ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮಕ್ಕೆ ಅವಕಾಶ ನೀಡದಂತೆ ಸೂಚನೆ

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
Published 19 ಮಾರ್ಚ್ 2024, 4:27 IST
Last Updated 19 ಮಾರ್ಚ್ 2024, 4:27 IST
ಅಕ್ಷರ ಗಾತ್ರ

ಕೊಪ್ಪಳ: ‘ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನಾನುಕೂಲ ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ‘ಮಾ.25ರಿಂದ ಏ.6ರ ತನಕ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಅಕ್ರಮ ಚಟುವಟಿಕೆಗೆ ಅವಕಾಶ ಕೊಡದೇ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಪ್ರಶ್ನೆಪತ್ರಿಕೆ ಖಜಾನೆ ಇಲಾಖೆಗೆ ಠೇವಣಿಯಲ್ಲಿರಿಸಿ. ಪರೀಕ್ಷಾ ದಿನದಂದು ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ತೆಗೆದುಕೊಂಡು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಹೊಣೆ ಆಯಾ ಮಾರ್ಗಾಧಿಕಾರಿಗಳಿಗೆ ವಹಿಸಲಾಗಿದೆ’ ಎಂದರು.

‘ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ದಿನದಂದು ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರು, ಅಧಿಕಾರಿ, ಸಿಬ್ಬಂದಿ ಹೊರತುಪಡಿಸಿ, ಇನ್ನುಳಿದವರ ಪ್ರವೇಶಕ್ಕೆ ಅವಕಾಶ ನೀಡಬಾರದು. ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ‘ಪರೀಕ್ಷೆ ಬರೆಯುವ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪ್ರಥಮ ಚಿಕಿತ್ಸೆಗಾಗಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಕಿಟ್ ಮತ್ತು ಆರೋಗ್ಯ ಸಹಾಯಕರನ್ನು ನಿಯೋಜಿಸಿ. ಪರೀಕ್ಷೆ ಬರೆಯುವ ಅಂಗವಿಕಲ ವಿದ್ಯಾರ್ಥಿಗಳಿಗೆ ನೆಲ ಮಹಡಿಯಲ್ಲಿ ಸೂಕ್ತ ಆಸನದ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಹೇಮಂತ್‌ ಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, 75 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ತಾಲ್ಲೂಕು ನೋಡಲ್ ಅಧಿಕಾರಿಗಳು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪರೀಕ್ಷೆಗೆ 25481 ವಿದ್ಯಾರ್ಥಿಗಳು

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ ಒಟ್ಟು 25481 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿ 23 ಕೊಪ್ಪಳ 23 ಕುಷ್ಟಗಿ 15 ಹಾಗೂ ಯಲಬುರ್ಗಾ ತಾಲ್ಲೂಕಿನ 14 ಸೇರಿದಂತೆ ಒಟ್ಟು 75 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಪ್ರತಿ ಕೇಂದ್ರಕ್ಕೆ ಒಬ್ಬ ಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ಅಭಿರಕ್ಷಕರನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಬಿರಾದಾರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT