ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ವಿಮೆ ಪಾವತಿ: ವಿಳಂಬ ಸಲ್ಲ, ಜಿಲ್ಲಾಧಿಕಾರಿ ಎಚ್ಚರಿಕೆ

ಫಸಲ್ ಬಿಮಾ ಯೋಜನೆ: ಜಿಲ್ಲಾ ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಎಚ್ಚರಿಕೆ
Last Updated 25 ನವೆಂಬರ್ 2021, 3:50 IST
ಅಕ್ಷರ ಗಾತ್ರ

ಕೊಪ್ಪಳ: ‘ಅಕಾಲಿಕ ಹಾಗೂ ಹೆಚ್ಚಿನ ಮಳೆಯಿಂದ ಜಿಲ್ಲೆಯ ರೈತರ ಬೆಳೆ ಹಾನಿಯಾಗಿದ್ದು, ವಿಮಾ ಕಂತು ಪಾವತಿಸಿದ ಎಲ್ಲ ರೈತರಿಗೂ ಸರಿಯಾದ ಸಮಯಕ್ಕೆ ವಿಮಾ ಸೌಲಭ್ಯ ಒದಗಿಸಬೇಕು. ವಿಮಾ ಕಂಪನಿಗಳು ರೈತರಿಗೆ ವಿಮೆ ಮೊತ್ತ ಪಾವತಿಸಲು ವಿಳಂಬ ಮಾಡಬಾರದು’ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 2021-22ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮುಂಗಾರು ಹಂಗಾಮಿನ ಮಧ್ಯದ ಅವಧಿಯಲ್ಲಿ ಸ್ಥಳೀಯ ಮತ್ತು ಕೊಯ್ಲೋತ್ತರ ಬೆಳೆ ಹಾನಿಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದ ಕೊಯ್ಲಿಗೆ ಬಂದ ಬೆಳೆ ಮತ್ತು ಕೊಯ್ಲಿನ ನಂತರ ಜಮೀನಿನಲ್ಲಿಯೇ ಸಂಗ್ರಹಿಸಿದ್ದ ಅಪಾರ ಪ್ರಮಾಣದ ಬೆಳೆಗಳು ಹಾನಿಯಾಗಿವೆ. ಇದರಿಂದ ಉತ್ತಮ ಇಳುವರಿ ಮೂಲಕ ಒಳ್ಳೆಯ ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ಆಘಾತ ಉಂಟಾಗಿದೆ. ಆದ್ದರಿಂದ ಈ ಸಂದರ್ಭದಲ್ಲಿ ಸರ್ಕಾರದ ಪರವಾಗಿ ಜಿಲ್ಲಾಡಳಿತ ರೈತರ ಸಹಾಯಕ್ಕೆ ಮುಂದಾಗಿದ್ದು, ಈ ಪ್ರಕ್ರಿಯೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ವಿಮಾ ಕಂಪನಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಯೋಜನೆಯಡಿ ಜಿಲ್ಲೆಯಲ್ಲಿ ಬೆಳೆಹಾನಿ ಕುರಿತ ಸಮೀಕ್ಷಾ ಕಾರ್ಯ ಆರಂಭವಾಗಿದ್ದು, ಕೃಷಿ ಇಲಾಖೆ ಹಾಗೂ ವಿಮಾ ಕಂಪನಿ ಪ್ರತಿನಿಧಿಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ವಿಮಾ ಕಂತು ಪಾವತಿಸಿದ ಹಾಗೂ ಬೆಳೆ ಹಾನಿಗೆ ಒಳಗಾದ ಜಮೀನಿನ ಅರ್ಹ ರೈತರ ಬಗ್ಗೆ ಹಾಗೂ ಹಾನಿಯಾದ ಬೆಳೆ, ಪ್ರಮಾಣದ ಬಗ್ಗೆ ಪರಿಹಾರ ತಂತ್ರಾಂಶದಲ್ಲಿ ಮಾಹಿತಿಯನ್ನು ಅಪಲೋಡ್ ಮಾಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಾಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿದರು.

ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಹೇಮಂತ್‌ಕುಮಾರ್ ಎನ್., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶರಣಬಸವರಾಜ, ಜಂಟಿ ಕೃಷಿ ನಿರ್ದೇಶಕ ಸದಾಶಿವ, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣ ಮೂರ್ತಿ ದೇಸಾಯಿ, ಸೇರಿದಂತೆ ಕೃಷಿ ವಿಜ್ಞಾನಿಗಳು, ವಿಮಾ ಕಂಪನಿ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಹಾಯಕ ಕೃಷಿ ನಿರ್ದೇಶಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT