ಕೊಪ್ಪಳ: ‘ರಾಜ್ಯದಲ್ಲಿ ಹೊಸದಾಗಿ ಆರಂಭವಾಗಿರುವ ಎಂಟು ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾವ ಸದ್ಯಕ್ಕೆ ಸರ್ಕಾರದ ಮುಂದಿಲ್ಲ. ಈಗಿರುವ ವಿ.ವಿ.ಗಳಿಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.
ಇಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಈಗಾಗಲೇ ಇರುವ ಹಳೇ ವಿ.ವಿ.ಗಳು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿವೆ. ಹೊಸ ವಿ.ವಿ. ಆರಂಭ ಮಾಡಲು ಸಾಕಷ್ಟು ತಯಾರಿ, ಆರ್ಥಿಕ ಸಂಪನ್ಮೂಲ ಬೇಕಾಗುತ್ತದೆ. ಹಿಂದಿನ ಬಿಜೆಪಿ ಸರ್ಕಾರ ಈ ಯಾವ ತಯಾರಿಯನ್ನೂ ಮಾಡಿಕೊಳ್ಳದೆ ಹಿತಾಸಕ್ತಿಗಾಗಿ ವಿ.ವಿ.ಗಳನ್ನು ಆರಂಭಿಸಿತು. ನಯಾಪೈಸೆ ಅನುದಾನವನ್ನೂ ಕೊಟ್ಟಿಲ್ಲ’ ಎಂದರು.
‘ಈ ಕಾರಣದಿಂದಾಗಿ ವಿಶ್ವವಿದ್ಯಾಲಯಗಳಲ್ಲಿ ಪರಿಸ್ಥಿತಿ ಹೇಗಿದೆ. ಹೊಸ ವಿ.ವಿ.ಗಳ ಭವಿಷ್ಯ ಏನು ಎನ್ನುವುದರ ಬಗ್ಗೆ ಅಲ್ಲಿನ ಕುಲಪತಿಗಳಿಂದ ಅಭಿಪ್ರಾಯ ಪಡೆಯಲಾಗಿದೆ. ಎಲ್ಲವನ್ನು ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಕೆಲ ಬಿಜೆಪಿಗರು ಕಾಂಗ್ರೆಸ್ ಸೇರಲಿದ್ದಾರೆಯೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಮಾಜಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಸಾಕಷ್ಟು ಭ್ರಷ್ಟಾಚಾರದ ಆರೋಪಗಳಿವೆ. ಕೋವಿಡ್ ಸಮಯದಲ್ಲಿ ಸಾಮಗ್ರಿಗಳ ಖರೀದಿ ವಿಚಾರದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ಕಳಂಕ ಹೊತ್ತಿರುವ ಸುಧಾಕರ್ ಅವರನ್ನು ನಮ್ಮ ನಾಯಕರು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದು ಅನುಮಾನವಿದೆ. ಪಕ್ಷದ ವೇದಿಕೆಯಲ್ಲಿ ಇದರ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.