ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು: ಸಚಿವ ಆನಂದ್‌ ಸಿಂಗ್‌

ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಸಂಭ್ರಮ, ಆಕರ್ಷಿಸಿದ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ
Last Updated 26 ಜನವರಿ 2023, 12:43 IST
ಅಕ್ಷರ ಗಾತ್ರ

ಕೊಪ್ಪಳ: ‘ವಿವಿಧ ಇಲಾಖೆಗಳಿಂದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಹೇಳಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಗಣರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ‘ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 2022-23ನೇ ಸಾಲಿನಲ್ಲಿ 73.44 ಲಕ್ಷ ಮಾನವ ದಿನಗಳನ್ನು ಸೃಜಿಸಿ ಶೇ 105ರಷ್ಟು ಪ್ರಗತಿ ಸಾಧಿಸಲಾಗಿದೆ. 1.70 ಲಕ್ಷ ಕುಟುಂಬಗಳಿಗೆ ಹಾಗೂ 3.58 ಲಕ್ಷ ಕಾರ್ಮಿಕರಿಗೆ ಉದ್ಯೋಗ ನೀಡಲಾಗಿದೆ. ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ 37 ಗ್ರಾ.ಪಂ.ಗಳನ್ನು ಆಯ್ಕೆ ಮಾಡಲಾಗಿದ್ದು, ಆಯ್ಕೆಯಾದ 1ನೇ ಹಂತದ ಪಂಚಾಯಿತಿಗಳಲ್ಲಿ 216 ಕಾಮಗಾರಿಗಳನ್ನು ಮುಕ್ತಾಯಗೊಳಿಸಿ ಶೇ. 100ರಷ್ಟು ಸಾಧನೆ ಮಾಡಲಾಗಿದೆ’ ಎಂದು ತಿಳಿಸಿದರು.

‘2022-23ನೇ ಸಾಲಿನ ಆರ್ಥಿಕ ವರ್ಷದಲ್ಲಿ 8,360 ಮನೆಗಳ ಗುರಿ ನಿಗದಿಯಾದ ಪೈಕಿ 5,670 ಮನೆಗಳನ್ನು ಪೂರ್ಣಗೊಳಿಸಿ ಶೇ 67.82 ಸಾಧನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗಿದ್ದು, 1.74 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಸಿರಿಧಾನ್ಯಗಳ ಉತ್ಪಾದನೆ ಮತ್ತು ಬಳಕೆ ಹೆಚ್ಚಿಸಲು ಜಿಲ್ಲೆಯಾದ್ಯಾಂತ ರೈತರಲ್ಲಿ ಜಾಗೃತಿ ಮೂಡಿಸಲು ಕಾರ್ಯಾಗಾರ ಮಾಡಲಾಗಿದೆ’ ಎಂದರು.

‘ಅಮೃತ ಶಾಲಾ ಯೋಜನೆಯಡಿ ಮೂಲ ಸೌಲಭ್ಯಗಳನ್ನು ಒದಗಿಸಲು ಜಿಲ್ಲೆಯಲ್ಲಿ 23 ಶಾಲೆಗಳಿಗೆ ಪ್ರತಿ ಶಾಲೆಗೆ ₹10 ಲಕ್ಷ ನೀಡಲಾಗಿದೆ. ಶತಮಾನ ಪೊರೈಸಿದ ಜಿಲ್ಲೆಯ 3 ಶಾಲೆಗಳಿಗೆ ಮೂಲ ಸೌಲಭ್ಯ ಒದಗಿಸಲು ₹49 ಲಕ್ಷ ಅನುದಾನ ನೀಡಲಾಗಿದೆ’ ಎಂದರು.

‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯ ಬೃಹತ್ ಯೋಜನೆಯಲ್ಲಿ ಗಂಗಾವತಿ ಮತ್ತು ಕನಕಗಿರಿ ತಾಲ್ಲೂಕುಗಳಿಗೆ ಪೌಷ್ಟಿಕ ಆಹಾರ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಪ್ರತಿ ಘಟಕಕ್ಕೆ ತಲಾ ₹1 ಕೋಟಿ ನೀಡಲು ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ. ಕುಷ್ಟಗಿ ತಾಲ್ಲೂಕಿನ ಕ್ಯಾದಿಗುಪ್ಪಾ ಗ್ರಾಮದಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ 270.1 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ’ ಎಂದರು.

‘ಅಂಜನಾದ್ರಿ ಬೆಟ್ಟದ ಚತುಷ್ಪಥ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 50ರಿಂದ ಗಂಗಾವತಿ ತಾಲ್ಲೂಕಿನ ಬುಕ್ಕಸಾಗರದ ತನಕ (ಅಂಜನಾದ್ರಿ ಮಾರ್ಗವಾಗಿ) ₹205 ಕೋಟಿ ಅಂದಾಜು ಪತ್ರಿಕೆ ತಯಾರಿಸಿ ಅನುಮೋದನೆಗೆ ಕಳುಹಿಸಲಾಗಿದೆ’ ಎಂದು ತಿಳಿಸಿದರು.

ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕರಡಿ ಸಂಗಣ್ಣ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷೆ ಶಿವಗಂಗಾ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್, ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯಾ ತ್ರಿವೇದಿ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಕೊಪ್ಪಳ ತಹಶೀಲ್ದಾರ್‌ ಅಮರೇಶ ಬಿರಾದರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಬೆಳ್ಳಿ ಮಹೋತ್ಸವಕ್ಕೆ ಕೊನೆಗೂ ಬಂತು ಅನುದಾನ

ಕೊಪ್ಪಳ: ರಾಯಚೂರಿನಿಂದ ಬೇರ್ಪಟ್ಟು ಕೊಪ್ಪಳ ಜಿಲ್ಲೆಯಾಗಿ 25 ವರ್ಷಗಳಾಗಿವೆ. ಈ ಸಂಭ್ರಮ ಆಚರಣೆಗೆ ಜಿಲ್ಲಾಡಳಿತ ಅನುದಾನದ ಕೊರತೆ ಎಂದು ಹೇಳಿತ್ತು. ಈಗ ಪ್ರವಾಸೋದ್ಯಮ ಇಲಾಖೆ ₹50 ಲಕ್ಷ ಅನುದಾನ ನೀಡಿದೆ.

ಈ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರವಾಸೋದ್ಯಮ ಖಾತೆ ಸಚಿವ ಆನಂದ್‌ ಸಿಂಗ್‌ ‘ಕೊಪ್ಪಳ ಜಿಲ್ಲೆಯ ಬೆಳ್ಳಿ ಮಹೋತ್ಸವ ಆಚರಣೆಗೆ ನಮ್ಮ ಇಲಾಖೆಯಿಂದ ₹50 ಲಕ್ಷ ಕೊಟ್ಟಿದ್ದು, ಆದೇಶದ ಪ್ರತಿಯನ್ನು ಜಿಲ್ಲಾಧಿಕಾರಿಗೆ ನೀಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಲೂ ₹50 ಲಕ್ಷ ಸಿಗುವ ಭರವಸೆ ಇದೆ’ ಎಂದರು.

‘ಜಿಲ್ಲಾ ಉತ್ಸವವನ್ನು ಸಂಬಂಧಗಳನ್ನು ಬೆಸೆಯಲ್ಲಿ ನಿಟ್ಟಿನಲ್ಲಿ ಮಾಡಬೇಕಾಗಿದೆ. ಇದರಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಪಾಲ್ಗೊಳ್ಳಬೇಕು. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಭೆ ನಡೆಸಿ ಉತ್ಸವ ದಿನಾಂಕ ನಿಗದಿ ಮಾಡುತ್ತಾರೆ. ಆನೆಗೊಂದಿ ಉತ್ಸವಕ್ಕೆ ₹1 ಕೋಟಿ ನೀಡಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT