ಮಂಗಳವಾರ, ಅಕ್ಟೋಬರ್ 19, 2021
22 °C
ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯಾಧಿಕಾರಿಗಳೊಂದಿಗೆ ಸಭೆ

ವೈದ್ಯರು ಜವಾಬ್ದಾರಿಯುತವಾಗಿ ಕೆಲಸ ಮಾಡಿ: ಸಚಿವ ಹಾಲಪ್ಪ ಬಸಪ್ಪ ಆಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ವೈದ್ಯರಿಗೆ ಸಮಾಜದಲ್ಲಿ ಗೌರವಯುತ ಸ್ಥಾನವಿದ್ದು, ಅದನ್ನು ಕಾಪಾಡುವುದಲ್ಲದೇ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಮೂಲಕ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಬಸಪ್ಪ ಆಚಾರ ಹೇಳಿದರು.

ಅವರು ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕಿಮ್ಸ್) ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಚಿಕಿತ್ಸೆ ಲಭ್ಯವಿಲ್ಲ ಎಂದು ಬೇರೆಡೆ ಕಳಿಸುವ ಕೆಲಸ ಆಗಬಾರದು. ಹಾಗೆ ಮಾಡಿದರೆ ಮುಂದಿನ ದಿನಮಾನಗಳಲ್ಲಿ ತಮ್ಮ ದಾರಿ ತಾವು ಕಂಡುಕೊಳ್ಳಬೇಕಾಗುತ್ತದೆ. ಜಿಲ್ಲೆಯ ಗಂಗಾವತಿ ಮತ್ತು ಯಲಬುರ್ಗಾ ತಾಲ್ಲೂಕು ಆಸ್ಪತ್ರೆಗಳು ಉತ್ತಮ ಚಿಕಿತ್ಸೆ ನೀಡುವ ಮೂಲಕ ಹೆಸರುವಾಸಿಯಾಗಿವೆ. ಆದರೆ, ಕೊಪ್ಪಳ ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್‌ನಂಥ ದೊಡ್ಡ ಸಂಸ್ಥೆಗಳು ಜಿಲ್ಲೆಯಲ್ಲಿದ್ದು, ಜನರಿಗೆ ಸರಿಯಾಗಿ ಚಿಕಿತ್ಸೆ ನೀಡದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.

ವೈದ್ಯರು ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಿದಾಗ ಮಾತ್ರ ಜನರಿಗೆ ಒಳ್ಳೆಯ ಸೇವೆ ನೀಡಬಹುದು. ಜನರ ಜೀವ ರಕ್ಷಣೆ ಮಾಡುವ ತಮ್ಮನ್ನು ಜನರು ದೇವರ ಸ್ಥಾನದಲ್ಲಿ ನೋಡುತ್ತಾರೆ. ದುಡ್ಡಿಗೆ ಮಹತ್ವ ಕೊಡದೇ ಮೊದಲು ಬಡಜನರ ಸೇವೆಗೆ ಆದ್ಯತೆ ನೀಡಿ, ತಮ್ಮ ವೃತ್ತಿ ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಮಾತನಾಡಿ,‘ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯರು ತಮ್ಮ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸದೇ ಸರ್ಕಾರಿ ಆಸ್ಪತ್ರೆಯ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಮಾಡುತ್ತಾರೆ. ಜಿಲ್ಲೆಯಲ್ಲಿ ಹಲವಾರು ದೊಡ್ಡ ಸರ್ಕಾರಿ ಆಸ್ಪತ್ರೆಗಳಿದ್ದರೂ ಜನರಿಗೆ ಸರಿಯಾಗಿ ಚಿಕಿತ್ಸೆ ನೀಡದಿರುವುದು ನಿಜವಾಗಲೂ ವಿಷಾದ ನೀಯ ಸಂಗತಿಯಾಗಿದೆ’ ಎಂದರು.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಾತನಾಡಿ,‘ ಇನ್ನು ಮುಂದೆ ವೈದ್ಯರ ವಿರುದ್ಧ ಕರ್ತವ್ಯಲೋಪದ ದೂರುಗಳು ಕೇಳಿಬಂದರೆ ಅಂಥವರ ವಿರುದ್ಧ ಐಪಿಸಿ ಸೆಕ್ಷನ್ 188 ರಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಲಿಂಗರಾಜ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ, ಶಸ್ತ್ರಚಿಕಿತ್ಸಕ ಪ್ರಶಾಂತ ಬಾಬು, ಕಿಮ್ಸ್ ನಿರ್ದೇಶಕ ಡಾ.ವೈಜನಾಥ ಇಟಗಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹೇಶ ಎಂ.ಜಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಮಾಂಜನೇಯ ಸೇರಿದಂತೆ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಈ ವೇಳೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು