ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರ್ತು ಸೇವೆ ಹೊರತುಪಡಿಸಿ ಎಲ್ಲ ಚಟುವಟಿಕೆಗಳೂ ಬಂದ್‌

ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಮಾರ್ಗಸೂಚಿ: ಐದು ದಿನ ಸಂಪೂರ್ಣ ಲಾಕ್‌ಡೌನ್‌, ಅನಗತ್ಯವಾಗಿ ಸಂಚರಿಸುತ್ತಿದ್ದವರಿಗೆ ದಂಡ
Last Updated 18 ಮೇ 2021, 2:53 IST
ಅಕ್ಷರ ಗಾತ್ರ

ಕೊಪ್ಪಳ: ಕೋವಿಡ್ ಎರಡನೇ ಅಲೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಮೇ 17ರ ಬೆಳಿಗ್ಗೆ 6 ಗಂಟೆಯಿಂದ ಮೇ 21ರ ರಾತ್ರಿ 12 ಗಂಟೆಯವರೆಗೆ ಲಾಕ್‌ಡೌನ್ ಜಾರಿಗೊಳಿಸಲಾಗಿದ್ದು,ಜಿಲ್ಲೆಯಾದ್ಯಂತ ಸಂಪೂರ್ಣ ವಾಣಿಜ್ಯ-ವಹಿವಾಟು ಬಂದ್‌ ಆಗಿದ್ದವು.

ಈ ಅವಧಿಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34(ಎಂ) ಮತ್ತು ಅಪರಾಧಿಕಾ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿಯಲ್ಲಿ ಅಗತ್ಯ ಸೇವೆಗಳು ಹಾಗೂ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಆದೇಶ ಹೊರಡಿಸಿದ್ದಾರೆ.

ಆದೇಶದನ್ವಯ ಅಗತ್ಯ ವಸ್ತುಗಳಾದ ಹಾಲು, ಮೊಟ್ಟೆ, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಆಂಬುಲೆನ್ಸ್, ಕೃಷಿ ಚಟುವಟಿಕೆಗಳು, ಅಗ್ನಿ ಶಾಮಕ, ಪೆಟ್ರೋಲ್ ಪಂಪ್, ಆಮ್ಲಜನಕ ಉತ್ಪಾದನಾ ಘಟಕ, ಎ.ಟಿ.ಎಂ ಸೇವೆ, ರೈಸ್‌ಮಿಲ್‌ನಲ್ಲಿ ಒಳಗಿನ ಚಟುವಟಿಕೆಗಳಿಗೆ ಸ್ಥಳದಲ್ಲಿಯೇ ಲಭ್ಯವಿರುವ ಕಾರ್ಮಿಕರಿಂದ ನಿರ್ವಹಿಸತಕ್ಕದ್ದು ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಚುಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಸ್ಪತ್ರೆಗಳಿಗೆ ಹೋಗುವವರು ವೈದ್ಯಕೀಯ ದಾಖಲೆಗಳನ್ನುತಪಾಸಣೆ ಕೇಂದ್ರಗಳಲ್ಲಿ ತೋರಿಸಬೇಕು. ದಿನಪತ್ರಿಕೆ, ದೃಶ್ಯ ಮಾಧ್ಯಮ, ಆಹಾರ ಸಂಸ್ಕರಣೆಯ ಸೇವೆಗಳಾದ ಕೋಲ್ಡ್ ಸ್ಟೋರೇಜ್‌ಗಳು, ರಾಸಾಯನಿಕ ಉದ್ಯಮಗಳು, ವಿದ್ಯುತ್ ಉತ್ಪಾದನೆ ಮತ್ತು ಪ್ರಸರಣ ಘಟಕಗಳಲ್ಲಿ ಶೇ 50 ರಷ್ಟು ಸಿಬ್ಬಂದಿಯೊಂದಿಗೆ ನಿರ್ವಹಿಸಲು ಅನುಮತಿ ನೀಡಲಾಗಿತ್ತು.

ಎಲ್ಲ ರೀತಿಯ ಸರಕುಗಳ ಸಾಗಾಣಿಕೆಗೆ ಮತ್ತು ಖಾಲಿ ವಾಹನಗಳಿಗೆ, ವಿಶೇಷವಾಗಿ ಆಮ್ಲಜನಕ ತರುವ ವಾಹನಗಳ ತಡೆ ರಹಿತ ಸಾಗಾಟವನ್ನು ಅನುಮತಿಸಲಾಗಿದೆ. ಕಂದಾಯ ಇಲಾಖೆ (ನಾಡ ಕಚೇರಿ ಹೊರತು ಪಡಿಸಿ), ಗ್ರಾಮೀಣಾಭಿವೃದ್ಧಿ ಇಲಾಖೆ, ನಗರ-ಸ್ಥಳೀಯ ಸಂಸ್ಥೆಗಳು, ಆರೋಗ್ಯ ಇಲಾಖೆ, ಪಶು ವೈದ್ಯಕೀಯ ಶಿಕ್ಷಣ, ಪೊಲೀಸ್ ಇಲಾಖೆ, ಗೃಹ ರಕ್ಷಕ ದಳ, ನಾಗರಿಕ ರಕ್ಷಣೆ, ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳು, ವಿಪತ್ತು ನಿರ್ವಹಣೆ, ಕಾರಾಗೃಹ ಸೇವೆಗಳಿಗೆ ಯಾವುದೇ ನಿರ್ಬಂಧವಿರುವುದಿಲ್ಲ.

ಕೋವಿಡ್-19ಗೆ ಸಂಬಂಧಿಸಿದ ಕಾರ್ಯಕ್ಕೆ ನಿಯೋಜಿಸಿದ ಎಲ್ಲ ಕಚೇರಿ, ಅಧಿಕಾರಿಗಳು ಹಾಗೂ ಸಿಬ್ಬಂದಿ, ನ್ಯಾಯಾಲಯಗಳು ಹಾಗೂ ನ್ಯಾಯಾಂಗ ಕೆಲಸಗಳಿಗೆ ಸಂಬಂಧಿಸಿದ ಕಚೇರಿಗಳು ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

ಸರ್ಕಾರೇತರ ಸಂಸ್ಥೆಗಳ ಕಚೇರಿ ಹಾಗೂ ಸ್ವಯಂ ಸೇವಕರು ಇತರೆ ಎಲ್ಲ ಕಚೇರಿಗಳು ತಮ್ಮ ಸಿಬ್ಬಂದಿಯನ್ನು ಮನೆಯಿಂದಲೇ ಕೆಲಸ ನಿರ್ವಹಿಸಲು ಸೂಚಿಸತಕ್ಕದ್ದು. ಅಂತ್ಯಕ್ರಿಯೆ/ಶವಸಂಸ್ಕಾರಕ್ಕೆ 5 ಜನರಿಗೆ ಮಾತ್ರ ಅನುಮತಿನೀಡಲಾಗಿದೆ. ಸರ್ಕಾರಿ ಸಾರಿಗೆ ಸೇವೆಯನ್ನು ನಿರ್ಬಂಧಿಸಲಾಗಿದೆ.

ಖಾಸಗಿ ಸಾರಿಗೆ ಸೇವೆಯನ್ನು ತುರ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶವಿದ್ದು ವೈದ್ಯಕೀಯ ದಾಖಲೆಗಳನ್ನು ಚೆಕ್ ಪೋಸ್ಟ್‌ಗಳಲ್ಲಿ ತೋರಿಸತಕ್ಕದ್ದು. ಇತರೆ ಎಲ್ಲ ಖಾಸಗಿ ಸಾರಿಗೆಯನ್ನು ನಿರ್ಬಂಧಿಸಲಾಗಿದೆ. ವೈದ್ಯಕೀಯ ಹಾಗೂ ತುರ್ತು ಸೇವೆಗಳ ಎಲ್ಲ ಅಧಿಕಾರಿಗಳು/ಸಿಬ್ಬಂದಿ ಕರ್ತವ್ಯ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT