ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 7.5 ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ

ವಾಲ್ಮೀಕಿ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ
Last Updated 19 ಸೆಪ್ಟೆಂಬರ್ 2020, 3:45 IST
ಅಕ್ಷರ ಗಾತ್ರ

ಕನಕಗಿರಿ: ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ವಾಲ್ಮೀಕಿ ನಾಯಕ ಸಮುದಾಯಕ್ಕೆ ಶೇ 7.5 ಮೀಸಲಾತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಾಲ್ಮೀಕಿ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ತಾಲ್ಲೂಕಿನ ವಾಲ್ಮೀಕಿ ಸಮಾಜದವರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹನುಮೇಶ ನಾಯಕ, ಕೆಡಿಪಿ ಸದಸ್ಯ ಗುರುಮೂರ್ತಿಗೌಡ, ಪ್ರಮುಖರಾದ ಗ್ಯಾನಪ್ಪ ಗಾಣದಾಳ, ಶರತ್ ನಾಯಕ, ರಮೇಶ ಆಗೋಲಿ ಅವರು ಮಾತನಾಡಿ, ವಾಲ್ಮೀಕಿ ಸಮುದಾಯ ರಾಜ್ಯದಲ್ಲಿ ಸುಮಾರು 75 ಲಕ್ಷ ಜನಸಂಖ್ಯೆ ಹೊಂದಿದೆ. ಸಮುದಾಯದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ನೀಡುವ ಮೀಸಲಾತಿಯಲ್ಲಿ ನ್ಯಾಯಯುತ ಪಾಲು ದೊರೆತಿಲ್ಲ, ನಕಲಿ ಪ್ರಮಾಣ ಪತ್ರ ಪಡೆದವರು ಎಸ್‌ಟಿ ಸಮುದಾಯದ ಮೀಸಲಾತಿ ಸೌಲಭ್ಯವನ್ನು ದುರುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಅವರು ದೂರಿದರು.

ಹರಿಹರದ ರಾಜನಹಳ್ಳಿಯಿಂದ ಬೆಂಗಳೂರುವರೆಗೂ ಪಾದಯಾತ್ರೆ ನಡೆಸಿದರೂ ಯಾವುದೇ ಉಪಯೋಗ ಇಲ್ಲದಂತಾಗಿದೆ. ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕೆಂದು ಅವರು ಒತ್ತಾಯಿಸಿದರು.

ನಕಲಿ ಎಸ್‌ಟಿ ಜಾತಿ ಪ್ರಮಾಣಪತ್ರ ಪಡೆದವರು ಹಾಗೂ ನೀಡಿದವರ ವಿರುದ್ಧ ಕ್ರಮ ಜರುಗಿಸಬೇಕು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಬೇಕು. ಕೊಪ್ಪಳ ಜಿಲ್ಲೆಯಲ್ಲಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮವನ್ನು ಪ್ರತ್ಯೇಕವಾಗಿ ತೆರೆಯಬೇಕು. ಎಸ್‌ಟಿ ಸಮುದಾಯಕ್ಕೆ ಪ್ರತ್ಯೇಕ ವಾಲ್ಮೀಕಿ ಸಚಿವಾಲಯ ಸ್ಥಾಪಿಸಬೇಕೆಂದು ಅವರು ಆಗ್ರಹಿಸಿದರು.

ವಾಲ್ಮೀಕಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಹಶೀಲ್ದಾರ್ ರವಿ ಅಂಗಡಿ ಅವರ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಬಿಜೆಪಿ ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ವೀರಬಸನಗೌಡ, ವಾಲ್ಮೀಕಿ ಸಮಾಜದ ಅಧ್ಯಕ್ಷ ನಾಗೇಶ ಮಲ್ಲಾಪುರ, ಗೌರವಾಧ್ಯಕ್ಷ ರಂಗಪ್ಪ ಕೊರಗಟಗಿ, ಪ್ರಮುಖರಾದ ರಾಮನಗೌಡ ಬುನ್ನಟ್ಟಿ, ಶರಣಪ್ಪ ಸೋಮಸಾಗರ, ಪರಶುರಾಮ ತಳವಾರ, ಬಸವರಾಜ ಹೇರೂರು, ಶಶಿಧರ ನಾಯಕ, ಪಂಪಾಪತಿ ತರ್ಲಕಟ್ಟಿ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT