ನಿಯಮ ಪಾಲನೆಗೆ ಚುನಾವಣಾಧಿಕಾರಿಗಳಿಗೆ ಸೂಚನೆ

7
ನಗರ, ಸ್ಥಳೀಯ ಸಂಸ್ಥೆ ಚುನಾವಣೆ ಕುರಿತ ತರಬೇತಿ ಕಾರ್ಯಕ್ರಮ

ನಿಯಮ ಪಾಲನೆಗೆ ಚುನಾವಣಾಧಿಕಾರಿಗಳಿಗೆ ಸೂಚನೆ

Published:
Updated:
Deccan Herald

ಕೊಪ್ಪಳ: ಜಿಲ್ಲೆಯಲ್ಲಿ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದ್ದು, ಚುನಾವಣೆ ಕಾರ್ಯಕ್ಕೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಭಾರ ಉಪವಿಭಾಗಾಧಿಕಾರಿ ಸಿ.ಡಿ.ಗೀತಾ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಗರ, ಸ್ಥಳೀಯ ಸಂಸ್ಥೆ ಚುನಾವಣೆಗೆ ನೇಮಕಗೊಂಡಿರುವ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಕೊಪ್ಪಳ ಮತ್ತು ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಹಾಗೂ ಯಲಬುರ್ಗಾ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಚುನಾವಣೆಯನ್ನು ಕಟ್ಟುನಿಟ್ಟಾಗಿ ನಡೆಸಲು ಈಗಾಗಲೇ ವಾರ್ಡ್‍ಗಳ ಸಂಖ್ಯೆಗೆ ಅನುಗುಣವಾಗಿ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ. ಚುನಾವಣೆ ಕರ್ತವ್ಯಕ್ಕೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು, ಚುನಾವಣಾ ಆಯೋಗ ಹೊರಡಿಸಿರುವ ಚುನಾವಣಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದರು.

ಚುನಾವಣೆಯಲ್ಲಿ ನೀತಿ ಸಂಹಿತೆ ಪಾಲನೆ ಸಮರ್ಪಕವಾಗಿ ಆಗಬೇಕು. ಅಧಿಕಾರಿಗಳು ಜಿಲ್ಲಾಧಿಕಾರಿ ಅನುಮತಿಯಿಲ್ಲದೆ ಕೇಂದ್ರಸ್ಥಾನ ಬಿಡುವಂತಿಲ್ಲ. ರಜೆ ಮೇಲೆ ತೆರಳುವಂತಿಲ್ಲ. ನಾಮಪತ್ರಗಳ ಸ್ವೀಕಾರ, ಪರಿಶೀಲನೆ, ಠೇವಣಿ ಇಡುವುದು, ನಾಮಪತ್ರಗಳನ್ನು ಅಭ್ಯರ್ಥಿಗಳು ಭರ್ತಿ ಮಾಡುವುದು, ಅಫಿಡೆವಿಟ್ ಸಲ್ಲಿಕೆ, ಸೂಚಕರ ಸಂಖ್ಯೆಯನ್ನು ಗಮನಿಸುವುದು, ಚುನಾವಣೆಗಳ ಚಿಹ್ನೆ ಹಂಚಿಕೆ ಹೀಗೆ ಎಲ್ಲ ಅಂಶಗಳ ಕುರಿತು ಚುನಾವಣಾ ಆಯೋಗ ಈಗಾಗಲೇ ಸೂಕ್ತ ಮಾರ್ಗಸೂಚಿ ಪ್ರಕಟಿಸಿದೆ. ಈ ಎಲ್ಲ ಸೂಚನೆಗಳನ್ನು ಅಧಿಕಾರಿಗಳು ತಪ್ಪದೆ ಪಾಲಿಸಬೇಕು ಎಂದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಮಾತನಾಡಿ, ಅಭ್ಯರ್ಥಿಗಳ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆ. 10 ರಿಂದಲೇ ಪ್ರಾರಂಭವಾಗುವುದರಿಂದ, ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ನಾಮಪತ್ರ ಸ್ವೀಕರಿಸಬೇಕು. ಆಯಾ ದಿನದ ನಾಮಪತ್ರಗಳ ಸಲ್ಲಿಕೆ ವಿವರವನ್ನು ವಾರ್ಡ್‍ವಾರು ಆಯಾ ದಿನದಂದು ಮಧ್ಯಾಹ್ನ 3-15ರ ಒಳಗೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಬೇಕು. ನಾಮಪತ್ರ ನಮೂನೆಯನ್ನು ₹ 5 ಶುಲ್ಕ ಪಡೆದು ನೀಡಬೇಕು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಎಲ್ಲ ಅಗತ್ಯ ದಾಖಲೆ ಹಾಗೂ ಭಾವಚಿತ್ರ ಸಲ್ಲಿಸಿರುವ ಕುರಿತು ಖಚಿತಪಡಿಸಿಕೊಳ್ಳಬೇಕು ಹಾಗೂ ಅಫಿಡೆವಿಟ್‍ನ ಎಲ್ಲ ಕಾಲಂ ಗಳನ್ನು ಭರ್ತಿ ಮಾಡಿರುವ ಬಗ್ಗೆ ಪರಿಶೀಲಿಸಿ ಸ್ವೀಕರಿಸಬೇಕು ಎಂದರು.

ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಅಗತ್ಯ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು
- ಸಿ.ಡಿ.ಗೀತಾ, ಪ್ರಭಾರ ಉಪವಿಭಾಗಾಧಿಕಾರಿ

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !