ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿ ಸಾಧಿಸಿ: ಸಚಿವ ಬಿ.ಸಿ.ಪಾಟೀಲ

ಕಲ್ಯಾಣ ಕರ್ನಾಟಕ ಉತ್ಸವ
Last Updated 17 ಸೆಪ್ಟೆಂಬರ್ 2020, 15:41 IST
ಅಕ್ಷರ ಗಾತ್ರ

ಕೊಪ್ಪಳ: ಕಲ್ಯಾಣ ಕರ್ನಾಟಕ ಭಾಗದ ಜನತೆ ಪ್ರತಿಭಾವಂತರಾಗಿದ್ದು, ಹಿಂದುಳಿದಿದ್ದೇವೆ ಎಂಬ ಕೀಳರಿಮೆ ಬಿಟ್ಟು, ಆರ್ಥಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ 73ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದಿಂದ ಶೈಕ್ಷಣಿಕ ಫಲಿತಾಂಶಗಳಲ್ಲಿ ವಿದ್ಯಾರ್ಥಿ ಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ದೇಶದ ಉನ್ನತ ಹುದ್ದೆಗಳಿಗೆ ಆಯ್ಕೆ ಆಗಿದ್ದಾರೆ. ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿದ್ದಾರೆ. ಅವರನ್ನೆಲ್ಲ ಸ್ಫೂರ್ತಿಯಾಗಿ ಇಟ್ಟು ಕೊಳ್ಳಬೇಕು ಎಂದರು.

ಹಿಂದುಳಿದ ಪ್ರದೇಶದವರು ಎಂಬ ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಿಂದ ಬೆಳೆಯಬೇಕು. ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ಐಟಿ ಕ್ಷೇತ್ರವನ್ನು ವಿಸ್ತರಿಸುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಲಾಗಿದ್ದು, ಈ ಭಾಗಕ್ಕೆ ಅನೇಕ ಕಾರ್ಖಾನೆಗಳು, ಕೈಗಾರಿಕೆಗಳು ಬರುತ್ತಿವೆ ಎಂದರು.

ಜಿಲ್ಲೆಯಲ್ಲಿ ಸುಮಾರು ‎₹ 5,300 ಕೋಟಿ ವೆಚ್ಚದಲ್ಲಿ ಗೊಂಬೆ ಕ್ಲಸ್ಟರ್ ನಿರ್ಮಾಣಕ್ಕೆ ತಯಾರಿ ನಡೆಸಲಾಗಿದೆ. ಇದರಿಂದ ಈ ಭಾಗದಲ್ಲಿ 40 ಸಾವಿರ ಉದ್ಯೋಗಗಳು ದೊರೆಯಲಿದ್ದು, ಇದರಿಂದ ಜಿಲ್ಲೆಯ ಜನರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು. ನಮ್ಮ ಜಿಲ್ಲೆ ಇನ್ನೂ ಉನ್ನತ ಮಟ್ಟಕ್ಕೆ ಹೋಗಬೇಕು ಎಂಬ ಆಸೆ ಇದ್ದು, ಈ ನಿಟ್ಟಿನಲ್ಲಿ ಸರ್ಕಾರದಿಂದ ಜಿಲ್ಲೆಯ ಅಭಿವೃದ್ಧಿಗಾಗಿ ಸಿಗುವ ಅನುದಾನ ಸಮರ್ಪಕವಾಗಿ ಬಳಸಿ, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಶ್ರಮಿಸೋಣ ಎಂದರು.

2013ರಲ್ಲಿ ಈ ಭಾಗದ ಜನರ ಶೈಕ್ಷಣಿಕ ಹಾಗೂ ಉದ್ಯೋಗದ ಅನುಕೂಲಕ್ಕಾಗಿ ಸಂವಿಧಾನದ ಕಲಂ 371(ಜೆ) ಜಾರಿಗೆ ತಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಗಿದೆ. ಈ ಭಾಗದ ಜನರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಲಾಕ್‌ಡೌನ್‌ನಿಂದ ಎಲ್ಲರಿಗೂ ತೊಂದರೆ ಉಂಟಾಯಿತು. ಅದರಲ್ಲೂ ರೈತರು ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತರಲಾಗದೇ ನಷ್ಟ ಅನುಭವಿಸಬೇಕಾಯಿತು. ಅದಕ್ಕಾಗಿ ಕೇಂದ್ರ ಸರ್ಕಾರ ಘೋಷಿಸಿದ ‎₹ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ‎₹ 1 ಲಕ್ಷ ಕೋಟಿ ಕೃಷಿಗಾಗಿ ಹಾಗೂ ‎₹ 10 ಸಾವಿರ ಕೋಟಿ ಆಹಾರ ಸಂಸ್ಕರಣೆ ಮತ್ತು ಉತ್ಪಾದನೆಗಾಗಿ ಮೀಸಲಿಡಲಾಗಿದೆ ಎಂದು ತಿಳಿಸಿದರು.

ಜಿಡಿಪಿಯಲ್ಲಿ ಕೃಷಿಯಿಂದಲೇ ಶೇ 3.4ರಷ್ಟು ಆದಾಯ ಬರುತ್ತದೆ. ಕೃಷಿಗೆ ಮೊದಲ ಆದ್ಯತೆ ನೀಡಿ, ರೈತರ ಶ್ರೇಯೋಭಿವೃದ್ಧಿಗಾಗಿ ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿಯೂ ಅನೇಕ ಪ್ರಗತಿಪರ ರೈತರಿದ್ದಾರೆ. ಸಾವಯವ ಕೃಷಿಕರಿದ್ದಾರೆ.
ಅವರಿಂದ ಸ್ಫೂರ್ತಿ, ಸಲಹೆಗಳನ್ನು ಪಡೆದು ಇನ್ನುಳಿದ ರೈತರು ತಮ್ಮ ಕೃಷಿಯಲ್ಲಿ ಪ್ರಗತಿ ಸಾಧಿಸಬೇಕು. ರೈತರೇ ರೈತರನ್ನು ಉಳಿಸಲು, ಬೆಳೆಸಲು ಸಾಧ್ಯ ಎಂದರು.

ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿಶ್ವನಾಥ ರೆಡ್ಡಿ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿ.ಪಂ. ಸಿಇಒ ರಘುನಂದನ್ ಮೂರ್ತಿ, ಎಸ್‌ಪಿ ಜಿ.ಸಂಗೀತಾ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್.ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT