ಕೊಪ್ಪಳ: ‘ಬಿಜೆಪಿಯಲ್ಲಿ ಪ್ರತಿಯೊಂದು ಹುದ್ದೆಯೂ ಮಾರಾಟಕ್ಕಿದೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಲೇವಡಿ ಮಾಡಿದರು.
ಭಾನುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಈ ಹಿಂದೆ ಅವರದ್ದೇ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿಗೆ, ಸಚಿವ ಸ್ಥಾನ ₹80 ಕೋಟಿಗೆ ನಿಗದಿಯಾಗಿತ್ತು ಎಂದು ಹೇಳಿಕೆ ನೀಡಿದ್ದರು. ಈಗ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ಅವರ ಹೇಳಿಕೆಗಳೆಲ್ಲ ಸತ್ಯ ಎನಿಸುತ್ತಿವೆ’ ಎಂದರು. ಆ ಪಕ್ಷದ ಲೋಕಸಭಾ ಸದಸ್ಯರ ಟಿಕೆಟ್ ಕೂಡ ಮಾರಾಟಕ್ಕಿದೆ ಎಂದು ಛೇಡಿಸಿದರು.
‘ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟ ಇಲ್ಲ. ಬದಲಿಗೆ ಕಾಂಗ್ರೆಸ್‌ಗೆ ಅನುಕೂಲವಾಗಲಿದೆ. ಜಾತ್ಯತೀತ ಪಕ್ಷ ಎಂದು ಹೇಳಿಕೊಳ್ಳುವ ಜೆಡಿಎಸ್ ನಾಯಕರು ಕೋಮುವಾದಿ ಪಕ್ಷದ ಜತೆ ಕೈಜೋಡಿಸಲು ಮುಂದಾಗಿದ್ದಾರೆ’ ಎಂದರು.
‘ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020ರ ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿ ರೈತರಿಗೆ ತೊಂದರೆಯಾಗುತ್ತಿದೆ. ಮಾನದಂಡಗಳನ್ನು ಸಡಿಲಿಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಎರಡು ಬಾರಿ ಪತ್ರ ಬರೆದೂ ಉತ್ತರ ಬಂದಿಲ್ಲ. ಈ ಸಂಬಂಧ ಬಿಜೆಪಿಯ 25 ಜನ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಲಿ’ ಎಂದು ಸಚಿವ ಶಿವರಾಜ್ ತಂಗಡಗಿ ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.