ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಡ್ರಗ್ಸ್‌ ದುಷ್ಪರಿಣಾಮ: ಜಾಗೃತಿ ಮೂಡಿಸಿ’

ಮಾದಕ ದ್ರವ್ಯ ಅಕ್ರಮ ಸಾಗಾಟ ತಡೆ ಜಂಟಿ ಕ್ರಿಯಾ ಯೋಜನಾ ಸಭೆ
Last Updated 17 ಸೆಪ್ಟೆಂಬರ್ 2021, 3:02 IST
ಅಕ್ಷರ ಗಾತ್ರ

ಕೊಪ್ಪಳ: ಮಕ್ಕಳಲ್ಲಿ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳ ಸೇವನೆ ತಡೆಗಟ್ಟಲು ಹಲವಾರು ಕ್ರಮ ಕೈಗೊಳ್ಳಲಾಗುತ್ತಿದ್ದು, ಅದಕ್ಕೂ ಮೊದಲು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳ ಗ್ರಾಮ ಸಭೆಯಲ್ಲಿ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಆಯೋಜಿಸಿದ್ದ ಮಕ್ಕಳಲ್ಲಿ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆ ತಡೆಗಟ್ಟುವಿಕೆ ಕುರಿತ ಜಂಟಿ ಕ್ರಿಯಾ ಯೋಜನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಲಾ-ಕಾಲೇಜುಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಹಾಗೂ ಮಾದಕ ವಸ್ತು ಮಾರಾಟ ನಿಷೇಧಿಸಲಾಗಿದೆ. ಆದಾಗ್ಯೂ ಸುಲಭವಾಗಿ ದೊರೆಯುತ್ತಿದ್ದು, ಇದರಿಂದ ಮಕ್ಕಳ ಆರೋಗ್ಯದಲ್ಲಿ ದುಷ್ಪರಿಣಾಮ ಉಂಟಾಗುತ್ತಿವೆ. ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಮಾದಕ ವಸ್ತು ತಡೆಯನ್ನುಂಟು ಮಾಡುತ್ತವೆ. ಆದ್ದರಿಂದ ಸದ್ಯ ಇರುವ ಕಾನೂನುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು. ಅದಕ್ಕೆ ಪೂರಕವಾಗಿ ಮಕ್ಕಳ ಗ್ರಾಮಸಭೆಗಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಮಕ್ಕಳಿಗೆ ಮಾದರಿಯಾಗಿರಬೇಕಾದ ಶಿಕ್ಷಕರೇ ಮಾದಕ ವಸ್ತುಗಳ ಸೇವನೆ ಮಾಡಿದರೆ ಅದರಿಂದ ಮಕ್ಕಳಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಆದ್ದರಿಂದ ಪ್ರತಿ ಶಾಲಾಮುಖ್ಯಶಿಕ್ಷಕರು ಮಾದಕ ವ್ಯಸನಿಯಾದ ಶಿಕ್ಷಕರ ಮಾಹಿತಿ ನೀಡುವಂತೆ ಹಾಗೂ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿ. ಜಿಲ್ಲೆಯ ವಿವಿಧ ಶಾಲೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಬೇಕುಎಂದರು.

ನಗರದಲ್ಲಿ ಸಂದೇಹಾಸ್ಪದವಾಗಿ ವ್ಯಾಪಾರ ನಡೆಸುವ ಯಾವುದೇ ಅಂಗಡಿಗಳ ಮೇಲೆ ಕಾನೂನು ರೀತ್ಯ ಸಂಬಂಧಿಸಿದ ಅಧಿಕಾರಿಗಳು ದಾಳಿ ಮಾಡಬಹುದು. ಔಷಧ ಅಂಗಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಔಷಧ ನಿಯಂತ್ರಕರು ಸೂಕ್ತ ನಿರ್ದೇಶನ ನೀಡಬೇಕು.ಜಿಲ್ಲೆಯಲ್ಲಿರುವ ಬಾರ್‌ಗಳಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಮಕ್ಕಳು ಕಾರ್ಯನಿರ್ವಹಿಸುವಂತಿಲ್ಲ
ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ತಾಂಡಾ, ಗ್ರಾಮ ಹಾಗೂ ನಗರ ಪ್ರದೇಶದ ಹೊರ ವಲಯಗಳಲ್ಲಿ ವಾಸಿಸುವ ಮಕ್ಕಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ ತೊಂದರೆಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅಗತ್ಯ ಕೌನ್ಸೆಲಿಂಗ್ ಮೂಲಕ ತಿಳಿವಳಿಕೆ ಮೂಡಿಸಿ, ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಲು ಸಹಾಯ ಮಾಡಬೇಕು
ಎಂದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ,ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ,ಡಿಡಿಪಿಯು ರವಿಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ, ವಿವಿಧ ಇಲಾಖೆಗಳ ಅಧಿಕಾರಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT