಾಪ್ರಧಾನ ಕಾರ್ಯದರ್ಶಿ ಬಸವರಾಜ ರಾಯರಡ್ಡಿ ಹೇಳಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಸಿದ್ದರಾಮಯ್ಯನವರ ಬಲ ಪ್ರದರ್ಶನಕ್ಕೆ ಕಾರ್ಯಕ್ರಮ ಆಯೋಜಿಸಿಲ್ಲ. ಅವರು ಜನಪರ ಹಾಗೂ ಸೈದ್ಯಾಂತಿಕ ರಾಜಕಾರಣ ಮಾಡಿಕೊಂಡು ಬಂದವರು. ಪಕ್ಷಾತೀತವಾಗಿ ಎಲ್ಲಾ ಸಮಾಜದ ಜನ ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಪಕ್ಷದ ನಾಯಕರು, ಸ್ವಾಮೀಜಿಗಳು ಮತ್ತು ಗಣ್ಯರು ಎಲ್ಲರಿಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಕ್ತ ಆಹ್ವಾನವಿದೆ’ ಎಂದರು.

‘ರಾಹುಲ್ ಗಾಂಧಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಮಲ್ಲಿಕಾರ್ಜುನಖರ್ಗೆ, ಡಿ.ಕೆ. ಶಿವಕುಮಾರ್‌, ಎ.ಸಿ. ವೇಣುಗೋಪಾಲ್‌, ಕೆ.ಎಚ್‌. ಮುನಿಯಪ್ಪ ಸೇರಿದಂತೆ ಪಕ್ಷದ ಎಲ್ಲಾ ಹಿರಿಯ ನಾಯಕರು ಪಾಲ್ಗೊಳ್ಳುವರು. ರಾಹುಲ್‌ ಗಾಂಧಿ ಬರುವುದರಿಂದ ಮುಜುಗರ ಆಗಬಾರದು ಎನ್ನುವ ಕಾರಣಕ್ಕೆ ಬಿಜೆಪಿ ನಾಯಕರನ್ನು ವೇದಿಕೆಗೆ ಆಹ್ವಾನಿಸಿಲ್ಲ. ಐದು ಲಕ್ಷಕ್ಕಿಂತಲೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದ್ದು, ಕೊಪ್ಪಳ ಜಿಲ್ಲೆಯಿಂದ 30 ಸಾವಿರ ಜನ ಬರಲಿದ್ದಾರೆ’ ಎಂದು ಹೇಳಿದರು.

ಜಿಲ್ಲೆಯಲ್ಲಿ ಕಾರ್ಯಕ್ರಮ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕಾಂಗ್ರೆಸ್‌ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರವಾರು ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ತಿಳಿಸಿದರು.

‘6ರಂದು ಕುಷ್ಟಗಿ, 7ರಂದು ಕೊಪ್ಪಳ, 8ರಂದು ಯಲಬುರ್ಗಾ, 9ರಂದು ಕನಕಗಿರಿ ಮತ್ತು 10ರಂದು ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಜರುಗಲಿದೆ’ ಎಂದರು.

’ಜಿಲ್ಲೆಯ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಚುನಾವಣೆ ಸಮಯದಲ್ಲಿ ಜೆಡಿಎಸ್‌ಗೆ ಸೇರಲಿದ್ದಾರೆ’ ಎನ್ನುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿದ ತಂಗಡಗಿ ’ಸೇರಲಿ ಮುಂದೆ ನೋಡೋಣ’ ಎಂದರು. ಶಾಸಕ ಅಮರೇಗೌಡ ಬಯ್ಯಾಪುರ ಹಾಗೂ ಪಕ್ಷದ ವಿವಿಧ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT