ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಘೋಷಣೆ ಸಾಧ್ಯತೆ: ಕೊಪ್ಪಳದ ಸಿಎಂ ಕಾರ್ಯಕ್ರಮ ರದ್ದು?

Last Updated 29 ಮಾರ್ಚ್ 2023, 3:41 IST
ಅಕ್ಷರ ಗಾತ್ರ

ಕೊಪ್ಪಳ: ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ಕರೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಗೇದಾಳ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಆಯೋಜನೆಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯಕ್ರಮ ನಡೆಯುವುದು ಅನುಮಾನವಾಗಿದೆ.

ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ನೀರಾವರಿ ವಿಷಯ ಎಲ್ಲ ರಾಜಕೀಯ ಪಕ್ಷಗಳಿಗೂ ಪ್ರತಿಷ್ಠೆಯಾಗಿ ಪರಿಣಮಿಸಿದೆ. ಹೀಗಾಗಿ ಕೊಪ್ಪಳ ಏತ ನೀರಾವರಿ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಅನೇಕ ಬಾರಿ ಕ್ಷೇತ್ರದಲ್ಲಿ ರಾಜಕೀಯ ವಾಕ್ಸಮರಕ್ಕೂ ಹಾಗೂ ಮುಂಬರುವ ಚುನಾವಣೆಗೂ ಪ್ರಮುಖ ವಿಷಯವಾಗಿದೆ. ಹೀಗಾಗಿ ಈ ಕಾರ್ಯಕ್ರಮ ಬಹಳಷ್ಟು ಮಹತ್ವ ಪಡೆದುಕೊಂಡಿದೆ.

ಈ ಕಾರ್ಯಕ್ರಮಕ್ಕಾಗಿ ಯಲಬುರ್ಗಾ ತಾಲ್ಲೂಕು ಕ್ರೀಡಾಂಗಣದಲ್ಲಿ ಬೃಹತ್‌ ವೇದಿಕೆ ಹಾಕಲಾಗಿದೆ. ಈಗಿನ ವೇಳಾಪಟ್ಟಿಯ ಪ್ರಕಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್, ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧ ಸಚಿವ, ಕ್ಷೇತ್ರದ ಶಾಸಕ ಹಾಲಪ್ಪ ಆಚಾರ ಪಾಲ್ಗೊಳ್ಳಬೇಕಿದೆ.

ಯಲಬುರ್ಗಾ ಪ್ರವಾಸದಲ್ಲಿ ಮುಖ್ಯಮಂತ್ರಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 220/110/11 ಕೆವಿ ವಿದ್ಯುತ್ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಬೇಕಿದೆ. ಮುಖ್ಯಮಂತ್ರಿ ಸ್ವಾಗತಕ್ಕೆ ಯಲಬುರ್ಗಾದ ಸರ್ಕ್ಯೂಟ್ ಹೌಸ್ ಸಮೀಪದಲ್ಲಿ ಹೆಲಿಪ್ಯಾಡ್‌ ಕೂಡ ನಿರ್ಮಾಣ ಮಾಡಲಾಗಿದೆ. ಈಗ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ಕರೆದಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವುದು ಅನುಮಾನವಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ’ಯಲಬುರ್ಗಾದಲ್ಲಿ ಆಯೋಜನೆಯಾಗಿರುವ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು ಭಾಗವಹಿಸಬೇಕಿದೆ. ಈಗ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ಕರೆದ ಕಾರಣ ಏನು ಮಾಡಬೇಕು ಎನ್ನುವ ಬಗ್ಗೆ ಗೊಂದಲವಿದೆ. ಚುನಾವಣಾ ಆಯೋಗದಿಂದ ಸಲಹೆ ಪಡೆದುಕೊಳ್ಳುವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT