ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕೆ ಪಡೆದರಷ್ಟೇ ಜಿಲ್ಲಾಡಳಿತ ಭವನಕ್ಕೆ ಪ್ರವೇಶ: ಡಿಸಿ ವಿಕಾಸ್ ಕಿಶೋರ್ ಸುರಳ್ಕರ್

ಮುಖ್ಯ ದ್ವಾರದಲ್ಲಿ ಲಸಿಕೆ ಹಾಕಿಸಲು ವ್ಯವಸ್ಥೆ
Last Updated 7 ಸೆಪ್ಟೆಂಬರ್ 2021, 4:05 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯ ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲರೂ ಕಡ್ಡಾಯವಾಗಿ ಕೋವಿಡ್-19 ಲಸಿಕೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಲಸಿಕೆ ಪಡೆದವರಿಗೆ ಮಾತ್ರ ಜಿಲ್ಲಾಡಳಿತ ಭವನಕ್ಕೆ ಪ್ರವೇಶ ಎಂಬ ಆದೇಶವನ್ನು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೊರಡಿಸಿದ್ದಾರೆ.

ಜಿಲ್ಲಾಡಳಿತ ಭವನದ ಮುಖ್ಯ ಪ್ರವೇಶ ದ್ವಾರದಲ್ಲಿಶನಿವಾರ ಆರೋಗ್ಯ ಇಲಾಖೆ ಲಸಿಕೆ ಹಾಕುವ ತಂಡದಿಂದ ಜಿಲ್ಲಾಡಳಿತ ಭವನಕ್ಕೆ ಬರುವ ಸಾರ್ವಜನಿಕರು, ಜಿಲ್ಲಾಡಳಿತ ಭವನದ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರಿಗೂ ಲಸಿಕೆ ನೀಡಲಾಯಿತು.

ಕೋವಿಡ್-19 ಮೂರನೇ ಅಲೆಯ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಜಾರಿಗೆ ತಂದಿರುವ ಜಿಲ್ಲಾಧಿಕಾರಿ ಕೋವಿಡ್ ಲಸಿಕೆ ಪಡೆಯದೇ ಇರುವ ಯಾವುದೇ ಇಲಾಖೆಯ ಅಧಿಕಾರಿ, ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಜಿಲ್ಲಾಡಳಿತ ಭವನದ ಪ್ರವೇಶ ನಿರ್ಬಂಧಿಸಿ ಸೆ.4 ರಂದು ಆದೇಶ ಹೊರಡಿಸಿದ್ದಾರೆ.

ಈ ಆದೇಶವನ್ನು ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದು, ಜಿಲ್ಲಾಡಳಿತ ಭವನಕ್ಕೆ ಬರುವ ಪ್ರತಿಯೊಬ್ಬರನ್ನೂ ವ್ಯಾಕ್ಸಿನ್ ಪಡೆದಿರುವ ಕುರಿತು ಪರಿಶೀಲಿಸಿ, ಲಸಿಕೆ ಪ್ರಮಾಣ ಪತ್ರ ಹೊಂದಿರುವವರನ್ನು ಮಾತ್ರ ಜಿಲ್ಲಾಡಳಿತ ಭವನದೊಳಗೆ ಬಿಡಲಾಗುತ್ತಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಈ ಆದೇಶ ರಾಜ್ಯದ ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ.

ಲಸಿಕೆ ಪಡೆಯದವರಿಗೆ ಜಿಲ್ಲಾಡಳಿತದಿಂದ ಲಸಿಕೆ ಹಾಕುವ ವ್ಯವಸ್ಥೆಯನ್ನು ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿಯೇ ವ್ಯವಸ್ಥೆ ಮಾಡಲಾಗಿದ್ದು, ಆರೋಗ್ಯ ಇಲಾಖೆಯ ಲಸಿಕಾ ವಿತರಣೆ ತಂಡ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಗಳವರೆಗೆ ಲಸಿಕೆ ಹಾಕುತ್ತಿದ್ದು, ಸಾರ್ವಜನಿಕರು ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್, ಬ್ಯಾಂಕ್ ಖಾತೆಯ ಪುಸ್ತಕ ಇವುಗಳಲ್ಲಿ ಯಾವುದಾದರೂ ಒಂದನ್ನು ತೋರಿಸಿ ಲಸಿಕೆ ಪಡೆಯಬಹುದಾಗಿದೆ.

ಕೊಪ್ಪಳ ಜಿಲ್ಲಾಡಳಿತ ಭವನಕ್ಕೆ ಪ್ರತಿದಿನ 500 ರಿಂದ 1000 ಜನ ಬರುತ್ತಾರೆ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರಬೇಕು. ಇಲ್ಲವಾದರೆ ಕೋವಿಡ್ ಮಾರ್ಗಸೂಚಿ ಅನ್ವಯ ದಂಡ ವಿಧಿಸುವಂತೆಯೂ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದ್ದು, ಜಿಲ್ಲಾಡಳಿತಕ್ಕೆ ಬರುವ ಲಸಿಕೆ ಪಡೆದಿರದ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸಿಯೇ ಜಿಲ್ಲಾಡಳಿತದೊಳಗೆ ಬಿಡಲಾಗುತ್ತಿದೆ. ಲಸಿಕೆ ಪಡೆಯದ ಸಾರ್ವಜನಿಕರು ಕಡ್ಡಾಯವಾಗಿ ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಹೋಗಿ ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT