ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಆವಿಷ್ಕಾರದ ಲಾಭ ದೊರೆಯಲಿ

ಕೃಷಿ ಮಾಹಿತಿ ರಥಯಾತ್ರೆಗೆ ಚಾಲನೆ: ಶಾಸಕ ಬಯ್ಯಾಪುರ ಸಲಹೆ
Last Updated 15 ಜೂನ್ 2021, 3:00 IST
ಅಕ್ಷರ ಗಾತ್ರ

ಕುಷ್ಟಗಿ: ‘ಕೃಷಿ ಇಲಾಖೆಗೆ ಸಂಬಂಧಿಸಿದ ತಾಂತ್ರಿಕ ಆವಿಷ್ಕಾರಗಳು ರೈತನ ಜಮೀನಿಗೆ ತಲುಪಿದಾಗ ಮಾತ್ರ ಇಲಾಖೆಯ ಪ್ರಯತ್ನ, ಶ್ರಮ ಸಾರ್ಥಕವಾಗುತ್ತದೆ’ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಪ್ರಸಕ್ತ ವರ್ಷದ ಕೃಷಿ ಅಭಿಯಾನ ಯೋಜನೆಗೆ ಸಂಬಂಧಿಸಿದಂತೆ ರೈತರ ಮನೆ ಬಾಗಿಲಿಗೆ ಸಮಗ್ರ ಮಾಹಿತಿ ಒದಗಿಸುವ ಮಾಹಿತಿ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೃಷಿ, ತೋಟಗಾರಿಕೆ ಬೇಸಾಯ ಕ್ರಮಗಳಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ತಂತ್ರಜ್ಞಾನವೂ ಮುಂದುವರಿದಿದೆ. ಆದರೂ ಬಹುತೇಕ ರೈತರಿಗೆ ಕೃಷಿ ಕ್ಷೇತ್ರದಲ್ಲಿ ಆಗಿರುವ ಬದಲಾವಣೆಗಳ ಮಾಹಿತಿಯ ಕೊರತೆ ಇದ್ದು, ಅದನ್ನು ನೀಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮುತುವರ್ಜಿ ವಹಿಸಬೇಕು ಎಂದರು.

ಕೋವಿಡ್ ಸಂಕಷ್ಟದ ನಡುವೆಯೂ ರೈತರು ಮುಂಗಾರು ಹಂಗಾಮಿನ ಬಿತ್ತನೆಯಲ್ಲಿ ತೊಡಗಿದ್ದು, ಅನೇಕ ರೈತರು ಸಮಸ್ಯೆಯ ಸುಳಿಗೆ ಸಿಲುಕಿದ್ದಾರೆ. ಇಂಥ ಕಷ್ಟಕಾಲದಲ್ಲಿ ರೈತರಿಗೆ ಅಗತ್ಯವಾಗಿರುವ ಬಿತ್ತನೆ ಬೀಜ, ರಸಗೊಬ್ಬರ ಸೇರಿ ಕೃಷಿ ಪರಿಕರಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಪ್ರತಿಯೊಬ್ಬ ರೈತನಿಗೂ ಇಲಾಖೆಯ ಸೌಲಭ್ಯ ದೊರಕಿಸಿಕೊಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಡಿಎಪಿ ಗೊಬ್ಬರದ ಕೊರತೆ ಇದ್ದು, ಅದನ್ನು ಸರಿದೂಗಿಸಬೇಕು ಎಂದು ಅವರು ಹೇಳಿದರು.

ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವ ಮಾರಾಟ ಮಳಿಗೆಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಂಡಿರುವುದು ಉತ್ತಮ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಹಾಯಕ ನಿರ್ದೇಶಕ ಮಹಾದೇವಪ್ಪ ನಾಯಕ ಮಾತನಾಡಿ ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳು ಹಾಗೂ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ ಪ್ರಯೋಜನ ಪಡೆಯಬೇಕು. ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ರೈತರಿಗೆ ಹೇಳಿದರು.

ಕೃಷಿ ಅಧಿಕಾರಿಗಳಾದ ರಾಘವೇಂದ್ರ ಕೊಂಡಗುರಿ, ನಾಗನಗೌಡ ಪಾಟೀಲ, ಬಾಲಪ್ಪ ಜಲಗೇರಿ, ಬಸನಗೌಡ ಪಾಟೀಲ, ನಜೀರಸಾಬ ಮೂಲಿಮನಿ, ನಾಗಯ್ಯ ಹಿರೇಮಠ ಹಾಗೂ ಇತರರು ಇದ್ದರು.

ತಾಲ್ಲೂಕಿನ ವಿವಿಧ ಗ್ರಾಮಗಳ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT