ಮಂಗಳವಾರ, ಸೆಪ್ಟೆಂಬರ್ 28, 2021
21 °C
ಕೋವಿಡ್ ಮೂರನೇ ಅಲೆ: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

ಸೋಂಕು ತಡೆಗೆ ಕಠಿಣ ಕ್ರಮ: ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜಿಲ್ಲಾಡಳಿತದಿಂದ ಸೋಂಕು ವ್ಯಾಪಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೆರೆ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ತಮಿಳುನಾಡುಗಳಿಂದ ರಾಜ್ಯಕ್ಕೆ ಬರುತ್ತಿರುವ ಸಾರ್ವಜನಿಕರಿಂದ ಮತ್ತು ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೋವಿಡ್ ಮೂರನೇ ಅಲೆಯ ಪ್ರಕರಣಗಳು ದಾಖಲಾಗುತ್ತಿವೆ. ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ ಮೂರನೇ ಅಲೆಯ ಪ್ರಕರಣ ಪತ್ತೆಯಾಗಿಲ್ಲ. ಮುಂದಿನ ದಿನಗಳಲ್ಲಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಬೇರೆ ಜಿಲ್ಲೆಗಳಿಗೆ ವಿವಿಧ ಕಾರಣಗಳಿಗಾಗಿ ವಲಸೆ ಹೋದ ಜಿಲ್ಲೆಯ ಗ್ರಾಮಗಳ ಜನರು ಗ್ರಾಮಕ್ಕೆ ಮರಳುತ್ತಿರುವುದರಿಂದ ಕೋವಿಡ್ ಸೋಂಕು ಹರಡುವ ಭೀತಿ ಇದೆ. ಆದ್ದರಿಂದ ಜಿಲ್ಲೆಯ ಗಡಿ ಭಾಗಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಪ್ರಯಾಣಿಕರನ್ನು ಐಸೋಲೇಷನ್ ಹಾಗೂ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಹಾಯದಿಂದ ಗ್ರಾಮಕ್ಕೆ ಮರಳಿದವರ ಮಾಹಿತಿ ಪಡೆದು ಅವರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನ್ನುಮ್ ಮಾತನಾಡಿ, ಆಗಸ್ಟ್ 15 ರೊಳಗೆ ಜಿಲ್ಲೆಯಾದ್ಯಂತ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯ ಪೂರ್ಣಗೊಳ್ಳಲಿದ್ದು, ಗುರುತಿಸಿದ ಅಪೌಷ್ಟಿಕತೆ ಹೊಂದಿದ ಮಕ್ಕಳಿಗೆ ವಿಟಮಿನ್ ಮಾತ್ರೆ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ಹೊಂದಿದ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದರು.

ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಮಾತನಾಡಿ, ಕೋವಿಡ್ ಮೂರನೇ ಅಲೆ ನಿಯಂತ್ರಿಸಲು ಜಿಲ್ಲೆಯಾದ್ಯಂತ ಮದುವೆ ಸಮಾರಂಭ, ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಕಾರ್ಯಕ್ರಮ, ಸಂತೆ ಮಾರುಕಟ್ಟೆ ನಿಷೇಧಿಸಿ, ವಿಶಾಲ ಮೈದಾನಗಳಾದ ತಾಲ್ಲೂಕು ಕ್ರೀಡಾಂಗಣ, ಜಿಲ್ಲಾ ಕ್ರೀಡಾಂಗಣ, ಗವಿಸಿದ್ದೇಶ್ವರ ಮಠದ ಮುಂದಿನ ಪ್ರದೇಶಗಳಲ್ಲಿ ನಿರ್ದಿಷ್ಟ ಅಂತರ ಗುರುತಿಸಿ ಸಂತೆ ಮಾರುಕಟ್ಟೆ ಆರಂಭಿಸಿ ಎಂದು ಸಲಹೆ ನೀಡಿದರು.

ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಮಾತನಾಡಿ, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ಕೋವಿಡ್ ಮೂರನೇ ಅಲೆಗೆ ಅಗತ್ಯ ಚಿಕಿತ್ಸೆ ನೀಡಲು ಎಲ್ಲ ವೈದ್ಯಕೀಯ ಉಪಕರಣ ಒದಗಿಸಲಾಗಿದೆ. ಆದರೆ ತಜ್ಞ ವೈದ್ಯರು, ಅನಸ್ತೇಷಿಯಾ ತಜ್ಞರ ಕೊರತೆ ಇರುವುದರಿಂದ ವೈದ್ಯಕೀಯ ಉಪಕರಣಗಳ ಸೂಕ್ತ ಬಳಕೆ ಆಗುತ್ತಿಲ್ಲ. ಮೊದಲು ತಜ್ಞರನ್ನು ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಿ ಎಂದರು.

ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪೂರ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಉಪಕರಣ ಅಳವಡಿಸಲಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಪರೀಕ್ಷೆ ನಡೆಯುತ್ತಿಲ್ಲ. ಸರ್ಕಾರಿ ಆಸ್ಪತ್ರೆಗೆ ಬರುವ ಜನರಿಗೆ ಅಗತ್ಯ ಸೇವೆ ನೀಡಿ. ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನಗಳ ಕಾಲೇಜು ಆರಂಭವಾಗಿ 6 ವರ್ಷಗಳಾಯ್ತು. ಆದರೂ ಇದುವರೆಗೂ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ ಆರಂಭಿಸಿಲ್ಲ. ಶೀಘ್ರದಲ್ಲಿಯೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಎಸ್‌ಪಿ ಟಿ.ಶ್ರೀಧರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ, ಡಿಎಚ್‌ಒ ಡಾ.ಲಿಂಗರಾಜ.ಟಿ., ಕಿಮ್ಸ್ ನಿರ್ದೇಶಕ ಡಾ.ವೈಜನಾಥ ಇಟಗಿ, ವೈದ್ಯಕೀಯ ಅಧೀಕ್ಷಕ ಡಾ.ವೇಣುಗೋಪಾಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.