ಕೊಪ್ಪಳ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಮಂಗಳವಾರ ಆಯೋಜನೆಯಾಗಿದ್ದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಾಪಸ್ ಊರಿಗೆ ಹೋಗುವಾಗ ಟಾಟಾ ಏಸ್ ವಾಹನ ಪಲ್ಟಿಯಾಗಿ ತಾಲ್ಲೂಕಿನ ಗುಳದಳ್ಳಿ ಗ್ರಾಮದ ಸರ್ಕಾರಿ ಶಾಲೆಯ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ವಾಹನ ನಿಲ್ಲಿಸುವಂತೆ ಹೆದ್ದಾರಿಯಲ್ಲಿ ಆರ್‌ಟಿಒ ಕಚೇರಿಯ ಅಧಿಕಾರಿ ಕೈ ಮಾಡಿದ್ದು ಇದರಿಂದ ಭಯಗೊಂಡ ವಿದ್ಯಾರ್ಥಿಗಳಿದ್ದ ವಾಹನದ ಚಾಲಕ ಅತಿ ವೇಗವಾಗಿ ತೆರಳಿದ್ದರಿಂದ ವಾಹನ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದರು.
ಕೆಲವು ವಿದ್ಯಾರ್ಥಿಗಳಿಗೆ ತಲೆ, ಕೈ, ಕಾಲು ಮತ್ತು ಕುತ್ತಿಗೆ ಭಾಗದಲ್ಲಿ ಗಾಯಗಳಾಗಿವೆ. ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರಿಗೆ ಪಾಲಕರು ಮತ್ತು ಶಿಕ್ಷಕರೇ ಪ್ರಥಮ ಚಿಕಿತ್ಸೆ ನೀಡಿದರು.
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಗಾಯಗೊಂಡ ವಿದ್ಯಾರ್ಥಿಗಳ ಜೊತೆ ಮಾತನಾಡಿದರು. ಉತ್ತಮವಾಗಿ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.
ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕರಯ್ಯ, ಡಿವೈಎಸ್‌ಪಿ ಮುತ್ತಣ್ಣ ಸವರಗೋಳ, ಕೊಪ್ಪಳ ಗ್ರಾಮೀಣ ಠಾಣೆಯ ಸಿಪಿಐ ಸುರೇಶ ಡಿ., ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಟೆಕ್ಟರ್ ಜಯಪ್ರಕಾಶ, ಪಿಎಸ್ಐ ಅಶೋಕ ಬೇವೂರು, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸನಗೌಡ ಪಾಟೀಲ್ ಸೇರಿದಂತೆ ಅನೇಕರು ಭೇಟಿ ನೀಡಿದರು.