ಶನಿವಾರ, ಅಕ್ಟೋಬರ್ 23, 2021
25 °C
ಸಮಾಜ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ:

ಕಾಮಗಾರಿಗಳ ಸ್ಥಿತಿಗತಿ ವರದಿ ಸಲ್ಲಿಸಿ: ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ‘ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಜೂರಾಗಿರುವ ಸಮುದಾಯ ಭವನ, ಪ್ರಗತಿ ಕಾಲೊನಿ ಸೇರಿ ವಿವಿಧ ಕಾಮಗಾರಿಗಳ ಸ್ಥಿತಿಗತಿ ಮಾಹಿತಿಯುಳ್ಳ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಭವನ, ಕಾಲೊನಿ ಅಭಿವೃದ್ಧಿ, ವಸತಿ ನಿಲಯಗಳ ನಿರ್ಮಾಣ, ದುರಸ್ತಿ, ಇತರೆ ಕಾಮಗಾರಿಗಳ ಕುರಿತು ಇಲಾಖೆಯ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಅನುಷ್ಠಾನ ಏಜೆನ್ಸಿಯವರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೂರರಿಂದ–ನಾಲ್ಕು ವರ್ಷಗಳ ಹಿಂದೆ ಮಂಜೂರಾಗಿರುವ ಕಾಮಗಾರಿಗಳು ಇನ್ನೂ ಪ್ರಾರಂಭವಾಗಿಲ್ಲ. ನಿವೇಶನ ಸಮಸ್ಯೆಯಿದ್ದಲ್ಲಿ ಕಾಲಕಾಲಕ್ಕೆ ಇಲಾಖೆಯ ಅಧಿಕಾರಿಗಳು ಮತ್ತು ಅನುಷ್ಠಾನ ಏಜೆನ್ಸಿಯವರು ಸ್ಥಳೀಯ ಶಾಸಕರನ್ನು ಸಂಪರ್ಕಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಂಡು ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣ ಗೊಳಿಸಲು ಅನುಷ್ಠಾನ ಏಜೆನ್ಸಿಯವರಿಗೆ ಹಾಗೂ ಕಾಮಗಾರಿಗಳು ಉತ್ತಮ ಗುಣಮಟ್ಟದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕುರಿತು ಇಲಾಖೆಯ ಅಧಿಕಾರಿಗಳು ಸತತ ಭೇಟಿಯ ಮೂಲಕ ಖಚಿತಪಡಿಸಿಕೊಳ್ಳಬೇಕು ಎಂದರು.

ಪೂರ್ಣಗೊಂಡ ಕಾಮಗಾರಿಗಳಿಗೆ ಅನುದಾನ ಲಭ್ಯವಿದ್ದಲ್ಲಿ ಬಿಡುಗಡೆ ಮಾಡಿ. ಕೇಂದ್ರ ಕಚೇರಿಯಿಂದ ಅನುದಾನ ಬಿಡುಗಡೆಯಾಗಬೇಕಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಅನುದಾನ ಬಿಡುಗಡೆಗೆ ಪ್ರಸ್ತಾವ ಸಲ್ಲಿಸುವಂತೆ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯು ಒಂದು ಗ್ರಾಮದ ಸಂಪೂರ್ಣ ಅಭಿವೃದ್ಧಿಗೆ ಪೂರಕವಾದ ಯೋಜನೆಯಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ 19 ಗ್ರಾಮಗಳಲ್ಲಿ ನಿಗದಿತ ಕಾಲಾವಧಿಯಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಏಜೆನ್ಸಿಗಳು ಕ್ರಮ ವಹಿಸಬೇಕು ಎಂದು ಏಜೆನ್ಸಿಯವರಿಗೆ ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಕಾಮಗಾರಿಗಳಿಗಾಗಿ ಒಟ್ಟು ₹9 ಕೋಟಿ ಅನುದಾನದಲ್ಲಿ ₹7 ಕೋಟಿಯಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡುತ್ತೀರಿ. ಆದರೆ, ಎಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ. ಮುಕ್ತಾಯ ಹಂತದಲ್ಲಿ ಎಷ್ಟಿವೆ, ಪ್ರಾರಂಭಿಸದೆ ಇರುವ ಹಾಗೂ ಸ್ಥಗಿತಗೊಂಡ ಕಾಮಗಾರಿಗಳು ಎಷ್ಟು ಮತ್ತು ಇದಕ್ಕೆ ಕಾರಣ ಈ ಎಲ್ಲಾ ಮಾಹಿತಿ ಪಡೆದು ವರದಿ ಸಲ್ಲಿಸಿ ಎಂದು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನವೀನ್ ಶಿಂತ್ರೆ ಮಾತನಾಡಿ,‘ಜಿಲ್ಲೆಯ ಪರಿಶಿಷ್ಟ ಜಾತಿಯ 142 ಭವನಗಳ ಪೈಕಿ 73 ಪೂರ್ಣಗೊಂಡಿದ್ದು, 43 ಪ್ರಗತಿಯಲ್ಲಿವೆ. ಇನ್ನೂ 26 ಕಾಮಗಾರಿಗಳು ಪ್ರಾರಂಭಿಸುವುದು ಬಾಕಿ ಇದೆ. ಪರಿಶಿಷ್ಟ ಪಂಗಡದ 91 ಭವನಗಳ ಪೈಕಿ 39 ಪೂರ್ಣ, 22 ಪ್ರಗತಿಯಲ್ಲಿದ್ದು, ಇನ್ನೂ 30 ಕಾಮಗಾರಿಗಳು ಪ್ರಾರಂಭಿಸುವುದು ಬಾಕಿ ಇದೆ’ ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಕೆ.ಆರ್.ಐ.ಡಿ.ಎಲ್. ಮತ್ತು ನಿರ್ಮಿತಿ ಕೇಂದ್ರದ ಅಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳು ಈ ವೇಳೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು