ಶನಿವಾರ, ಸೆಪ್ಟೆಂಬರ್ 25, 2021
29 °C
ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್ ಹೇಳಿಕೆ

ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ‘ಜಿಲ್ಲೆಯಾದ್ಯಂತ ಆ.22 ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಎಸ್‌ಒಪಿ (ಪ್ರಮಾಣಿತ ಕಾರ್ಯಾಚರಣೆ ವಿಧಾನ) ಕಡ್ಡಾಯವಾಗಿ ಅನುಸರಿಸಿ, ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆ-2021 ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯಿಂದ ಸಿಬ್ಬಂದಿಯನ್ನು ನಿಯೋಜಿಸಬೇಕು. ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಸಾಗಿಸುವಾಗ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಅಂಗವಿಕಲ  ಅಭ್ಯರ್ಥಿಗಳಿಗೆ ರ‍್ಯಾಂಪ್ ವ್ಯವಸ್ಥೆಯೊಂದಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಬೇಕು. ಅಭ್ಯರ್ಥಿಗಳು ಅಕ್ರಮದಲ್ಲಿ ಭಾಗಿಯಾದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತರಾದ ಎಲ್ಲ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು. ಸದ್ಯ ಪರೀಕ್ಷಾ ಕರ್ತವ್ಯಕ್ಕೆ ಅಗತ್ಯ ಪ್ರಮಾಣದ ಅಧಿಕಾರಿಗಳನ್ನು ನೇಮಕ ಮಾಡಿ, ಆದೇಶ ಹೊರಡಿಸಲಾಗಿದೆ. ಆದಾಗ್ಯೂ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಅಧಿಕಾರಿ, ಸಿಬ್ಬಂದಿ ನೇಮಿಸಿ ಆದೇಶ ಹೊರಡಿಸಿ. ಇದರಿಂದ ಪರೀಕ್ಷಾ ಕರ್ತವ್ಯದಲ್ಲಿರುವ ಯಾವುದೇ ಅಧಿಕಾರಿ, ಸಿಬ್ಬಂದಿಗೆ ಅನಾರೋಗ್ಯ ಅಥವಾ ಇನ್ಯಾವುದೇ ಸಮಸ್ಯೆ ಕಂಡುಬಂದಲ್ಲಿ ಹೆಚ್ಚುವರಿಯಾಗಿ ನೇಮಿಸಿದ ಸಿಬ್ಬಂದಿಯನ್ನು ಪರ್ಯಾಯವಾಗಿ ಕರ್ತವ್ಯಕ್ಕೆ ನಿಯೋಜಿಸಿ, ಇದರಿಂದ ವ್ಯವಸ್ಥಿತ ಹಾಗೂ ಸುಗಮವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುತ್ತದೆ. ಈ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಿ ಎಂದು ಡಿಡಿಪಿಐಗೆ ಸೂಚನೆ ನೀಡಿದರು. ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ ಮಾತನಾಡಿ,‘ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಗರಿಷ್ಠ 300 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 1ನೇ ಪತ್ರಿಕೆಗೆ 19 ಪರೀಕ್ಷಾ ಕೇಂದ್ರಗಳು ಹಾಗೂ 2ನೇ ಪತ್ರಿಕೆಗೆ 26 ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ’ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ನಿರ್ದೇಶಕ ಕೃಷ್ಣಮೂರ್ತಿ ಟಿ., ಪೊಲೀಸ್ ಇಲಾಖೆಯ ರವಿ ಉಕ್ಕುಂದ, ಟಿಇಟಿ ಪರೀಕ್ಷಾ ನೋಡಲ್ ಅಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಚಾರ್ಯರು ಈ ವೇಳೆ ಸಭೆಯಲ್ಲಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.