ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಸಂಖ್ಯಾ ನಿಯಂತ್ರಣ ಜಾಗೃತಿ ಅಗತ್ಯ

ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಪೂರ್ವಭಾವಿ ಸಭೆ: ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಹೇಳಿಕೆ
Last Updated 7 ಜುಲೈ 2021, 8:50 IST
ಅಕ್ಷರ ಗಾತ್ರ

ಕೊಪ್ಪಳ: ‘ವಿಶ್ವ ಜನಸಂಖ್ಯಾ ದಿನದ ಪ್ರಯುಕ್ತ ಜು.11 ರಂದು ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಕಾರ್ಯಕ್ರಮ ಮಾಡಬೇಕು. ಜನರಿಗೆ ಅರಿವು ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಜೂ.22 ರಿಂದ ಜು.10 ರವರೆಗೆ ‘ದಂಪತಿ ಸಂಪರ್ಕ’ ಎಂಬ ವಿಷಯದ ಕುರಿತು ಮೊದಲ ಪಾಕ್ಷಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜು.11 ರಿಂದ 24 ರವರೆಗೆ ‘ಜನಸಂಖ್ಯಾ ಸ್ತ್ರೀಕರಣ’ ಎಂಬ ವಿಷಯದ ಕುರಿತು ಎರಡನೇ ಪಾಕ್ಷಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲರೂ ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಲಿಂಗರಾಜು ಮಾತನಾಡಿ,‘ಕೋವಿಡ್ ಕಾರಣ ಪ್ರಸಕ್ತ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಅದ್ಧೂರಿಯಾಗಿ ಮಾಡುವುದು ಸರಿಯಲ್ಲ. ಜನರು ಇರುವಲ್ಲಿಗೆ ಹೋಗಿ ವಿಶ್ವ ಜನಸಂಖ್ಯಾ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲಾಗುವುದು’ ಎಂದರು.

ಹುಲಿಗಿ ಗ್ರಾಮದ ಹುಲಿಗೆಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಳಿಗೆಗಳನ್ನು ಹಾಕುವುದರ ಮೂಲಕ ಜನರಲ್ಲಿ ಅರಿವು ಮೂಡಿಸಲು ಚಿಂತಿಸಲಾಗುತ್ತಿದೆ. ಧ್ವನಿವರ್ಧಕದ ಮೂಲಕ ಘೋಷಣೆ ಕೂಗುವುದರೊಂದಿಗೆ ಜಾಗೃತಿ ಮೂಡಿಸಬೇಕಾಗಿದೆ. ‘ವಿಪತ್ತಿನಲ್ಲೂ ಕುಟುಂಬ ಯೋಜನೆ ಸೇವೆ, ಸ್ವಾವಲಂಬಿ ರಾಷ್ಟ್ರ ಮತ್ತು ಕುಟುಂಬಕ್ಕೆ ನಾಂದಿ’ ಎಂಬುದು ಈ ವರ್ಷದ ಘೋಷವಾಕ್ಯ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಶಾಂತಬಾಬು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿಂದ್ರನಾಥ, ಆರ್.ಸಿ.ಎಚ್ ಅಧಿಕಾರಿ ಡಾ.ಜಂಬಯ್ಯ, ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಎಂ.ಜಿ ಮಹೇಶ,ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗೌರಿಶಂಕರ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೆಂಕಟೇಶ, ಜಿಲ್ಲಾ ಸರ್ವೇಕ್ಷಾಣಾಧಿಕಾರಿ ಡಾ.ನಂದಕುಮಾರ ಹಾಗೂ ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಜಿ.ಸುರೇಶ ಅವರು ಈ ವೇಳೆ
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT