ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರ ಸ್ನೇಹಿ ಗಣೇಶಮೂರ್ತಿ ಪ್ರತಿಷ್ಠಾಪಿಸಿ

ಗಣೇಶ ಹಬ್ಬದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಯು.ನಾಗರಾಜ
Last Updated 8 ಸೆಪ್ಟೆಂಬರ್ 2021, 12:26 IST
ಅಕ್ಷರ ಗಾತ್ರ

ಗಂಗಾವತಿ: ‘ನಗರದಲ್ಲಿ ಶಾಂತಿಯುತವಾಗಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವ ಜೊತೆಗೆ ಗಣೇಶಮೂರ್ತಿ ಪ್ರತಿಷ್ಠಾಪನಾ ಸಮಿತಿಗಳ ಪದಾಧಿಕಾರಿಗಳು ಜಿಲ್ಲಾಡಳಿತ ವಿಧಿಸಿರುವ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು‘ ಎಂದು ತಹಶೀಲ್ದಾರ್ ಯು.ನಾಗರಾಜ ಹೇಳಿದರು.

ನಗರದ ಲಯನ್ಸ್ ಐಎಂಎ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಗಣೇಶ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ 5ದಿನ ಗಣೇಶ ಹಬ್ಬ ಆಚರಿಸಲು ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಜಿಲ್ಲಾಧಿಕಾರಿ ಸಭೆ ನಡೆಸಿ, ಸರ್ಕಾರದ ಮಾರ್ಗಸೂಚಿಗಳ ಅನ್ವಯ ಹಬ್ಬ ಆಚರಿಸುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಸಾರ್ವಜನಿಕವಾಗಿ ಗಣೇಶ ಮೂರ್ತಿ ಕೂಡಿಸುವವರು ನಗರಸಭೆ, ಜೆಸ್ಕಾಂ, ಪೊಲೀಸ್ ಇಲಾಖೆ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ನಗರ ಪೋಲಿಸ್ ಠಾಣೆಯಲ್ಲಿ ಪರವಾನಗಿ ನೀಡುವ ಕೌಂಟರ್ ತೆರೆಯಲಾಗಿದೆ ಎಂದರು.

ನಗರದಲ್ಲಿ ವಾರ್ಡಿಗೆ ಒಂದೇ ಗಣೇಶ ಕೂಡಿಸಲು ಅವಕಾಶ ನೀಡಲಾಗಿದ್ದು, ಐದು ದಿನಗಳ ಒಳಗೆ ವಿಸರ್ಜನೆ ಮಾಡಬೇಕು. ಜೊತೆಗೆ ವಿಘ್ನೇಶ್ವರನ ಮೂರ್ತಿ ನಾಲ್ಕು ಅಡಿ ಎತ್ತರ ಮೀರದಂತೆ ಇರಬೇಕು ಎಂದರು.

ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ದಿನದಂದು ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮನರಂಜನಾ ಕಾರ್ಯಕ್ರಮ ನಡೆಸಿದಲ್ಲಿ, ಅಂತವರ ವಿರುದ್ಧ ಕ್ರಮ ಕೈಗೊಳ್ಳಾಗುತ್ತದೆ ಎಂದು ಎಚ್ಚರಿಸಿದರು.

ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಮಾತನಾಡಿ, ಪ್ರತಿಯೊಬ್ಬರೂ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು. ಪ್ಲಾಸ್ಟರ್‌ ಆಫ್‌ ಪ್ಯಾರಿಸ್’ (ಪಿಒಪಿ) ಮೂರ್ತಿಗಳನ್ನು ಪ್ರತಿಷ್ಠಾಪಿಸಿದವರ ವಿರುದ್ಧ ದೂರು ದಾಖಲಿಸಲಾಗುವುದು ಎಂದರು.

ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ ಮಾತನಾಡಿ, ಮನೆಗಳಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳ ವಿಸರ್ಜನೆಗೆ, ನಗರಸಭೆ ವತಿಯಿಂದ ಐದು ನೀರಿನ ಟ್ಯಾಂಕರ್‌ಗಳ ವ್ಯವಸ್ಥೆ ಮಾಡಿದ್ದು, ಇದರ ಉಪಯೋಗ ಸಾರ್ವಜನಿಕರು ಪಡೆಯಬೇಕು ಎಂದರು.

ಈ ಬಾರಿ ಕೆರೆ, ಹೊಂಡ, ನದಿಗಳಲ್ಲಿ ಸಾರ್ವಜನಿಕ ಗಣೇಶ ವಿಸರ್ಜನೆಗೆ ನಿರ್ಬಂಧ ವಿಧಿಸಲಾಗಿದೆ. ನಗರ ಭಾಗದಲ್ಲಿ ಕೆಲ ಪ್ರದೇಶಗಳನ್ನು ನಿಗದಿಪಡಿಸಲಾಗಿದ್ದು, ಅಲ್ಲಿ ವಿಸರ್ಜನೆ ಮಾಡಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಕೋವಿಡ್ ಮಾರ್ಗ ಸೂಚಿಗಳನ್ನು ಪಾಲಿಸಬೇಕು ಎಂದರು.

ಸಭೆಗೆ ಆಗಮಿಸಿದ ಸಾರ್ವಜನಿಕರಿಗೆ 50 ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ವಿತರಿಸಲಾಯಿತು.

ತಾ.ಪಂ ಇಒ ಡಾ.ಡಿ.ಮೋಹನ್, ನಗರ ಠಾಣೆಯ ಪಿಐ ಪಿ.ವೆಂಕಟಸ್ವಾಮಿ, ಜೆಸ್ಕಾಂ ಮತ್ತು ನಗರಸಭೆ ಅಧಿಕಾರಿಗಳು, ನಗರಸಭೆ ಸದಸ್ಯರು, ಗಣೇಶ ಪ್ರತಿಷ್ಠಾಪನಾ ಸಮಿತಿಗಳ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT