ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಈಶ್ವರಪ್ಪರನ್ನು ಬಂಧಿಸಿ, ಬಿಜೆಪಿ ಸರ್ಕಾರ ವಜಾ ಮಾಡಿ: ಕಾಂಗ್ರೆಸ್ ಪ್ರತಿಭಟನೆ

Last Updated 15 ಏಪ್ರಿಲ್ 2022, 10:17 IST
ಅಕ್ಷರ ಗಾತ್ರ

ಕೊಪ್ಪಳ: ಸಂತೋಷ ಆತ್ಮಹತ್ಯೆಗೆ ಕಾರಣರಾದ ಸಚಿವ ಕೆ.ಎಸ್. ಈಶ್ವರಪ್ಪರನ್ನು ಬಂಧಿಸಬೇಕು ಮತ್ತು ಭ್ರಷ್ಟಾಚಾರದ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ನೇತೃತ್ವದಲ್ಲಿ ನಗರದ ಅಶೋಕ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಂತರ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಭ್ರಷ್ಟಾಚಾರದಿಂದ ದೇಶದಲ್ಲಿ ಹೆಸರುವಾಸಿಯಾಗಿದೆ. ಸರ್ಕಾರ ಕಾಮಗಾರಿಗಳಿಗಾಗಿ ಶೇ. 40ರಷ್ಟು ಕಮಿಷನ್ ಕೇಳುತ್ತಿದೆ ಎಂದು ಗುತ್ತಿಗೆದಾರರೇ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಯಾವುದೇ ರೀತಿಯ ಕ್ರಮ ಕೈಗೊಳ್ಳಲಿಲ್ಲ. ಇದಕ್ಕೆ ನಿದರ್ಶನ ಎನ್ನುವಂತೆ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕಾರಣ ಎಂದು ಪತ್ರ ಬರೆದಿದ್ದಾರೆ. ಈಶ್ವರಪ್ಪ ವಿರುದ್ಧ ಪ್ರಕರಣವೂ ದಾಖಲಾಗಿದೆ. ಆದರೆ ಈವರೆಗೂ ಅವರನ್ನು ಬಂಧಿಸಿಲ್ಲ ಇದು ಖಂಡನೀಯ ಎಂದರು.

ಇದೇ ರೀತಿ ರಾಜ್ಯ ಸರ್ಕಾರದಲ್ಲಿ ಹಲವು ಸಚಿವರು ಗುತ್ತಿಗೆದಾರರಿಂದ ಕಮಿಷನ್ ಪಡೆಯುತ್ತಿದ್ದಾರೆ. ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷ ಕೆಂಪಣ್ಣ ಈಗಾಗಲೇ ಯಾವ ಯಾವ ಸಚಿವರು ಅತಿ ಹೆಚ್ಚು ಕಮಿಷನ್ ಪಡೆಯುತ್ತಿದ್ದಾರೆ ಎನ್ನುವ ಬಗ್ಗೆ ಬಹಿರಂಗವಾಗಿ ಹೇಳಿದ್ದಾರೆ. ಅವರೆಲ್ಲರೂ ಕೂಡಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮಾಜಿ ಸಚಿವ ಬಸವರಾಜ್ ರಾಯರಡ್ಡಿ ಮಾತನಾಡಿ, ಸಂತೋಷ ಪಾಟೀಲ್ ಕಟ್ಟಾ ಬಿಜೆಪಿ ಕಾರ್ಯಕರ್ತ. ವೈಯಕ್ತಿಕವಾಗಿ ನನಗೂ ಗೊತ್ತು. ತಮ್ಮ ಕಾರ್ಯಕರ್ತನನ್ನು ಉಳಿಸಿಕೊಳ್ಳದಷ್ಟು ಹೊಣೆಗೇಡಿ ಮತ್ತು ಕ್ರೂರ ಸರ್ಕಾರ ಬಿಜೆಪಿಯದ್ದಾಗಿದೆ. ಹಿಂಡಲಗಾ ಪ್ರದೇಶದ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಸಾಲ ಮಾಡಿ, ಕಾಮಗಾರಿ ನಡೆಸಿದ್ದಾರೆ. ಕಮಿಷನ್ ಆಸೆಗೆ ಸಚಿವ ಕೆ.ಎಸ್.ಈಶ್ವರಪ್ಪ ಬಡ ಕಾರ್ಯಕರ್ತರನ್ನು ಬಲಿ ತೆಗೆದುಕೊಂಡಿದ್ದಾರೆ ಎಂದು ಟೀಕಿಸಿದರು‌.

ಶಾಸಕ ರಾಘವೇಂದ್ರ ಹಿಟ್ನಾಳ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಾರಡ್ಡಿ ಗಲಬಿ, ಎಂ.ಕಾನ್ ಪಾಷಾ, ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಮಾಲತಿ ನಾಯಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಕಿಶೋರಿ ಬೂದನೂರು, ಜ್ಯೋತಿ ಗೊಂಡಬಾಳ, ವೆಂಕನಗೌಡ ಹಿರೇಗೌಡ್ರ, ಎಸ್.ಬಿ.ನಾಗರಳ್ಳಿ, ಕೃಷ್ಣಾ ಇಟ್ಟಂಗಿ, ನಗರಸಭೆ ಅಧ್ಯಕ್ಷೆ ಲತಾ ಚಿನ್ನೂರು ಸೇರಿ ಇತರರು ಇದ್ದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT