ಭಾನುವಾರ, ಅಕ್ಟೋಬರ್ 24, 2021
20 °C
ಜಂಗಮರ ಕಲ್ಗುಡಿ ಗ್ರಾಮದ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

ಶಿವರಾಜ ತಂಗಡಗಿ ನೇತೃತ್ವದಲ್ಲಿ ಪಾದಯಾತ್ರೆ: ಠಾಣೆ ಎದುರು ಕಾಂಗ್ರೆಸ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜಂಗಮರ ಕಲ್ಗುಡಿ (ಗಂಗಾವತಿ): ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ವಿ.ಪ್ರಸಾದ ಅವರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕನಕಗಿರಿ ಮತ್ತು ಗಂಗಾವತಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ನೇತೃತ್ವದಲ್ಲಿ ಜಂಗಮರ ಕಲ್ಗುಡಿಯಿಂದ ಪೊಲೀಸ್ ಠಾಣೆಯವರೆಗೆ ಪಾದಯಾತ್ರೆ ನಡೆಸಿದರು.

ಕಾಂಗ್ರೆಸ್‌ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಮಾತನಾಡಿ,‘ಹಲ್ಲೆ ನಡೆಸಿದವರನ್ನು ಪೊಲೀಸರು ಬಂಧಿಸುತ್ತಿಲ್ಲ. ನಿರ್ಲಕ್ಷ್ಯ ತೋರಿಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ಹಲ್ಲೆ ನಡೆಸಿದ ವ್ಯಕ್ತಿಯ ಬಂಧನಕ್ಕೆ ಪೊಲೀಸ್‌ ಅಧಿಕಾರಿಗಳು ಕೇಳಿದಂತೆ ಸೋಮವಾರ ಸಂಜೆಯವರೆಗೆ ಕಾಲಾವಕಾಶ ನೀಡಲಾಗಿತ್ತು. ಇದುವರೆಗೂ ವ್ಯಕ್ತಿಯನ್ನು ಬಂಧಿಸಿಲ್ಲ. ಟ್ರ್ಯಾಕ್ಟರ್‌ ಜಪ್ತಿ ಮಾಡಿಲ್ಲ. ಯಾವ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ. ಜನಸಾಮಾನ್ಯರಿಗೆ ನ್ಯಾಯ ಒದಗಿಸುವುದು ನಿಮ್ಮ ಕರ್ತವ್ಯ ಅಲ್ಲವೆ’ ಎಂದು ಪ್ರಶ್ನಿಸಿದರು.

ಮಾಜಿ ಸಂಸದ ಶಿವರಾಮಗೌಡ ಮಾತನಾಡಿ, ‘ಬಿಜೆಪಿ ಶಾಸಕರ ಬೆಂಬಲಿಗರು ತಡರಾತ್ರಿ ಬಂದು ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಹೇಳಿದ ಕೂಡಲೇ ಪ್ರಕರಣ ದಾಖಲಾಗುತ್ತದೆ. ಕಾನೂನು ಸುವ್ಯವಸ್ಥೆ ಎಲ್ಲಿ ಹೋಗಿದೆ ಸ್ವಾಮಿ. ಸರ್ಕಾರ ನಿಮ್ಮದಾದರೇ ಏನಾದರೂ ಮಾಡುವಿರೇ’ ಎಂದು ಅವರು ಹೇಳಿದರು.

ಕೂಡಲೇ ವಿ.ಪ್ರಸಾದ ಮೇಲೆ ದಾಖಲಾಗಿರುವ ಸುಳ್ಳು ಜಾತಿ‌ನಿಂದನೆ ಪ್ರಕರಣವನ್ನು ಬಿ ರಿಪೋರ್ಟ್ ಹಾಕಿ ಮುಕ್ತಾಯ ಗೊಳಿಸಬೇಕು ಎಂದರು.

ಜಿ.ಪಂ ಮಾಜಿ ಅಧ್ಯಕ್ಷ ರಾಜಶೇಖರ್ ಹಿಟ್ನಾಳ ಮಾತನಾಡಿ, ‘ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಜೆಜೆಎಂ ಕಾಮಗಾರಿ ಸಂಬಂಧ ನಡೆದ ಹಲ್ಲೆ ಪ್ರಕರಣದ ಕುರಿತು ತನಿಖೆ ನಡೆಸಿ, ಅಪರಾಧಿಗಳನ್ನು ಶಿಕ್ಷಿಸಬೇಕು’ ಎಂದರು.

ಹಲ್ಲೆ ಮಾಡಿದ ವ್ಯಕ್ತಿಯನ್ನು ಕೂಡಲೇ ಬಂದಿಸಿ, ಹಲ್ಲೆಗೆ ಒಳಗಾದ ವಿ.ಪ್ರಸಾದ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಒಂದು ವೇಳೆ ಬಂಧನ ಮಾಡದಿದ್ದರೆ ಮುಂದಿನ ದಿನಮಾನಗಳಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ತಹಶೀಲ್ದಾರ್ ಯು.ನಾಗರಾಜ ಮತ್ತು ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಅವರಿಗೆ ಮನವಿ ಸಲ್ಲಿಸಿದರು.

ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ರೆಡ್ಡಿಶ್ರೀನಿವಾಸ, ಮುಕುಂದರಾವ್ ಭವಾನಿಮಠ, ಕನಕಗಿರಿ ಬ್ಲಾಕ್ ಅಧ್ಯಕ್ಷ ಗಂಗಾಧರ ಸ್ವಾಮಿ, ಮಹ್ಮದ್ ರಫಿ, ನಿರಲೋಟಿ ಸಿದ್ದಪ್ಪ, ಶೈಲಾಜ ಹಿರೇಮಠ, ನಿರಗಂಟಿ ಬಸವರಾಜ, ಸತ್ಯನಾರಾಯಣ ಸೇರಿ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು