ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷಮತೆಯಿಂದ ಕಾರ್ಯನಿರ್ವಹಿಸಿ: ಡಿಸಿ ಸೂಚನೆ

ಕೊರೊನಾ ಸೋಂಕು ನಿಯಂತ್ರಣಕ್ಕೆ ಕ್ರಮ; ಕೋವಿಡ್ ಕರ್ತವ್ಯಕ್ಕೆ ಅಧಿಕಾರಿಗಳ ನಿಯೋಜನೆ
Last Updated 19 ಮೇ 2021, 3:39 IST
ಅಕ್ಷರ ಗಾತ್ರ

ಕೊಪ್ಪಳ:ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಸದ್ಯ ಕೋವಿಡ್ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವುದರಿಂದ ಅಧಿಕಾರಿಗಳು ಇನ್ನೂ ಹೆಚ್ಚಿನ ಕ್ಷಮತೆಯಿಂದ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಸೂಚನೆ ನೀಡಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆರೋಗ್ಯ, ಕಂದಾಯ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಕೋವಿಡ್ ಕರ್ತವ್ಯದಲ್ಲಿ ಹಗಲಿರುಳು ಶ್ರಮಿಸುತ್ತಿವೆ. ಪ್ರಸ್ತುತ ಇನ್ನೂ ಹೆಚ್ಚಿನ ಮಾನವ ಸಂಪನ್ಮೂಲದ ಅಗತ್ಯವಿರುವುದರಿಂದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಆದ್ದರಿಂದ ನಿಯೋಜಿತ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಯಾವುದೇ ದೂರುಗಳಿಗೆ ಆಸ್ಪದವಿಲ್ಲದಂತೆ ಅಚ್ಚುಕಟ್ಟಾಗಿ ನಿರ್ವಹಿಸಿ. ಕೋವಿಡ್ ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಸತಿ ಶಾಲೆಗಳಲ್ಲಿ ಕೋವಿಡ್ಆರೈಕೆ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ಕಟ್ಟಡ ನಿರ್ವಹಣೆ ಕುರಿತ ಎಲ್ಲ ಜವಾಬ್ದಾರಿಗಳನ್ನು ಪಿಡಬ್ಲೂಡಿ, ಪಿಆರ್‌ಇಡಿ, ಕೆಆರ್‌ಐಡಿಎಲ್ಗೆ ತಾಲ್ಲೂಕುವಾರು ಹಂಚಿಕೆ ಮಾಡಲಾಗುತ್ತದೆ. ಇಲಾಖೆಗಳು ಹಂಚಿಕೆಯಾದ ಕೇಂದ್ರಗಳಲ್ಲಿ ಯಾವುದೇ ರೀತಿಯ ಕಟ್ಟಡ ದುರಸ್ಥಿಗೆ ಸಂಬಂಧಿಸಿದ, ಮೂಲ ಸೌಕರ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದುಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಅಧಿಕಾರಿಗಳನ್ನು ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು, ಇವರು ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಹಯೋಗದೊಂದಿಗೆ ಕೋವಿಡ್ ರೋಗಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಹಾಗೂ ಅವರಿಗೆ ಕೋವಿಡ್ ಪರೀಕ್ಷೆಗಳನ್ನು ಮಾಡಿಸುವುದು, ಹೋಂ ಐಸೋಲೇಷನ್ ನಲ್ಲಿರುವ ಕೋವಿಡ್ ರೋಗಿಗಳನ್ನು ಸಮೀಪದ ಕೋವಿಡ್ ಕೇಂದ್ರಕ್ಕೆ ದಾಖಲಿಸುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.

ಹಲವು ಗ್ರಾಮಗಳಲ್ಲಿ ಶಾಲೆಗಳನ್ನು ಕೋವಿಡ್ ಕೇರ್ ಸೆಂಟರ್‌ಗಳನ್ನಾಗಿ ಮಾಡಲಾಗಿದೆ. ಅಲ್ಲಿ ಬರುವ ರೋಗಿಗಳಿಗೆ ಎಲ್ಲ ರೀತಿಯ ಅಗತ್ಯ ಸೌಕರ್ಯ ದೊರೆಯುವಂತೆ ಹಾಗೂ ಗ್ರಾಮಗಳಲ್ಲಿ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯಕ್ಕೆ ಸ್ಥಳೀಯ ಶಿಕ್ಷಕರನ್ನು ನಿಯೋಜಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ತೋಟಗಾರಿಕೆ ಉಪನಿ ರ್ದೇಶಕ ಕೃಷ್ಣ ಉಕ್ಕುಂದ ,ಡಾ.ಬಸವರಾಜ ಕುಂಬಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT