ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕು ಪ್ರಮಾಣ ಇಳಿಕೆ- ಎಚ್ಚರಿಕೆ ಅಗತ್ಯ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಿಕೆ
Last Updated 19 ಜೂನ್ 2021, 13:49 IST
ಅಕ್ಷರ ಗಾತ್ರ

ಕೊಪ್ಪಳ: ‘ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಶೇ 5 ಕ್ಕಿಂತ ಕಡಿಮೆಯಾಗಿದೆ. ಇನ್ನು ಮುಂದೆ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೊರೊನಾ ಸೋಂಕು ನಿಯಂತ್ರಣ ಹಾಗೂ ಇತರ ಅಭಿವೃದ್ಧಿ ವಿಷಯಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಜಿಲ್ಲಾಡಳಿತ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿ, ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಶೇ 5 ಕ್ಕಿಂತ ಕಡಿಮೆ ಮಾಡಲು ಶ್ರಮಿಸಿದ್ದೀರಿ. ಸದ್ಯ ಎಲ್ಲ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಹಾಸಿಗೆಗಳು ಲಭ್ಯವಿದ್ದು, ಯಾವುದೇ ಕಾರಣಕ್ಕೂ ಸೋಂಕಿತರನ್ನು ಹೋಂ ಐಸೋಲೇಷನ್‌ನಲ್ಲಿ ಇರಲು ಬಿಡದೆ ಕಡ್ಡಾಯವಾಗಿ ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸಬೇಕು. ಇದರಿಂದ ಸೋಂಕು ಹರಡುವಿಕೆ ತಡೆಯಲು ಸಾಧ್ಯ ಎಂದರು.

ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಮಾತನಾಡಿ,‘ಕಪ್ಪು ಶಿಲೀಂಧ್ರ ಸೋಂಕಿತರಿಗೆ ಚಿಕಿತ್ಸೆಗಾಗಿ ಬೇರೆ ಜಿಲ್ಲೆಗಳಿಗೆ ಶಿಫಾರಸು ಮಾಡಲಾಗುತ್ತಿದೆ. ಅಲ್ಲಿ ಸರದಿಯಲ್ಲಿ ರೋಗಿಗಳು ಕಾಯುತ್ತಿದ್ದು, ಇದರಿಂದ ಗಂಭೀರ ಸ್ಥಿತಿ ತಲುಪಿದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆರೋಗ್ಯ ಸ್ಥಿತಿ ಗಂಭೀರ ಇರುವ ರೋಗಿಗಳಿಗೆ ಆದ್ಯತೆ ನೀಡಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಯಲಬುರ್ಗಾ ಶಾಸಕ ಹಾಲಪ್ಪ ಆಚಾರ ಮಾತನಾಡಿ,‘ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್ ಲಸಿಕೆ ಪಡೆದವರ ಸಂಖ್ಯೆ, ವೆಂಟಿಲೇಟರ್‌ಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದವರು ಹಾಗೂ ಮರಣ ಹೊಂದಿದವರು, ಎಚ್‌ಎಫ್‌ಎನ್‌ಸಿ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ತಾಲ್ಲೂಕುವಾರು ಮಾಹಿತಿ ನೀಡಬೇಕು ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಎನ್–95 ಮಾಸ್ಕ್ ಒದಗಿಸಬೇಕು. ಕೊರೊನಾ ಸೋಂಕು ಕಡಿಮೆ ಇರುವ ಪ್ರದೇಶಗಳಲ್ಲಿ ಕೋವಿಡೇತರ ರೋಗಿಗಳ ಚಿಕಿತ್ಸೆಗೆ ಆಸ್ಪತ್ರೆಯಲ್ಲಿ ಅವಕಾಶ ಮಾಡಿಕೊಡಬೇಕು’ ಎಂದು ಹೇಳಿದರು.

ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಮಾತನಾಡಿ,‘ಜಿಲ್ಲೆಯ ಕಪ್ಪು ಶಿಲೀಂಧ್ರ ಸೋಂಕಿತರು ಬೇರೆ ಜಿಲ್ಲೆಗಳಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಬಂದ ಮೇಲೆ ಕಿಮ್ಸ್ ನಲ್ಲಿ ಅಂತಹ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು. ಈಗಾಗಲೇ ಉತ್ತಮ ರೀತಿಯಲ್ಲಿ ವೈದ್ಯರು ಕಾರ್ಯನಿರ್ವಹಿಸುತ್ತಿದ್ದು, ಕೋವಿಡ್ ಮೂರನೇ ಅಲೆಯ ಭೀತಿ ಇರುವುದರಿಂದ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ರಘುನಂದನ್ ಮೂರ್ತಿ,ಎಸ್‌ಪಿ ಟಿ.ಶ್ರೀಧರ್,ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಹೇಮಂತ್ ಎನ್., ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು.ಟಿ, ಕಿಮ್ಸ್ ನಿರ್ದೇಶಕ ಡಾ.ವೈಜನಾಥ ಇಟಗಿ ಹಾಗೂ ಜಂಟಿ ಕೃಷಿ ನಿರ್ದೇಶಕ ಶಿವಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT