ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈ ಶ್ರೀರಾಮ್ ಹೇಳುವಂತೆ ಗಂಗಾವತಿಯಲ್ಲಿ ಅಂಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ ಸಂತ್ರಸ್ತ: ಗಡ್ಡಕ್ಕೆ ಬೆಂಕಿ ಹಚ್ಚಿದ್ದಾರೆಂದು ಆರೋಪ
Published 1 ಡಿಸೆಂಬರ್ 2023, 3:16 IST
Last Updated 1 ಡಿಸೆಂಬರ್ 2023, 3:16 IST
ಅಕ್ಷರ ಗಾತ್ರ

ಗಂಗಾವತಿ (ಕೊಪ್ಪಳ ಜಿಲ್ಲೆ): ನಗರದಲ್ಲಿ ಇತ್ತೀಚೆಗೆ ಮನೆಗೆ ತೆರಳಲು ಆಟೊಗಾಗಿ ಕಾಯುತ್ತಿದ್ದ ಮುಸ್ಲಿಂ ಸಮುದಾಯದ ಅಂಧ ವೃದ್ಧರೊಬ್ಬರನ್ನು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವಂತೆ ದುಷ್ಕರ್ಮಿಗಳ ಗುಂಪು ಒತ್ತಡ ಹಾಕಿ ಹಲ್ಲೆ ನಡೆಸಿದೆ.

‘ಹೊಸಪೇಟೆಗೆ ಹೋಗಿದ್ದ ನಾನು ನ. 25ರಂದು ಮಧ್ಯರಾತ್ರಿ ಗಂಗಾವತಿಗೆ ಬಂದು ಮನೆಗೆ ಹೋಗಲು ಆಟೊ ನಿಲ್ದಾಣದ ಬಳಿ ಕಾಯುತ್ತಿದ್ದೆ. ಆಗ ಬೈಕ್ ಮೇಲೆ ಬಂದ ಕೆಲ ಯುವಕರು ಎಲ್ಲಿಗೆ ಹೋಗುತ್ತಿದ್ದಿಯಾ ಎಂದು ಪ್ರಶ್ನಿಸಿದರು. ಬಲವಂತವಾಗಿ ಬೈಕ್ ಮೇಲೆ ಕೂರಿಸಿಕೊಂಡು ಪಂಪಾನಗರ ಬಳಿ ರೈಲ್ವೆ ಸೇತುವೆ ಕೆಳಗೆ ಕರೆದೊಯ್ದು ಜೈ ಶ್ರೀರಾಮ್ ಎನ್ನುವಂತೆ ಒತ್ತಾಯಿಸಿ ಹಲ್ಲೆ ಮಾಡಿದರು’ ಎಂದು ಮೆಹಬೂಬ್ ನಗರದ ನಿವಾಸಿ ಹುಸೇನಸಾಬ್ (65) ದೂರು ನೀಡಿದ್ದಾರೆ.

‘ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಕೊಲೆ ಬೆದರಿಕೆ ಹಾಕಿದರು. ನೆಲದ ಮೇಲೆ ಬೀಳಿಸಿ ಹಲ್ಲೆ ಮಾಡಿದ ಯುವಕರು ನನ್ನ ಗಡ್ಡಕ್ಕೆ ಬೆಂಕಿ ಹಚ್ಚಿದರು. ನನಗೆ ಕಣ್ಣು ಕಾಣುವುದಿಲ್ಲ. ‌ನನ್ನಲ್ಲಿದ್ದ ಹಣವನ್ನು ದೋಚಿಕೊಂಡು ಹೋಗಿದ್ದಾರೆ. ಬಳಿಕ ಬೆಳಗಿನ ಜಾವ ಕುರಿ ಕಾಯುವ ಹುಡುಗರು ನನ್ನನ್ನು ರಕ್ಷಣೆ ಮಾಡಿ ಮನೆಗೆ ತಲುಪಿಸಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಗುರುವಾರ ರಾತ್ರಿ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಮುಸ್ಲಿಂ ಸಮಾಜದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಸುತ್ತಮುತ್ತಲಿನ ಜನರಿಂದ ಮಾಹಿತಿ ಪಡೆದರು.

ಗಂಗಾವತಿಯಲ್ಲಿ ನಡೆದ ಮುಸ್ಲಿಂ ಸಮುದಾಯದ ವ್ಯಕ್ತಿ ಮೇಲಿನ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಆರೋಪಿಗಳ ಪತ್ತೆಗಾಗಿ ಹುಡುಕಾಟ ಆರಂಭಿಸಿದ್ದೇವೆ.
–ಯಶೋಧಾ ವಂಟಗೋಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಕೊಪ್ಪಳ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT