ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಹಗರಣ: ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ನಾಳೆ ಮೂಡಾ ಕಚೇರಿಗೆ ಮುತ್ತಿಗೆ

Published 11 ಜುಲೈ 2024, 5:56 IST
Last Updated 11 ಜುಲೈ 2024, 5:56 IST
ಅಕ್ಷರ ಗಾತ್ರ

ಕೊಪ್ಪಳ: ಮೂಡಾದಲ್ಲಿ ನಿವೇಶನ ಹಂಚಿಕೆಯಲ್ಲಿ ಮನಬಂದಂತೆ ನಿಯಮಗಳನ್ನು ಗಾಳಿಗೆ ತೂರಲಾಗಿದ್ದು, ಈ ಕುರಿತು ಸಿಬಿಐ ತನಿಖೆ ನಡೆಯಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ ಆಗ್ರಹಿಸಿದರು.

ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ನಿರಂತರ ಲೂಟಿಯಲ್ಲಿ ತೊಡಗಿದೆ, ಮೂಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನಿಯಮ ಉಲ್ಲಂಘಿಸಿ ನಿವೇಶನಗಳನ್ನು ಹಂಚಲಾಗಿದೆ. ಮುಖ್ಯಮಂತ್ರಿ ಪತ್ನಿ ಎನ್ನುವ ಕಾರಣಕ್ಕೆ ನಿಯಮಕ್ಕಿಂತಲೂ ಹೆಚ್ಚು ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದರು. ಶುಕ್ರವಾರ ಮೂಡಾ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದರು.

ಮೂಡಾ ಸ್ವಾಧೀನ ಪಡಿಸಿಕೊಂಡ ಭೂಮಿ ಹಾಗೂ ಹಂಚಿಕೆ ಮಾಡಿದ ವಿಧಾನದಲ್ಲಿ ಲೋಪ ಎಸಗಿರುವುದು ಸ್ಪಷ್ಟವಾಗಿದೆ. ಎಸ್.ಐ.ಟಿ. ತನಿಖೆ ಮಂದಗತಿಯಲ್ಲಿದ್ದು, ಇದರ ಬಗ್ಗೆ ನಂಬಿಕೆ ಇಲ್ಲ. ತ್ವರಿತವಾಗಿ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ದಂಧೆ ಆಗಿರಲಿಲ್ಲ: ಎಲ್ಲ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಮಾಜಿ ಶಾಸಕ ಬಸವರಾಜ ದಢೇಸೂಗೂರು 'ನಮ್ಮ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆದಿಲ್ಲ. ಈಗಿನ ಸರ್ಕಾರದಲ್ಲಿ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ದಂಧೆಯಾಗಿ ಮಾಡಲಾಗಿದೆ. ಈಗಿನ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕೂಡ ಇದೇ ದಂಧೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು‌.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ. ಬಸವರಾಜ ‌ಕ್ಯಾವಟರ್, ರಾಜ್ಯ ‌ಮಾಧ್ಯಮ ಪ್ರಮುಖ ಪ್ರಮೋದ ಕಾರಕೂನ್, ಜಿಲ್ಲಾ ಮಾಧ್ಯಮ ವಕ್ತಾರ ಸೋಮಶೇಖರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT