ಗಂಗಾವತಿ: ತಾಲ್ಲೂಕಿನ ಚಿಕ್ಕಬೆಣಕಲ್ ಗ್ರಾಮದಲ್ಲಿ ಜೆಜೆಎಂ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಾಸಕ ಜಿ.ಜನಾರ್ದನರೆಡ್ಡಿ ಮಂಗಳವಾರ ಚಾಲನೆ ನೀಡಿದರು.
ನಂತರ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಕಲ್ಪಿಸುವ ಉದ್ದೇಶದಿಂದ ಜೆಜೆಎಂ ಕಾಮಗಾರಿ ಯೋಜನೆಯಿದ್ದು,ಇದರಡಿಯೇ ಗಂಗಾವತಿ ತಾಲ್ಲೂಕಿನ 61 ಜನವಸತಿ ಗ್ರಾಮಗಳ ಒಳಿತಿಗಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆರಂಭಿಸಲಾಗುತ್ತಿದೆ. ಹಾಗೆಯೇ ಗ್ರಾಮೀಣ ಭಾಗದಲ್ಲಿನ ಚರಂಡಿ, ರಸ್ತೆ, ಬೀದಿದೀಪ ಅಳವಡಿಕೆ ಸೇರಿ ವಿವಿಧ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲೇ ಪರಿಹಾರ ಒದಗಿಸಲಾಗುತ್ತದೆ. ಗ್ರಾಮಗಳು ಅಭಿವೃದ್ಧಿಯಾದಾಗ ಮಾತ್ರ ನಗರ ಅಭಿವೃದ್ಧಿ ಆಗಲು ಸಾಧ್ಯ’ ಎಂದರು