ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರು ನಿರ್ಲಕ್ಷ್ಯ ವಹಿಸಿದರೆ ಕ್ರಮ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ
Last Updated 5 ನವೆಂಬರ್ 2019, 11:04 IST
ಅಕ್ಷರ ಗಾತ್ರ

ಕೊಪ್ಪಳ: ಜನರಿಗೆ ಕುಡಿಯುವ ನೀರು ಒದಗಿಸುವಲ್ಲಿ ಯಾರೇ ನಿರ್ಲಕ್ಷ್ಯವಹಿಸಿದರೂ ಸಹಿಸುವುದಿಲ್ಲ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ವಿಳಂಬಕ್ಕೆ ಕಾರಣರಾದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಶಿಸ್ತು ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿಯಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಗ್ರಾಮೀಣ ಭಾಗದ ಜನರಿಗೆ ನೀರನ್ನು ಒದಗಿಸುವ ಮಹತ್ತರ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗೂ ಯೋಜನೆಯ ಅನುಷ್ಠಾನ ಸಮರ್ಪಕವಾಗಿ ಆಗಿಲ್ಲ. ಇದಕ್ಕೆ ಸೂಕ್ತ ಕಾರಣಗಳೊಂದಿಗೆ ವರದಿ ಸಲ್ಲಿಸಿ. ಯೋಜನೆಯ ವಿನ್ಯಾಸವೇ ಅಸಮರ್ಪಕವಾಗಿದ್ದು, ಇದರಲ್ಲಿ ಅಧಿಕಾರಿಗಳ ಲೋಪವೂ ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಯೋಜನೆಯ ಅನುಷ್ಠಾನಕ್ಕೆ ಶೀಘ್ರ ಕ್ರಮ ಕೈಗೊಳ್ಳಿ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸ್ಥಾಪಿಸಿರುವ 204 ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 118 ಘಟಕಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, ಉಳಿದ ಘಟಕಗಳು ಸ್ಥಗಿತಗೊಂಡಿರುವ ಕುರಿತು ಜಿಲ್ಲಾ ಪಂಚಾಯಿತಿ ಸದಸ್ಯರು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ, ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳ ಪ್ರಸ್ತುತ ಕಾರ್ಯನಿರ್ವಣೆಯ ವಾಸ್ತವಾಂಶವುಳ್ಳ ಮಾಹಿತಿಯನ್ನು 15 ದಿನಗಳಲ್ಲಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಪರಿಶೀಲಿಸಬೇಕು. ಮಾತ್ರವಲ್ಲದೆ ಸದಸ್ಯರು ತಮ್ಮ ಕ್ಷೇತ್ರದಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಕುಡಿಯುವ ನೀರನ್ನು ಒದಗಿಸುವಲ್ಲಿ ವಿಫಲರಾದ ಅಧಿಕಾರಿ ಹಾಗೂ ಗುತ್ತಿಗೆದಾರರು ಯಾರೇ ಆದರೂ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಅಧಿಕಾರಿಗಳು ಚುನಾಯಿತ ಪ್ರತಿನಿಧಿಗಳಿಗೆ ಸರಿಯಾದ ಮಾಹಿತಿಯನ್ನು ನೀಡಬೇಕು. ಕೇವಲ ಸಚಿವರ ಸಭೆ ಎಂದು ಅಂದಾಜು ಮಾಹಿತಿ ಸಿದ್ಧಪಡಿಸದೆ, ವಾಸ್ತವಾಂಶಗಳನ್ನು ಪರಿಶೀಲಿಸಿ ವರದಿ ನೀಡಬೇಕು. ಹಾಗೆಯೇ ಎಲ್ಲ ಚುನಾಯಿತ ಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡುವ ವೇಳೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ. ಆ ಸ್ಥಳದಲ್ಲಿಯೇ ಸಂಬಂಧಿಸಿದ ಕಾಮಗಾರಿಯ ಕುರಿತು ಮಾಹಿತಿ ಪಡೆದು ಅದನ್ನು ಸಂಬಂಧಿಸಿದ ಇಲಾಖೆಯ ಮೇಲಾಧಿಕಾರಿಗೆ ತಿಳಿಸಿ ಎಂದು ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿಅಧ್ಯಕ್ಷ ಎಚ್. ವಿಶ್ವನಾಥರೆಡ್ಡಿ,ಸಿಇಒ ರಘುನಂದನ್ ಮೂರ್ತಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ನೇಹಾ ಜೈನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಆಯುಕ್ತ ಅನಿರುದ್ಧ ಶ್ರವಣ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮುಖ್ಯ ಎಂಜಿನಿಯರ್ ಪ್ರಕಾಶ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಜಯರಾಂ, ಶಾಸಕರಾದ ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ ಹಾಗೂ ಬಸವರಾಜ ದಢೇಸೂಗೂರು, ಜಿಲ್ಲಾ ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT