ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಆರೋಗ್ಯ ರಕ್ಷಣೆಗೆ ಕ್ರಮ ಕೈಗೊಳ್ಳಿ: ಬಿ.ಎಸ್.ರೇಖಾ ಸೂಚನೆ

ಅಧಿಕಾರಿಗಳ ಸಭೆ
Last Updated 4 ಮೇ 2021, 5:09 IST
ಅಕ್ಷರ ಗಾತ್ರ

ಕೊಪ್ಪಳ: ‘ರಾಜ್ಯದಲ್ಲಿ ಕೊರೊನಾದಿಂದ ಸಾರ್ವಜನಿಕರು ತೊಂದರೆಗೆ ಒಳಗಾಗಿದ್ದಾರೆ. ಅವರ ಆರೋಗ್ಯ ರಕ್ಷಣೆಗೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಿ’ ಎಂದು ಕೌಟುಂಬಿಕ ನ್ಯಾಯಾಲಯದಪ್ರಧಾನ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಅಧ್ಯಕ್ಷೆ ಬಿ.ಎಸ್.ರೇಖಾ ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನಗರದ ಪ್ರಧಾನ ಜಿಲ್ಲಾ ಮತ್ತುಸೆಷನ್ಸ್ ನ್ಯಾಯಾಲಯದ ಸಭಾಂಗಣದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು. ಜಿಲ್ಲೆಯ ಯಾವ ಭಾಗದಲ್ಲೂ ಜನದಟ್ಟಣೆ ಆಗದಂತೆ ಕ್ರಮ ಕೈಗೊಳ್ಳಬೇಕು. ಮುಖ್ಯ ರಸ್ತೆಗಳ ಜತೆಗೆ ಬಡಾವಣೆಗಳ ಒಳ ರಸ್ತೆಗಳಲ್ಲಿ ಅಗತ್ಯ ಬೀಟ್ ವ್ಯವಸ್ಥೆ ಕಲ್ಪಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ರೋಗಲಕ್ಷಣಗಳುಳ್ಳ ರೋಗಿಗಳನ್ನು ಗುರುತಿಸಿ ಅವರನ್ನು ಪರೀಕ್ಷೆಗೊಳಪಡಿ
ಸಬೇಕು. ಪರೀಕ್ಷಾ ಪ್ರಮಾಣ ಹೆಚ್ಚುಗೊಳಿಸಿ, ಸೋಂಕು ದೃಢಪಟ್ಟವರನ್ನು ಆಸ್ಪತ್ರೆ ಅಥವಾ ಹೋಂ ಐಸೋಲೇಷನ್‌ಗೆ ಒಳಪಡಿಸಬೇಕು. ಹೋಂ ಐಸೋಲೇಷನ್‌ನಲ್ಲಿರುವ ರೋಗಿಯ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸುವುದಲ್ಲದೆ, ಸೋಂಕಿತ ರೋಗಿಯು ಪೂರ್ಣ ಗುಣಮುಖರಾಗು
ವವರೆಗೂ ಮನೆಯಿಂದ ಆಚೆ ಬರದಂತೆ, ಇತರರ ಸಂಪರ್ಕಕ್ಕೆ ಬರದಂತೆ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು.

ರಾಜ್ಯ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷ ಹಾಗೂ ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲ ಗೌಡ ಅವರ ನಿರ್ದೇಶನದಂತೆ ಕೋವಿಡ್-19 ಕುರಿತು ಹಾಗೂ ಉಚಿತ ಕಾನೂನು ಸಲಹೆಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸಹಾಯವಾಣಿ ಆರಂಭಿಸಲಾಗಿದೆ ಎಂದರು.

ನಗರಸಭೆ ವತಿಯಿಂದ ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರ ಮೇಲೆ ನಿಗಾ ವಹಿಸಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕೋವಿಡ್-19 ಕುರಿತು ಧ್ವನಿ ಮುದ್ರಿಕೆ ತಯಾರಿಸಿದ್ದು ಅದನ್ನು ಕೂಡ ಕಸ ವಿಲೇವಾರಿ ವಾಹನಗಳಲ್ಲಿ ಬಳಸಿಕೊಳ್ಳಬಹುದು ಎಂದು ಪೌರಾಯುಕ್ತರಿಗೆ ಸೂಚನೆ ನೀಡಿದರು.

ಸರ್ಕಾರದ ಆದೇಶದಂತೆ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಬೇಕಾಗಿದ್ದು, ಜಿಲ್ಲಾ ವಕೀಲರ ಸಂಘದ ಸದಸ್ಯರಲ್ಲಿ ಬಹಳಷ್ಟು ಸದಸ್ಯರು ಇದುವರೆಗೂ ಲಸಿಕೆ ಪಡೆದಿಲ್ಲ. ಆದ್ದರಿಂದ ಅವರಿಗೆ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಿ ಎಂದರು. ಹೆಚ್ಚುವರಿಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಮಾತನಾಡಿ ಜಿಲ್ಲಾಡಳಿತದಿಂದ ಕೈಗೊಂಡ ಕ್ರಮಗಳ ಸಮಗ್ರ ಮಾಹಿತಿ ನೀಡಿದರು.

ಸಭೆಯಲ್ಲಿ ಡಿವೈಎಸ್‌ಪಿ ಗೀತಾ ಬೇನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಲಿಂಗರಾಜು, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ, ಜೆ.ಎಂ.ಎಫ್.ಸಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಹರೀಶಕುಮಾರ.ಎಂ, ನಗರಸಭೆ ಪೌರಾಯುಕ್ತ ಮಂಜುನಾಥ ಟಿ.ಎ., ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಬಿ.ವಿ.ಸಜ್ಜನ, ವಕೀಲ ರವಿ ಎಸ್.ಬೆಟಗೇರಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

‘ಕೋವಿಡ್ ಮಾರ್ಗಸೂಚಿ ಪಾಲಿಸಿ’
ಹನುಮಸಾಗರ:
‘ಬೇರೆ ಕಡೆಯಿಂದ ಗ್ರಾಮಕ್ಕೆ ಬಂದಿರುವವರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದರೆ, ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಸಲಹೆ ನೀಡಿದರು.

ಸಮೀಪದ ಹಾಬಲಕಟ್ಟಿ, ಜಹಗೀರಗುಡದೂರು, ಹನುಮನಾಳ, ಪರಮನಹಟ್ಟಿ ಹಾಗೂ ಗೊಣ್ಣಾಗರ ಗ್ರಾಮಗಳಿಗೆ ಭೇಟಿ ನೀಡಿ ಕೋವಿಡ್ ಜಾಗೃತಿ ಮೂಡಿಸಿದರು.

ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಅದರ ನಿಯಂತ್ರಣಕ್ಕೆ ಗ್ರಾಮಸ್ಥರ ಸಹಕಾರ ಅಗತ್ಯ. ನಾವು ಸುರಕ್ಷಿತವಾಗಿದ್ದರೆ ಮಾತ್ರ ಇತರರ ಆರೋಗ್ಯ ಕಾಪಾಡಲು ಸಾಧ್ಯ. ಲಸಿಕೆ ಹಾಕಿಸಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ ಜನರಿಗೆ ಕೊರೊನಾ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು. ಪಿಡಿಒ ದೇವೇಂದ್ರ ಕಮತರ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT