ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ನೀರಿನ ಯೋಜನೆ ಪೂರ್ಣಗೊಳಿಸಿ

ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸಚಿವ ಬಿ.ಸಿ.ಪಾಟೀಲ
Last Updated 17 ಏಪ್ರಿಲ್ 2021, 9:01 IST
ಅಕ್ಷರ ಗಾತ್ರ

ಕೊಪ್ಪಳ: ತಾಲ್ಲೂಕಿನ ಹಿರೇಕಾಸನಕಂಡಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ46 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಪೈಪ್‌ಲೈನ್ ಕಾಮಗಾರಿ ಸರಿಯಾಗಿ ಆಗಿಲ್ಲ. ಈ ಕುರಿತು ಸಂಬಂಧಿಸಿದ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಅವರುಶುಕ್ರವಾರ ತಾಲ್ಲೂಕಿನ ಹಿರೇಕಾಸನಕಂಡಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಬಹುಗ್ರಾಮ ಕುಡಿಯುವ ನೀರು ಯೋಜನೆ, ಗಿಣಿಗೇರಾದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿ ಹಾಗೂ ಬಹದ್ದೂರ‌ಬಂಡಿ ಗ್ರಾಮದಲ್ಲಿನ ನವರ್ಕಲ್ ಏತ ನೀರಾವರಿ ಯೋಜನೆ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದ ನಂತರ ಮಾತನಾಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ತೃಪ್ತಿಕರವಾಗಿಲ್ಲ. ಈ ಬಗ್ಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ವ್ಯವಸ್ಥಿತ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು. ಜಿಲ್ಲೆಯಲ್ಲಿ ಪ್ರಸ್ತುತ83 ಕೋಟಿ ಮೊತ್ತದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಆರಂಭಿಸಲಾಗುತ್ತಿದ್ದು, ನಿಗದಿತ ಕ್ರಿಯಾಯೋಜನೆಯಂತೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಹಾಗೂ ತ್ವರಿತ ಗತಿಯಲ್ಲಿ ಕಾಮಗಾರಿಗೆ ಚಾಲನೆ ನೀಡಬೇಕು ಎಂದುಸೂಚಿಸಿದರು.

ಈ ಹಿಂದೆ ಕೆಡಿಪಿ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದ ಬಹುಗ್ರಾಮ ಕುಡಿಯುವ ನೀರು ಹಾಗೂ ಏತ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ವೀಕ್ಷಣೆ ಮಾಡಿದ್ದೇನೆ.240 ಎಕರೆಯ ಗಿಣಗೇರಾ ಕೆರೆ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು, ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಸಾರ್ವಜನಿಕರ ಸಹಭಾಗಿತ್ವದಲ್ಲಿ ಈ ಕೆಲಸ ನಡೆಯುತ್ತಿರುವುದು ಶ್ಲಾಘನೀಯವಾಗಿದೆ. ಜನರು ಕೂಡಾ ಗವಿಶ್ರೀಗಳ ಮೇಲೆ ವಿಶ್ವಾಸ ಹೊಂದಿದ್ದಾರೆ. ಹಾಗಾಗಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾರ್ಯಗಳು ಯಶಸ್ವಿ ಆಗುತ್ತಿವೆ ಎಂದು ಅವರು ಈ ವೇಳೆ ಹೇಳಿದರು.

ರಾಜ್ಯದಲ್ಲಿ ಯಾವುದೇ ಲಾಕ್‌ಡೌನ್ ಇಲ್ಲ ಎಂದು ನಿನ್ನೆ ಸಿಎಂ ಹೇಳಿದ್ದಾರೆ. ಜನಸಾಮಾನ್ಯರ ಜವಾಬ್ದಾರಿಯೂ ದೊಡ್ಡದಿದ್ದು, ಜನ ಅರ್ಥ ಮಾಡಿಕೊಂಡು ಸರ್ಕಾರದೊಂದಿಗೆ ಸಹಕರಿಸಬೇಕು. ಇನ್ನುಮುಂದೆಯೂ ಜನರು ಪರಿಸ್ಥಿತಿ ಅರಿತು ನಡೆಯದಿದ್ದರೆ ಲಾಕ್‌ಡೌನ್ ಅನಿವಾರ್ಯ ಆಗುತ್ತದೆ ಎಂದರು.

ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗವಿಸಿದ್ದಪ್ಪ ಕರಡಿ, ರಾಮಣ್ಣ ಚೌಡ್ಕಿ,ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯಿತಿ ಸಿಇಒ ರಘುನಂದನ್ ಮೂರ್ತಿ,ಎಸ್‌ಪಿ ಟಿ.ಶ್ರೀಧರ್, ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಾಲಚಂದ್ರನ್, ಕೆಡಿಪಿ ಸದಸ್ಯ ಅಮರೇಶ ಕರಡಿ, ಸಣ್ಣ ನೀರಾವರಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT