ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಯದ ಮೇಲೆ ಬರೆ ಎಳೆದ ಸರ್ಕಾರ: ಪ್ರಕಾಶ ರಾಠೋಡ ಆರೋಪ

Last Updated 7 ಜುಲೈ 2021, 12:12 IST
ಅಕ್ಷರ ಗಾತ್ರ

ಕುಷ್ಟಗಿ: ‘ಪೆಟ್ರೋಲ್‌, ಡೀಸೆಲ್‌ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಜನರ ಗಾಯದ ಮೇಲೆ ಬರೆ ಎಳೆಯುತ್ತಿದೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಕಾಶ ರಾಠೋಡ ಆರೋಪಿಸಿದರು.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಪಟ್ಟಣದಲ್ಲಿ ಬ್ಲಾಕ್‌ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಗೆ ಸಂಬಂಧಿಸಿದ ಸೈಕಲ್‌ ಜಾಥಾದಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದರು.

ದೇಶದ ಬಡವರ ಮೇಲೆ ಕೇಂದ್ರ ಸರ್ಕಾರ ಆರ್ಥಿಕ ಹೊರೆ ಹೊರಿಸಿದೆ ಎಂದರು.

ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಿದ್ದರೂ ದೇಶದಲ್ಲಿ ಇಂಧನ ಬೆಲೆ ಹೆಚ್ಚಳವಾಗಿರಲಿಲ್ಲ. ಆದರೆ ಈಗ ಅದಕ್ಕೆ ವಿರುದ್ಧವಾಗಿ ಅಂದರೆ ಕಚ್ಚಾ ತೈಲದ ದರ ಬಹಳಷ್ಟು ಕಡಿಮೆಯಾಗಿದ್ದರೂ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಹೆಚ್ಚುತ್ತಿದೆ. ಇಂಧನ ಬೆಲೆಯಲ್ಲಿನ ಹೆಚ್ಚಳದಿಂದ ಸಹಜವಾಗಿ ಅಗತ್ಯವಸ್ತುಗಳ ದರವೂ ಗಗನಕ್ಕೆ ಏರುತ್ತಿದೆ. ಇದು ಬಡವರು ಮತ್ತು ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೊರಿಸಿದ್ದು, ಬಿಜೆಪಿ ಸರ್ಕಾರಗಳ ವಿರುದ್ಧ ಜನರು ಬಂಡೇಳುವಂಥ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಬಡವರಿಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಿದ ಬಿಜೆಪಿ ಸರ್ಕಾರ ಈಗ ಸಿಲಿಂಡರ್ ದರವನ್ನೂ ಹೆಚ್ಚಿಸಿದ್ದರಿಂದ ಬಹುತೇಕ ಬಡ ಕುಟುಂಬದವರು ಅಡುಗೆ ಅನಿಲ ಸಿಲಿಂಡರ್ ಬಳಸುವುದನ್ನು ಕೈಬಿಟ್ಟಿದ್ದಾರೆ. ಆದರೆ ಅಡುಗೆ ಅನಿಲ ಸಂಪರ್ಕ ನೀಡಿದ ನಂತರ ಪಡಿತರ ವ್ಯವಸ್ಥೆಯಲ್ಲಿ ನೀಡಲಾಗುತ್ತಿದ್ದ ಸೀಮೆ ಎಣ್ಣೆ ಪೂರೈಕೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಯಿತು. ಬಿಜೆಪಿ ಸರ್ಕಾರದ ತಪ್ಪು ನಿರ್ಧಾರದಿಂದ ಬಡವರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಸೀಮೆ ಎಣ್ಣೆ ಇಲ್ಲದ ಕಾರಣ ವಿದ್ಯುತ್‌ ಇಲ್ಲದಿದ್ದರೆ ಬಡವರ ಮನೆಯಲ್ಲಿ ಕತ್ತಲು ಆವರಿಸುವಂತಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದ್ದರೆ, ಇತ್ತ ಯಡಿಯೂರಪ್ಪ ಅವರ ರಾಜ್ಯ ಸರ್ಕಾರ ಭ್ರಷ್ಟಾಚಾರ, ಸ್ವಜನ ಪಕ್ಷಪಾತ,ಆಂತರಿಕ ಕಚ್ಚಾಟದಿಂದ ಅಧೋಗತಿಗೆ ಇಳಿದಿದ್ದು ಜನ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಪಶ್ಚಾತಾಪಡುವಂತಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ ಎಂದು ಪ್ರಕಾಶ್‌ ಹೇಳಿದರು.

ಶಾಸಕ ಅಮರೇಗೌಡ ಬಯ್ಯಾಪುರ, ಮಾಜಿ ಶಾಸಕ ಹಸನಸಾಬ್ ದೋಟಿಹಾಳ, ಬ್ಲಾಕ್‌ ಅಧ್ಯಕ್ಷ ದೇವೇಂದ್ರಪ್ಪ ಬಳೂಟಗಿ ಇತರರು ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ನಾಯಕ, ತಾಲ್ಲೂಕು ಘಟಕದ ಅಧ್ಯಕ್ಷೆ ಶಕುಂತಲಾ ಹಿರೇಮಠ, ಪರಿಶಿಷ್ಟ ಜಾತಿ ನಗರ ಘಟಕದ ಅಧ್ಯಕ್ಷ ಮಂಜುನಾಥ ಕಟ್ಟಿಮನಿ, ಪುರಸಭೆಯಲ್ಲಿನ ಕಾಂಗ್ರೆಸ್‌ ಪಕ್ಷದ ಸದಸ್ಯರು, ಇತರೆ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕಂದಕೂರು ಗ್ರಾಮದ ಶರಣಬಸವೇಶ್ವರ ದೇವಸ್ಥಾನದಿಂದ ಆರಂಭಗೊಂಡ ಸೈಕಲ್‌ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT