ಕೇಂದ್ರ ಸರ್ಕಾರದ ಒತ್ತಡದಿಂದ ಪ್ರಾಸಿಕೂಶನ್
ಕನಕಗಿರಿ: ‘ಮುಖ್ಯಮಂತ್ರಿ ವಿರುದ್ಧ ತನಿಖೆ ನಡೆಸಲು ಪ್ರಾಸಿಕೂಶನ್ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡನೀಯ’ ಎಂದು ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ ತಿಳಿಸಿದ್ದಾರೆ.
‘ಸಿದ್ದರಾಮಯ್ಯ ಅವರ ಮೇಲೆ ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ. ಕೇಂದ್ರದ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದು ಸರಿಯಲ್ಲ’ ಎಂದು ದೂರಿದರು.
ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ರಹಿತವಾಗಿ ಆರೂವರೆ ವರ್ಷಗಳವರೆಗೆ ಜನಪರ ಆಡಳಿತ ನೀಡಿದ್ದಾರೆ. ದೀನ ದಲಿತರು, ಎಲ್ಲರ ಪರವಾಗಿ ಕೆಲಸ ಮಾಡಿದ್ದಾರೆ. ಇದನ್ನು ಸಹಿಸದೆ ಬಿಜೆಪಿಯವರು ಕುತಂತ್ರ ಮಾಡಿ ಮುಡಾ ಹಗರಣದಲ್ಲಿ ಸಿಲುಕಿಸಲು ಯತ್ನಿಸುತ್ತಿದ್ದಾರೆ’ ಎಂದು ತಿಳಿಸಿದರು.
ಬಿಜೆಪಿ ಮುಖಂಡರ ಸಾಕಷ್ಟು ಪ್ರಕರಣಗಳು ರಾಜ್ಯಪಾಲರ ಬಳಿ ಪ್ರಾಸಿಕ್ಯೂಶನ್ ಬಾಕಿ ಇದ್ದರೂ ಹಿಂದುಳಿದ ವರ್ಗದ ನಾಯಕ ಹಾಗೂ ಐದು ಗ್ಯಾರಂಟಿ ಕೊಟ್ಟು ಬಡವರ ಕಷ್ಟಕ್ಕೆ ಸ್ಪಂದಿಸಿದ ಸಿದ್ದರಾಮಯ್ಯನವರ ಪ್ರಕರಣದಲ್ಲಿ ಮಾತ್ರ ತುರ್ತಾಗಿ ಕ್ರಮಕೈಗೊಂಡಿರುವುದು ರಾಜಕೀಯ ಷಡ್ಯಂತ್ರವಾಗಿದೆ’ ಎಂದು ತಿಳಿಸಿದರು.
‘ಬಿಜೆಪಿಯು ಇಡೀ ದೇಶದಲ್ಲಿ ಬಿಜೆಪಿಯೇತರ ಮುಖ್ಯಮಂತ್ರಿಗಳನ್ನು ಹಾಗೂ ಪ್ರಮುಖರನ್ನು ಬೇರೆ ಬೇರೆ ಪ್ರಕರಣಗಳಲ್ಲಿ ಸಿಲುಕಿಸಲು ಯತ್ನಿಸುತ್ತಿದೆ. ಇದು ಪ್ರಜಾಪ್ರಭುತ್ವದ ವಿರೋಧಿ ನೀತಿಯಾಗಿದೆ. ಇದನ್ನು ವಿರೋಧಿಸಿ ವಿಧಾನಸಭಾ ಕ್ಷೇತ್ರದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನಕಗಿರಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಡೆ ರಾಜಕೀಯ ಪ್ರೇರಿತವಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಕಾಂಗ್ರೆಸ್ ಪಕ್ಷದ ಬ್ಲಾಕ್ ವಕ್ತಾರ ಶರಣಬಸಪ್ಪ ಭತ್ತದ ತಿಳಿಸಿದ್ದಾರೆ. ರಾಜಕೀಯ ಪ್ರೇರಿತ ನಿರ್ಧಾರ ಕೈಗೊಂಡಿರುವ ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಅವರು ರಾಷ್ಟ್ರಪತಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ರಾಜ್ಯಪಾಲರನ್ನು ವಜಾಗೊಳಿಸದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.