ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ | ಜಲಜೀವನ್‌ ಮಿಷನ್‌ ಅವ್ಯವಸ್ಥೆ; ತನಿಖೆಗೆ ಸಮಿತಿ ರಚನೆ

Published 9 ಆಗಸ್ಟ್ 2023, 7:44 IST
Last Updated 9 ಆಗಸ್ಟ್ 2023, 7:44 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯ ಜಲಜೀವನ್‌ ಮಿಷನ್‌ (ಜೆಜೆಎಂ) ಕಾಮಗಾರಿಯಲ್ಲಿ ಸಾಕಷ್ಟು ಸಮಸ್ಯೆಗಳಾಗಿದ್ದು, ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲೆಯ ಕಾಂಗ್ರೆಸ್‌ ಶಾಸಕರು ಮಾಡಿದ ಒತ್ತಾಯಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನರಾಜ್‌ ಸಿಂಗ್‌ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು’ ಎಂದು ಹೇಳಿದ್ದಾರೆ.

ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಕ್ಕೆ ಮುಂದಾಗಿರುವ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರಿನಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಿದರು. ಶಾಸಕರಾದ ಬಸವರಾಜ ರಾಯರಡ್ಡಿ, ರಾಘವೇಂದ್ರ ಹಿಟ್ನಾಳ ಮತ್ತು ಸಚಿವ ಶಿವರಾಜ ತಂಗಡಗಿ ಸಭೆಯಲ್ಲಿ ಪಾಲ್ಗೊಂಡಿದ್ದರು.

‘ಜಿಲ್ಲೆಯ ಮೂವರು ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಯಗಳು ಇಲ್ಲ. ರಾಜಕೀಯವಾಗಿ ಸಮಸ್ಯೆಗಳೂ ಇಲ್ಲ. ಆದರೆ, ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದು, ಅದಕ್ಕೆ ಮುಖ್ಯಮಂತ್ರಿ ಸ್ಪಂದಿಸಿದ್ದಾರೆ. ಜೆಜೆಎಂ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ’ ಎಂದು ರಾಯರಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಯಲಬುರ್ಗಾ ಕ್ಷೇತ್ರದಲ್ಲಿ 38 ಕೆರೆಗಳನ್ನು ತುಂಬಿಸುವ ಕಾರ್ಯಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದೇನೆ. ಈ ವರ್ಷ ಡಿಪಿಆರ್‌ ಸಿದ್ಧಪಡಿಸಿ ಮುಂದಿನ ಬಜೆಟ್‌ನಲ್ಲಿ ಅನುದಾನ ಒದಗಿಸುವುದಾಗಿ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಕ್ಕೆ ತೊಡಕಾಗುವುದಿಲ್ಲ’ ಎಂದರು.

ತಂಗಡಗಿ ಅವರು ಕುಡಿಯುವ ನೀರಿನ ಸಮಸ್ಯೆ ಮತ್ತು ಕನಕಗಿರಿ ಕ್ಷೇತ್ರದಲ್ಲಿ ಅಮೃತ ಯೋಜನೆಯಡಿ ಅನುದಾನ ನೀಡುವಂತೆ ಕೋರಿದರೆ, ಹಿಟ್ನಾಳ ಅವರು ಕ್ಷೇತ್ರದಲ್ಲಿ ರಸ್ತೆಗಳು ಸಾಕಷ್ಟು ಹಾಳಾಗಿದ್ದು, ಅವುಗಳ ದುರಸ್ತಿಗೆ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಎಲ್ಲಾ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಈಡೇರಿಸುವುದಾಗಿ ಸಿ.ಎಂ. ಭರವಸೆ ನೀಡಿದ್ದು ‘ಲೋಕಸಭಾ ಚುನಾವಣೆಗೆ ಎಲ್ಲರೂ ಒಗ್ಗಟ್ಟಾಗಿ ದುಡಿಯುವಂತೆ ಹೇಳಿದ್ದಾರೆ’ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT