ಮಂಗಳವಾರ, ಆಗಸ್ಟ್ 3, 2021
24 °C
ಜಿಲ್ಲಾ ಅಭಿವೃದ್ಧಿ ಸಮನ್ವಯ, ಉಸ್ತುವಾರಿ ಸಮಿತಿ ಸಭೆಯಲ್ಲಿ ಸಂಸದ ಸಂಗಣ್ಣ ಕರಡಿ

ಗುಣಮಟ್ಟದ ಬಿತ್ತನೆ ಬೀಜ ವಿತರಿಸಿ-ಸಂಸದ ಸಂಗಣ್ಣ ಕರಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: 'ಜಿಲ್ಲೆಯ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ವಿತರಿಸಿ, ಕಳಪೆ ಬೀಜ ಮಾರುವ ಡೀಲರ್‌ಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ. ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ' ಎಂದು ಸಂಸದ ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ)ಯ ಅಧ್ಯಕ್ಷ ಸಂಗಣ್ಣ ಕರಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ಕಳಪೆ ಬಿತ್ತನೆ ಬೀಜಗಳನ್ನು ವಿತರಿಸಿ ಡೀಲರ್‌ಗಳು ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದರಿಂದ ರೈತರಿಗೆ ನಿರೀಕ್ಷಿತ ಇಳುವರಿ ಬಾರದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ನಕಲಿ ಅಥವಾ ಕಳಪೆ ಬಿತ್ತನೆ ಬೀಜ ವಿತರಿಸುವ ಡೀಲರ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಂಡು ಅವರ ಪರವಾನಗಿ ರದ್ದುಗೊಳಿಸಿ. ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸುವ ಡೀಲರ್‌ಗಳ ಬಗ್ಗೆಯೂ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಪ್ರಧಾನಮಂತ್ರಿ ಸಿಂಚಾಯ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೂ 10,370 ರೈತರಿಗೆ ಸ್ಪ್ರಿಂಕ್ಲರ್‌ಗಳನ್ನು ಒದಗಿಸಲಾಗಿದೆ. ಬಾಕಿ ಉಳಿದ ರೈತರಿಗೂ ಶೀಘ್ರ ಈ ಸೌಲಭ್ಯ ಒದಗಿಸಿ. ಖಾರಿಫ್ ಬೆಳೆವಿಮೆಗಾಗಿ ಜಿಲ್ಲೆಯಲ್ಲಿ ಒಟ್ಟು 83,949 ರೈತರು ₹ 9.52 ಕೋಟಿ ಮೊತ್ತದ ವಿಮೆ ಕಂತನ್ನು ಪಾವತಿಸಿದ್ದು, ಅದರಲ್ಲಿ 10,389 ರೈತರಿಗೆ ಮಾತ್ರ ₹ 1.35 ಕೋಟಿ ಬೆಳೆ ವಿಮೆ ಜಮೆಯಾಗಿದೆ. ಬಾಕಿ ಉಳಿದ ರೈತರಿಗೆ ಬೆಳೆ ವಿಮೆ ಜಮೆಯಾಗದಿರಲು ಕಾರಣಗಳೇನು, ಅವುಗಳಲ್ಲಿ ಸರಿಪಡಿಸಬಹುದಾದ ಅಂಶಗಳು ಎಷ್ಟು ಮುಂತಾದವುಗಳ ಕುರಿತು ವಿವರಗಳನ್ನು ಸಲ್ಲಿಸಿ ಎಂದರು.

ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ (ಹಾರ್ಟಿಕಲ್ಚರ್ ಟೆಕ್ನಾಲಜಿ ಪಾರ್ಕ್) ಮಂಜೂರಾಗಿದ್ದು, ಇದಕ್ಕಾಗಿ ಜಿಲ್ಲಾ ತೋಟಗಾರಿಕೆ ಇಲಾಖೆಯಿಂದ ₹ 100 ಕೋಟಿ ಮೊತ್ತದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ದಾಳಿಂಬೆ, ಪೇರಲ, ಸೀತಾಫಲ ಸೇರಿದಂತೆ 10 ತೋಟಗಾರಿಕೆ ಬೆಳೆಗಳ ಸಂಸ್ಕರಣೆ, ಉಪ ಉತ್ಪನ್ನಗಳ ಉತ್ಪಾದನೆ, ಮೌಲ್ಯ ವರ್ಧನೆ, ಔಷಧೀಯ ಮತ್ತು ಸುಗಂಧ ಉತ್ಪನ್ನಗಳನ್ನು ಉತ್ಪಾದಿಸಬಹುದು. ಇವುಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆಯನ್ನು ಒದಗಿಸುವುದರ ಮೂಲಕ ಜಿಲ್ಲೆಯ ಉತ್ಪನ್ನಗಳಿಗೆ ಬ್ರಾಂಡ್ ಕಲ್ಪಿಸಿಕೊಡಬಹುದು ಎಂದು ಅವರು ತೋಟಗಾರಿಕೆ ಉಪನಿರ್ದೇಶಕರಿಗೆ ತಿಳಿಸಿದರು.

ಮುಂಡರಗಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಮೊದಲನೇ ಹಂತದಲ್ಲಿ ನಡೆದ ಅಕ್ರಮದ ಕುರಿತು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗೆ ಪ್ರಶ್ನಿಸಿದರು. 

ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಿಗಿಂತ ದುಬಾರಿಯಾದರೂ ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳು ಹೆಚ್ಚಾಗಿ ದಾಖಲಾಗುತ್ತಾರೆ. ಇದಕ್ಕೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ರೋಗಿಗಳೊಂದಿಗೆ ವರ್ತಿಸುವ ರೀತಿಯೂ ಕಾರಣವಿರಬಹುದು. ಆದ್ದರಿಂದ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ವೈದ್ಯರು ಹಾಗೂ ಸಿಬ್ಬಂದಿ ಮಾನವೀಯತೆ ಹಾಗೂ ಸೌಜನ್ಯದಿಂದ ವರ್ತಿಸಬೇಕು. ಡಿಎಚ್‌ಒ, ಸರ್ಜನ್, ಕಿಮ್ಸ್ ನಿರ್ದೇಶಕರು ಸಮನ್ವಯದಿಂದ ಕಾರ್ಯ ನಿರ್ವಹಿಸಿ ಎಂದರು.

ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ ಮಾತನಾಡಿ, ಕುಷ್ಟಗಿ ತಾಲ್ಲೂಕಿನ 153 ಹಳ್ಳಿಗಳಿಗೆ ಸೆಪ್ಟೆಂಬರ್ ಅಂತ್ಯದೊಳಗೆ ಕುಡಿಯುವ ನೀರಿನ ಸಂಪರ್ಕ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತಿ ಸಿಇಒ ಫೌಜಿಯಾ ತರನುಮ್, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು